ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಐ ತನಿಖೆಯಿಂದ ಸತ್ಯಾಂಶ: ರತ್ನಾಕರ ಹೆಗ್ಡೆ

Last Updated 15 ಡಿಸೆಂಬರ್ 2017, 6:38 IST
ಅಕ್ಷರ ಗಾತ್ರ

ಉಡುಪಿ: ಗಲಭೆಯಾಗುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ಇದ್ದರೂ ಸೂಕ್ತ ಕ್ರಮ ಕೈಗೊಳ್ಳದ ಕಾರಣ ಹೊನ್ನಾವರದ ಪರೇಶ್ ಮೇಸ್ತ ಕೊಲೆ ನಡೆದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಆರೋಪಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಗನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಶವದ ಮೇಲೆ ಜಜ್ಜಿದ ಗುರುತು ಇತ್ತು. ಶವ ಕಪ್ಪು ಬಣ್ಣಕ್ಕೆ ತಿರುಗಿತ್ತು ಎಂದು ಪರೇಶ್ ಅವರ ತಂದೆ ಆರೋಪಿಸಿದ್ದಾರೆ. ಆದರೆ ಶವ ಪರೀಕ್ಷೆ ವರದಿಯಲ್ಲಿ ಅದಕ್ಕೆ ಸಂಬಂಧಿಸಿದ ವಿಷಯಗಳಿಲ್ಲ. ವರದಿಯನ್ನು ತಿರುಚಿರುವ ಸಾಧ್ಯತೆ ಇದೆ. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರ್ಧರಿಸಿದೆ. ಆ ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಹಾಗೂ ಆರೋಪಿಗಳ ಬಂಧನವಾಗಲಿದೆ ಎಂಬ ವಿಶ್ವಾಸ ಇದೆ ಎಂದರು.

19 ವರ್ಷದ ಪರೇಶ್ ಇಡೀ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ. ಆತನ ಸಾವಿನ ಪರಿಣಾಮ ಕುಟುಂಬ ಸಂಕಷ್ಟದಲ್ಲಿದೆ. ಆದ್ದರಿಂದ ಸರ್ಕಾರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಪರೇಶ್ ಮೇಸ್ತ ಕೊಲೆಯನ್ನು ವಿರೋಧಿಸಿ ಹಾಗೂ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಇದೇ 18ರಂದು ಹೊನ್ನಾವರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ಸೇರಿದಂತೆ ಹಿರಿಯ ನಾಯಕರು ಪಾಲ್ಗೊಳ್ಳುವರು. ಜಿಲ್ಲೆಯಿಂದಲೂ ಕಾರ್ಯಕರ್ತರು ಅದರಲ್ಲಿ ಭಾಗವಹಿಸುವರು ಎಂದರು.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಕರ್ನಾಟಕ ಫೋರಂ ಫಾರ್ ಡಿಗ್ನಿಟಿ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. ಈಗ ಅದರ ದುಷ್ಪರಿಣಾಮ ಎದುರಿಸಬೇಕಾಗಿದೆ. ಹಿಂದೂ ಯುವಕರ ಕೊಲೆಗಳು ನಡೆಯುತ್ತಿವೆ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ, ನಗರ ಘಟಕದ ಅಧ್ಯಕ್ಷ ಪ್ರಭಾಕರ ಪೂಜಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT