ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ಸ್ವಾಗತಕ್ಕೆ ಸಕಲ ಸಿದ್ಧತೆ

Last Updated 29 ಡಿಸೆಂಬರ್ 2017, 6:01 IST
ಅಕ್ಷರ ಗಾತ್ರ

ಬಿಡದಿ (ರಾಮನಗರ): ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಸ್ವಾಗತಕ್ಕೆ ಇಲ್ಲಿನ ಅಮೃತಾ ಎಂಜಿನಿಯರಿಂಗ್‌ ಮತ್ತು ಮ್ಯಾನೇಜ್‌ಮೆಂಟ್‌ ಸೈನ್ಸ್‌ ಅಂಗಳ ಸಿದ್ಧವಾಗಿದೆ. ಇದೇ 30ರಂದು ಇಲ್ಲಿ ನಿರ್ಮಿಸಲಾದ ಹೊಸ ಕ್ಯಾಂಪಸ್‌ ಅನ್ನು ರಾಷ್ಟ್ರಪತಿ ಉದ್ಘಾಟಿಸಲಿದ್ದಾರೆ. ಇದೇ ವೇಳೆ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ 111ನೇ ವಾರ್ಷಿಕೋತ್ಸವ ಸಮಾರಂಭವೂ ನಡೆಯಲಿದೆ ಎಂದು ಸಂಘದ ಕಾರ್ಯಾಧ್ಯಕ್ಷ ಡಾ. ವೀರಣ್ಣ ಚರಂತಿಮಠ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಅಂದು ಮಧ್ಯಾಹ್ನ 3.30ಕ್ಕೆ ರಾಷ್ಟ್ರಪತಿ  ಕ್ಯಾಂಪಸ್‌ಗೆ ಆಗಮಿಸಲಿದ್ದಾರೆ. 4.30ರವರೆಗೆ ಕಾರ್ಯಕ್ರಮ ನಿಗದಿಯಾಗಿದೆ. ಅವರೊಟ್ಟಿಗೆ ರಾಜ್ಯಪಾಲ ವಜೂಭಾಯ್‌ ವಾಲಾ, ಕೇಂದ್ರ ಸಚಿವ ಅನಂತಕುಮಾರ್, ಇಂಧನ ಸಚಿವ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕ ಎಚ್‌.ಸಿ. ಬಾಲಕೃಷ್ಣ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸುಮಾರು ಐದು ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಎಲ್ಲರಿಗೂ ಆಸನದ ವ್ಯವಸ್ಥೆ ಮಾಡಲಾಗಿದೆ. ಆಸಕ್ತರಿಗೆ ಪಾಸ್ ಮೂಲಕ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಒಟ್ಟು 15.5 ಎಕರೆ ವಿಸ್ತೀರ್ಣದಲ್ಲಿ ಈ ಕ್ಯಾಂಪಸ್ ನಿರ್ಮಾಣವಾಗಿದೆ. ಮುಂದಿನ ವರ್ಷ ಇಲ್ಲಿ ಸಿಬಿಎಸ್‌ಇ ಶಾಲೆ ಹಾಗೂ ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ಪದವಿಪೂರ್ವ ಹಾಗೂ ಪದವಿ ಕಾಲೇಜು ಪ್ರಾರಂಭಿಸಲು ಯೋಜಿಸಲಾಗಿದೆ ಎಂದರು.

ಸಂಘ ಸದ್ಯ 151 ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದು, 52 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 5070 ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಂದಿನ ವರ್ಷ ಬೆಂಗಳೂರಿನಲ್ಲಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ 1100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ತೆರೆಯಲು ಉದ್ದೇಶಿಸಲಾಗಿದೆ. ಅಂತೆಯೇ ಬಾಗಲಕೋಟೆಯಲ್ಲಿ ಹೋಮಿಯೋಪತಿ, ಫಿಜಿಯೋಥೆರೆಪಿ ಮಹಾವಿದ್ಯಾಲಯ ಹಾಗೂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸೂಪರ್ ಸ್ಪೆಷಾಲಿಟಿ ವಿಭಾಗ ತೆರೆಯಲು ಉದ್ದೇಶಿಸಲಾಗಿದೆ ಎಂದರು.

ಸಂಘದ 111ನೇ ವರ್ಷಾಚರಣೆ ಅಂಗವಾಗಿ ತಲಾ 1111 ಮಂದಿಗೆ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ, ಸಾಮಾನ್ಯ ಹೆರಿಗೆ ಮತ್ತು ಶಸ್ತ್ರಚಿಕಿತ್ಸೆ ಹೆರಿಗೆ ಹಾಗೂ ಸಾಮಾನ್ಯ ಶಸ್ತ್ರಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಸಿದ್ದಣ್ಣ ಶೆಟ್ಟರ, ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ ಹಾಗೂ ಮಹಾಂತೇಶ ಶೆಟ್ಟರ, ಬಸವರಾಜು ಕೆಂಗಾಪುರ, ಕುಮಾರ್ ಹಿರೇಮಠ ಇದ್ದರು.

ರಾಷ್ಟ್ರಪತಿ ಆಗಮನದ ಹಿನ್ನೆಲೆಯಲ್ಲಿ ಬೆಂಗಳೂರು–ಮೈಸೂರು ಹೆದ್ದಾರಿ ತಿರುವಿನಿಂದ ಹಿಡಿದು ಅಮೃತಾ ಕಾಲೇಜಿನವರೆಗೆ ರಸ್ತೆ ದುರಸ್ತಿ ಕಾರ್ಯ ಭರದಿಂದ ಸಾಗಿದೆ.
ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಲಾಗುತ್ತಿದ್ದು, ಮೇಲೆ ಡಾಂಬರಿನ ಹೊದಿಕೆ ಹಾಕಲಾಗುತ್ತಿದೆ.

ಫುಟ್‌ಪಾತ್‌ಗಳಲ್ಲಿನ ಕಳೆ ತೆಗೆಯುವ ಕೆಲಸದಲ್ಲಿ ಕಾರ್ಮಿಕರು ನಿರತರಾಗಿದ್ದಾರೆ. ರಸ್ತೆಯಲ್ಲಿನ ದಿಬ್ಬಗಳನ್ನು (ಹಂಪ್‌) ಒಡೆದು ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುತ್ತಿದೆ. ಕಾಲೇಜಿನ ಕ್ಯಾಂಪಸ್‌ನಲ್ಲಿ ಕಾರ್ಯಕ್ರಮಕ್ಕೆಂದು ಭವ್ಯ ವೇದಿಕೆ ಸಿದ್ಧವಾಗಿದೆ.

* * 

ಸಂಘದ ಕಾರ್ಯಕ್ರಮವೊಂದರಲ್ಲಿ ಇದೇ ಮೊದಲ ಬಾರಿ ರಾಷ್ಟ್ರಪತಿ ಪಾಲ್ಗೊಳ್ಳುತ್ತಿದ್ದಾರೆ. ಅವರ ಸ್ವಾಗತಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ
ವೀರಣ್ಣ , ಚರಂತಿಮಠ ಕಾರ್ಯಾಧ್ಯಕ್ಷ ಬ.ವೀ.ವಿ. ಸಂಘ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT