ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ

Last Updated 13 ಡಿಸೆಂಬರ್ 2017, 9:23 IST
ಅಕ್ಷರ ಗಾತ್ರ

ಚಾಮರಾಜನಗರ: ‘ಪ್ರಸ್ತುತದ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿ ಹೆಣ್ಣುಮಕ್ಕಳು ಸಹ ಸರ್ಕಾರದಿಂದ ದೊರೆಯುತ್ತಿರುವ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ವಿದ್ಯಾಭ್ಯಾಸ ಪಡೆದುಕೊಳ್ಳಬೇಕು’ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಸಲಹೆ ನೀಡಿದರು.

ತಾಲ್ಲೂಕಿನ ರಂಗಸಂದ್ರ (ಬೂದಿಪಡಗ) ಗ್ರಾಮದಲ್ಲಿ ಇತ್ತೀಚೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಬೆಂಗಳೂರು ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ₹10 ಕೋಟಿ ವೆಚ್ಚದಡಿ ನಿರ್ಮಿಸಲಾಗುತ್ತಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಸಂಕೀರ್ಣ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಮುಖ್ಯವಾಗಿ ಹೆಣ್ಣುಮಕ್ಕಳ ಶ್ರೇಯೋಭಿ ವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿದೆ. ತಾಲ್ಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದೆ ಎಂದರು.

ಶೈಕ್ಷಣಿಕ ಅಗತ್ಯಕ್ಕೆ ಪೂರಕವಾಗಿ ವಿದ್ಯಾರ್ಥಿನಿಯರ ತರಗತಿ ಕೊಠಡಿಗಳು, ವಸತಿ, ಬೋಧಕ-, ಬೋಧಕೇತರ ಕೊಠಡಿ, ಗ್ರಂಥಾಲಯ, ಶೌಚಾಲಯ, ಪ್ರಯೋಗಾಲಯ, ವಸತಿ ಶಾಲೆಗೆ ರಸ್ತೆ, ಚರಂಡಿ, ವಿದ್ಯುತ್, ಕುಡಿಯುವ ನೀರು ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

ವಸತಿ ಶಾಲೆಯಲ್ಲಿ 6 ರಿಂದ 10ನೇ ತರಗತಿಯವರೆಗೆ ಬಡ, ದುರ್ಬಲ ವರ್ಗದ ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಂಡು ಶಿಕ್ಷಣ ನೀಡಲಾಗುತ್ತದೆ. ಈ ಮೂಲಕ ಅವರನ್ನು ಉತ್ತಮ ಮಾನವ ಸಂಪನ್ಮೂಲಗಳನ್ನಾಗಿ ರೂಪಿಸಲಾಗುತ್ತದೆ ಎಂದರು.

ಸುಸಜ್ಜಿತವಾಗಿ ವಸತಿ ಶಾಲಾ ಕಟ್ಟಡ ನಿರ್ಮಿಸುವ ಜತೆಗೆ, ಯಾವುದೇ ಲೋಪವಾಗದಂತೆ ಕಾಮಗಾರಿ ಕೈಗೊಳ್ಳಬೇಕು ಎಂದು ಸ್ಥಳದಲ್ಲಿದ್ದ ಎಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ. ರಾಮಚಂದ್ರ ಮಾತನಾಡಿ, ಪೋಷಕರು ಮಕ್ಕಳಿಗೆ ಆಸ್ತಿ ಮಾಡುವ ಬದಲು ಅವರನ್ನೇ ದೇಶದ ಆಸ್ತಿಯನ್ನಾಗಿ ರೂಪಿಸಬೇಕು. ಸರ್ಕಾರದಿಂದ ದೊರೆಯುವ ಸೌಲಭ್ಯ ಬಳಸಿಕೊಂಡು ಉನ್ನತ ಶಿಕ್ಷಣ ಕೊಡಿಸಬೇಕು ಎಂದು ಸಲಹೆ ನೀಡಿದರು.

ಎಪಿಎಂಸಿ ಅಧ್ಯಕ್ಷ ಬಿ.ಕೆ. ರವಿಕುಮಾರ್, ತಾಲ್ಲೂಕು ಪಂಚಾಯಿತಿ ಸದಸ್ಯ ಕುಮಾರನಾಯ್ಕ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ, ಉಪಾಧ್ಯಕ್ಷ ಶಿವನಾಯ್ಕ, ಮಾಜಿ ಅಧ್ಯಕ್ಷ ಶಾಮೀರ್ ಪಾಷಾ, ಮುಖಂಡರಾದ ಜಡೆಯಪ್ಪ, ಗಣೇಶನಾಯ್ಕ, ಉಲ್ಲೇಶ್‌ನಾಯ್ಕ, ಪ್ರಾಂಶುಪಾಲ ಮಹದೇವಪ್ರಸಾದ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT