ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ರಕ್ಷಣೆಗೆ ಗ್ರಾಮಮಟ್ಟದಲ್ಲಿ ಸಮಿತಿ

Last Updated 1 ಡಿಸೆಂಬರ್ 2017, 6:15 IST
ಅಕ್ಷರ ಗಾತ್ರ

ಕೋಲಾರ: ‘ಇಂದಿನ ಮಕ್ಕಳೇ ದೇಶದ ಮುಂದಿನ ಪ್ರಜೆಗಳು. ಮಕ್ಕಳು ನೆಮ್ಮದಿಯ ಬದುಕು ಸಾಗಿಸಲು ಆರೋಗ್ಯಕರ ವಾತಾವರಣ ಸೃಷ್ಟಿಸುವುದು ಸಮಾಜದ ಜವಾಬ್ದಾರಿ’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗುರುರಾಜ್‌ ಜಿ.ಶಿರೋಳ್ ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮಕ್ಕಳ ಹಕ್ಕುಗಳು, ಮಕ್ಕಳ ಸ್ನೇಹಿ ಕಾನೂನುಗಳು, ವಿಶೇಷ ಮಕ್ಕಳ ಗ್ರಾಮ ಸಭೆ ಆಯೋಜನೆ ಕುರಿತು ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ರಕ್ಷಣೆಗಾಗಿ ಗ್ರಾಮಮಟ್ಟದಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿ ಸದಸ್ಯರು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಮಕ್ಕಳಿಗೆ ರಕ್ಷಣೆ ಇಲ್ಲವಾಗಿದೆ. ಮಕ್ಕಳ ಮೇಲೆ ಒಂದಲ್ಲಾ ಒಂದು ರೀತಿಯಲ್ಲಿ ದೌರ್ಜನ್ಯ ನಡೆಯುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸಮಾಜದ ಅಭಿವೃದ್ಧಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪಾತ್ರ ಬಹಳ ಮುಖ್ಯ. ಪ್ರಧಾನಮಂತ್ರಿ, ಮುಖ್ಯಮಂತ್ರಿ ಅಥವಾ ಸಂಘ ಸಂಸ್ಥೆಗಳ ಅಧ್ಯಕ್ಷರಿಂದ ಯೋಜನೆಗಳನ್ನು ಕಾರ್ಯಗೊಳಿಸಲು ಸಾಧ್ಯವಿಲ್ಲ. ಇದಕ್ಕೆ ಅಧಿಕಾರಿಗಳ ಹಾಗೂ ಸಿಬ್ಬಂದಿಯ ಸಹಕಾರ ಅಗತ್ಯ
ಎಂದರು.

ಗ್ರಾಮ ಸಭೆ ನಡೆಸಿ: ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಡಿಪಾಯವಿದ್ದಂತೆ. ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಹಾಗೂ ಮಕ್ಕಳ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಪರಿಹಾರ ಕಂಡುಕೊಳ್ಳಲು ವಿಶೇಷ ಮಕ್ಕಳ ಗ್ರಾಮ ಸಭೆಗಳನ್ನು ನಡೆಸುವುದು ಸೂಕ್ತ ಎಂದು ಅವರು
ಅಭಿಪ್ರಾಯಪಟ್ಟರು.

‘ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮಕ್ಕಳ ರಕ್ಷಣಾ ಸಮಿತಿಗಳನ್ನು ರಚಿಸಲಾಗಿದ್ದು, ಗ್ರಾಮ ಸಭೆಗಳನ್ನು ನಡೆಸಿ ಮಾಹಿತಿ ನೀಡುವಂತೆ ತಿಳಿಸಲಾಗಿತ್ತು. ಆದರೆ ಕೆಲವೇ ಪಂಚಾಯಿತಿಗಳಿಂದ ಮಾತ್ರ ಮಾಹಿತಿ ಬಂದಿದೆ. ಉಳಿದ ಗ್ರಾ.ಪಂ ವ್ಯಾಪ್ತಿಯಲ್ಲೂ ಸಭೆ ನಡೆಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ ಸೂಚಿಸಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು, ಆಯಾ ಗ್ರಾಮದ ವ್ಯಾಪ್ತಿಯ ಮುಖ್ಯ ಶಿಕ್ಷಕರು ಹಾಗೂ ಮಹಿಳಾ ಪ್ರತಿನಿಧಿಗಳು ಮಕ್ಕಳ ರಕ್ಷಣಾ ಸಮಿತಿಯಲ್ಲಿರುತ್ತಾರೆ. ಇವರು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿದರೆ ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಬಹುದು ಎಂದು ಅವರು
ಹೇಳಿದರು.

18 ವರ್ಷದೊಳಗಿನ ಮಕ್ಕಳ ಸಮೀಕ್ಷೆ ನಡೆಸಿ ವರದಿ ನೀಡಬೇಕು. ಆ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪಟ್ಟಿ ಮಾಡಿ ಇಲಾಖೆಗೆ ಕಳುಹಿಸಿಕೊಡಬೇಕು. ಇದರಿಂದ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಪೋಷಕರ ನಿರ್ಲಕ್ಷ್ಯಕ್ಕೆ ತುತ್ತಾಗಿರುವ  ಮತ್ತು ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳನ್ನು ಪತ್ತೆ ಮಾಡಿ ಪೋಷಣೆ ಮಾಡಬೇಕು. ಗ್ರಾಮೀಣ ಭಾಗದಲ್ಲಿ ಶಾಲೆ ಬಿಟ್ಟ ಮಕ್ಕಳ ಸಂಖ್ಯೆ ಏರು ಗತಿಯಲ್ಲಿ ಸಾಗಿದೆ. ಅಂತಹ ಮಕ್ಕಳನ್ನು ಗುರುತಿಸಿ ಮತ್ತೆ ಶಾಲೆಗೆ ಕರೆತರಬೇಕು.

ಕಾಟಾಚಾರಕ್ಕೆ ಸಮಿತಿ ಸಭೆಗಳನ್ನು ನಡೆಸಬಾರದು. ಸಮಿತಿಯ ಎಲ್ಲಾ ಸದಸ್ಯರು ಸಭೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಸದಸ್ಯರು ತಮ್ಮ ಅಭಿಪ್ರಾಯ ದಾಖಲು ಮಾಡಿ ವರದಿ ಕಳುಹಿಸಬೇಕು ಎಂದು ಅವರು ಹೇಳಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಸೌಮ್ಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸದಸ್ಯೆ ಗೀತಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT