ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಪಿಜಿ, ಪೆಟ್ರೋಲ್‌ ದರ ಏರಿಕೆಗೆ ಖಂಡನೆ

Last Updated 14 ಡಿಸೆಂಬರ್ 2017, 9:34 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಎಲ್‌ಪಿಜಿ (ಅಡುಗೆ ಅನಿಲ), ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಹನುಮಂತಪ್ಪ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎಂ.ಎಲ್ ಮೂರ್ತಿ ಮಾತನಾಡಿ, ‘ಪ್ರಣಾಳಿಕೆಯಲ್ಲಿ ನೀಡಿದ ಆಶ್ವಾಸನೆಗಳನ್ನು ಬಿಜೆಪಿ ಈಡೇರಿಸಿಲ್ಲ. ಪ್ರಧಾನಿ ಮೋದಿ ಅವರು ಮೂರು ವರ್ಷದ ಆಡಳಿತಾದವಧಿಯಲ್ಲಿ ಅಡುಗೆ ಅನಿಲ ಸಿಲಿಂಡರ್‌ ಬೆಲೆ 14 ಬಾರಿ ಏರಿಕೆ ಮಾಡಲಾಗಿದೆ’ ಎಂದು ದೂಷಿಸಿದರು.

ಗರಿಷ್ಠ ಮುಖಬೆಲೆಯ ನೋಟು ರದ್ದತಿ ಕ್ರಮ, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಅನುಷ್ಠಾನಗೊಳಿಸಿದಿಂದ ಜನರು ತೊಂದರೆ ಅನುಭವಿಸಿದ್ದಾರೆ ಎಂದು ದೂಷಿಸಿದರು. ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಡಾ.ಡಿ.ಎಲ್.ವಿಜಯಕುಮಾರ್ ಮಾತನಾಡಿ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಗಿದ್ದರೂ ಕೇಂದ್ರ ಸರ್ಕಾರ ತೈಲ ಉತ್ಪನ್ನಗಳ ಬೆಲೆ ಕಡಿಮೆಗೊಳಿಸಿಲ್ಲ. ಅಡುಗೆ ಅನಿಲದ ದರವನ್ನು ಈಗ ₹ 810ಕ್ಕೆ ಏರಿಸಿದೆ’ ಎಂದು ದೂರಿದರು.

‘ಕೇಂದ್ರಸರ್ಕಾರಕ್ಕೆ ಜನಪರ ಕಾಳಜಿ ಇಲ್ಲ. ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿ ಮಧ್ಯಮ ವರ್ಗ ಹಾಗೂ ಬಡ ಜನರಿಗೆ ತೊಂದರೆ ನೀಡುತ್ತಿದೆ’ ಎಂದು ದೂಷಿಸಿದರು.

ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಕೆ.ಮಹಮದ್ ಮಾತನಾಡಿ, ‘ಕೇಂದ್ರ ಸಚಿವ ಅನಂತ್‌ಕುಮಾರ್ ಹೆಗಡೆ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಅವರು ಜನರ ಸಮಸ್ಯೆಗಳನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡುತ್ತಿಲ್ಲ. ರಾಜ್ಯದಲ್ಲಿ ಮತೀಯ ರಾಜಕೀಯ ನಡೆಸುತ್ತಿದ್ದಾರೆ’ ಎಂದು ಲೇವಡಿ ಮಾಡಿದರು.

ಪಂಚಾಯತ್ ರಾಜ್ ಸಂಘಟನೆ ರಾಜ್ಯ ಅಧ್ಯಕ್ಷ ಬಿ.ಎಂ ಸಂದೀಪ್, ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ವಿ.ಶಿವಕುಮಾರ್, ನಗರಸಭೆ ಸದಸ್ಯ ಹಿರೇಮಗಳೂರು ಪುಟ್ಟಸ್ವಾಮಿ ಇದ್ದರು.

ವರ್ಗಾವಣೆ ವಿರೋಧಿಸಿ ಪ್ರತಿಭಟನೆ

ಚಿಕ್ಕಮಗಳೂರು: ‘ಉಪ ಅರಣ್ಯಸಂರಕ್ಷಣಾಧಿಕಾರಿ ಎ.ಚಂದ್ರಣ್ಣ ಅವರ ವರ್ಗಾವಣೆ ಮಾಡಿರುವುದನ್ನು ರದ್ದುಪಡಿಸಬೇಕು’ ಎಂದು ದಲಿತ ಸಂಘಟನೆಗಳ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಆಜಾದ್ ಪಾರ್ಕ್‌ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ‘ಉಪ ಅರಣ್ಯಸಂರಕ್ಷಣಾಧಿಕಾರಿ ಎ.ಚಂದ್ರಣ್ಣ ಅವರು ಕೆಲ ತಿಂಗಳ ಹಿಂದೆ ಜಿಲ್ಲೆಗೆ ವರ್ಗಾವಣೆಯಾಗಿ ಬಂದಿದ್ದರು.

ಸುಪ್ರೀಂ ಕೋರ್ಟ್ ಆದೇಶದಂತೆ ಮಸಗಲಿ ಅರಣ್ಯ ಪ್ರದೇಶದಲ್ಲಿ ಬಲಾಢ್ಯರ ಒತ್ತುವರಿ ತೆರವಿಗೆ ಕ್ರಮ ಕೈಗೊಂಡಿದ್ದರು. ಪ್ರಭಾವಿಗಳ ಒತ್ತಡಕ್ಕೆ ಮಣಿದು ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ’ ಎಂದು ಆರೋಪಿಸಿದರು.

‘ಅರಣ್ಯ ಅಧಿಕಾರಿಗಳಾದ ಅಮರನಾಥ್, ಬಸವರಾಜಯ್ಯ, ಚಂದ್ರಣ್ಣ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ’ ದೂಷಿದರು.

ದಲಿತ ಜಾಗೃತಿ ವೇದಿಕೆ ಜಿಲ್ಲಾಘಟಕದ ಅಧ್ಯಕ್ಷ ಕೆ.ಎನ್.ಮಂಜುನಾಥ್, ದಲಿತ ಸಂಘರ್ಷ ಸಮಿತಿ ರಾಜ್ಯ ವಿಭಾಗೀಯ ಸಂಚಾಲಕ ಡಿ.ಎ.ಶ್ರೀನಿವಾಸ್, ಜಿಲ್ಲಾ ಸಂಚಾಲಕ ವಸಂತ್ ಕುಮಾರ್ ಇದ್ದರು.

ಕರಗಡ ಕಾಮಗಾರಿ ಅವೈಜ್ಞಾನಿಕ: ಆರೋಪ

ಚಿಕ್ಕಮಗಳೂರು: ಕರಗಡ ಏತ ನೀರಾವರಿ ಯೋಜನೆ ಕಾಮಗಾರಿಯ ಲೋಪವಾಗಿದ್ದು, ಅದನ್ನು ಸರಿಪಡಿಸಬೇಕು’ ಎಂದು ಕರುನಾಡು ಪಾರ್ಟಿ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಜಮಾಯಿಸಿದ ಕಾರ್ಯಕರ್ತರು ಆಜಾದ್ ಪಾರ್ಕ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆನಡೆಸಿದರು. ‘ಕರಗಡ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಗುತ್ತಿಗೆದಾರ ಅವೈಜ್ಞಾನಿಕವಾಗಿ ನಿರ್ವಹಿಸಿದ್ದಾರೆ.

ಕಾಮಗಾರಿಯಲ್ಲಿ ಲೋಪಗಳನ್ನು ಸರಿಪಡಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವಿಕಲರ ವೇತನವನ್ನು ಪರಿಷ್ಕರಿಸಿ ₹ 2,000 ನಿಗದಿಪಡಿಸಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕರುನಾಡ ಪಾರ್ಟಿ ಜಿಲ್ಲಾಘಟಕದ ಅಧ್ಯಕ್ಷ ಎಚ್.ಡಿ.ರೇವಣ್ಣ, ಗಿರೀಶ್, ತಮ್ಮೇಗೌಡ, ರಾಮೇಗೌಡ, ಮರಿಯಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT