ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡೇ ವರ್ಷದಲ್ಲಿ ಜಿಲ್ಲೆಗೆ ಎತ್ತಿನಹೊಳೆ

Last Updated 22 ಡಿಸೆಂಬರ್ 2017, 7:24 IST
ಅಕ್ಷರ ಗಾತ್ರ

ಮುಳಬಾಗಿಲು: ‘ಕೋಲಾರ ಜಿಲ್ಲೆಯಲ್ಲಿ ವಿಶ್ವವಿದ್ಯಾಲಯ ನಿರ್ಮಾಣವಾಗಿರುವುದರಿಂದ, ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳೂ ಉನ್ನತ ಶಿಕ್ಷಣ ಪಡೆದುಕೊಳ್ಳಲು ಅನುಕೂಲವಾಗಲಿದೆ’ ಎಂದು ಸಚಿವ ಕೆ.ಆರ್.ರಮೇಶ್‍ ಕುಮಾರ್ ಅಭಿಪ್ರಾಯಪಟ್ಟರು.

ನಗರದ ಅಮರಜ್ಯೋತಿ ವಿದ್ಯಾಸಂಸ್ಥೆ ಆವರಣದಲ್ಲಿ ಕಾಂಗ್ರೆಸ್ ತಾಲ್ಲೂಕು ಘಟಕದಿಂದ ಗುರುವಾರ ಹಮ್ಮಿಕೊಳ್ಳಲಾದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.

ಉನ್ನತ ವ್ಯಾಸಂಗಕ್ಕೆ ಕೋಲಾರ ಜಿಲ್ಲೆಯ ವಿದ್ಯಾರ್ಥಿಗಳು ಹೊರ ಜಿಲ್ಲೆಗಳಿಗೆ ವಲಸೆ ಹೋಗಬೇಕಾಗಿತ್ತು. ಆದರೆ ಇದೀಗ ಇಲ್ಲಿಯೇ ವಿಶ್ವವಿದ್ಯಾಲಯ ಆಗಿರುವುದು ತುಂಬಾ ಸಂತಸ ತಂದಿದೆ ಎಂದರು.

ಈ ಹಿಂದೆ ಜಿಲ್ಲೆಯಲ್ಲಿನ ಸಾಕಷ್ಟು ಮಂದಿ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಬೇಕಾದರೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಹೊರ ಜಿಲ್ಲೆಗಳಿಗೆ ವಲಸೆ ಹೋಗಿ ತಮ್ಮ ವಿದ್ಯಾಭ್ಯಾಸ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ಇತ್ತು ಎಂದು ತಿಳಿಸಿದರು.

ಜಿಲ್ಲೆಯ ರೈತರು ಜಮೀನುಗಳ ಪಿ-ನಂಬರ್‍ಗಳಿಂದ ತುಂಬಾ ಸಂಕಷ್ಟ ಅನುಭವಿಸುತ್ತಿದ್ದಾರೆ. ಕೋಲಾರವನ್ನ ಮುಂದಿನ 2018ರ ಜನವರಿ 31ರ ಒಳಗಾಗಿ ಪೋಡಿ ಮುಕ್ತ ಜಿಲ್ಲೆಯನ್ನಾಗಿ ಮಾಡಲಾಗುವುದು. ಜಿಲ್ಲೆಯ 126 ಕೆರೆಗಳಿಗೆ ನೀರು ಹರಿಸುವ ₹ 1300 ಕೋಟಿ ಯೋಜನೆಯ ಕೆ.ಸಿ ಯೋಜನೆ ಪ್ರಾರಂಭಗೊಂಡ 13 ತಿಂಗಳಿನಲ್ಲಿ ಪೂರ್ಣಗೊಳ್ಳುತ್ತಿದ್ದು, ಮುಂದಿನ ಎರಡು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ ಜಿಲ್ಲೆಗೆ ತರಲಾಗುವುದು ಎಂದು ತಿಳಿಸಿದರು.

ಸಂಸದ ಕೆ.ಹೆಚ್.ಮುನಿಯಪ್ಪ ಮಾತನಾಡಿ, ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಲಾಗುವುದು’ ಹೇಳಿದರು.

ಶಾಸಕ ಕೊತ್ತೂರು ಜಿ.ಮಂಜುನಾಥ್ ಮಾತನಾಡಿ, ‘ಲಂಚಮುಕ್ತ ತಾಲ್ಲೂಕನ್ನಾಗಿ ಆಡಳಿತ ನಡೆಸಲಾಗುತ್ತಿದ್ದು, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ತಾಲ್ಲೂಕಿನ 4 ಕ್ಷೇತ್ರಗಳಲ್ಲಿ 4 ಸ್ಥಾನಗಳೂ ಜಯಗಳಿಸಿದ್ದು ಸಂತಸ ತಂದಿದೆ’ ಎಂದರು.

ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ₹ 1500 ಕೋಟಿ ಅನುದಾನ ಬಿಡುಗಡೆ ಮಾಡಿಸಲಾಗಿದ್ದು, ಈ ಬಗ್ಗೆ ಕಿರು ಪುಸ್ತಕ ಹೊತ್ತಿಗೆಯನ್ನು ತಾಲ್ಲೂಕಿನ ಪ್ರತಿ ಮನೆಗೂ ತಲುಪಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಚಂದ್ರಾರೆಡ್ಡಿ, ಜಿಲ್ಲಾ ಪಂಚಾಯಿತಿ ಸದ್ಯರಾದ ಉತ್ತೂರು ಅರವಿಂದ್, ಪ್ರಕಾಶ್ ರಾಮಚಂದ್ರ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಸಿ.ನೀಲಕಂಠೇಗೌಡ, ಸದಸ್ಯರಾದ ಎ.ವಿ.ಶ್ರೀನಿವಾಸ್, ಆವಣಿ ರವಿಶಂಕರ್, ಟಿ.ಬಾಲಕೃಷ್ಣ, ಆವಣಿ ಬ್ಲಾಕ್ ಅಧ್ಯಕ್ಷ ಆನಂದರೆಡ್ಡಿ, ಯುವ ಕಾಂಗ್ರೇಸ್ ಅಧ್ಯಕ್ಷ ಎಂ.ಅಮರ್, ನಗರಸಭೆ ಸದಸ್ಯ ಜಗನ್‍ಮೋಹನ್‍ರೆಡ್ಡಿ, ಎಸ್‌ಸಿ ಕಾಂಗ್ರೆಸ್ ಅಧ್ಯಕ್ಷ ಕಾರ್ ಶ್ರೀನಿವಾಸ್, ದೇವರಾಯಸಮುದ್ರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಮ್ಮನಹಳ್ಳಿ ಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT