ಮುಖ್ಯಮಂತ್ರಿ ಸಿದ್ದರಾಮಯ್ಯ ಗದಗ ಜಿಲ್ಲಾ ಪ್ರವಾಸ ಇಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ (ನ.27) ಜಿಲ್ಲೆಯ ನರಗುಂದ ಹಾಗೂ ರೋಣ ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ (ನ.27) ಜಿಲ್ಲೆಯ ನರಗುಂದ ಹಾಗೂ ರೋಣ ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ 11.15ಕ್ಕೆ ನರಗುಂದದಲ್ಲಿ ನೂತನ ಎಂಜಿನಿಯರಿಂಗ್ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಕೃಷಿ ಹೊಂಡಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 12ಕ್ಕೆ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಸಾರ್ವಜನಿಕ ಸಮಾರಂಭದಲ್ಲಿ ₹1277.70 ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮಧ್ಯಾಹ್ನ 3ಕ್ಕೆ ಗಂಟೆಗೆ ಗಜೇಂದ್ರಗಡಕ್ಕೆ ಭೇಟಿ ನೀಡಿ, ಇಲ್ಲಿನ ಭೂಮರೆಡ್ಡಿ ಕಾಲೇಜಿನ ಆವರಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಭಾಗವಹಿಸಿ ₹246.28 ಕೋಟಿ ಅನುದಾನದಲ್ಲಿ ರೋಣ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಿಸಲಿದ್ದಾರೆ. ಸಂಜೆ 5ಕ್ಕೆ ಗಜೇಂದ್ರಗಡದಿಂದ ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿಗೆ ತೆರಳಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.