ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ’

Last Updated 16 ಜನವರಿ 2018, 9:49 IST
ಅಕ್ಷರ ಗಾತ್ರ

ಸೋಮವಾರಪೇಟೆ: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂಗಳ ಹತ್ಯೆ ನಿರಂತರವಾಗಿ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಕುಸಿದಿದೆ, ಮಹಿಳೆಯರು ಹೊರಗಡೆ ಬರಲು ಹೆದರುವ ಸ್ಥಿತಿ ನಿರ್ಮಾಣವಾಗುವ ಮೂಲಕ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ’ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ದೂರಿದರು. ಸೋಮವಾರ ಪಟ್ಟಣದ ಜೇಸಿ ವೇದಿಕೆಯಲ್ಲಿ ನಡೆದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಸಿದ್ದರಾಮಯ್ಯ ಅವರ ಆಡಳಿತದಲ್ಲಿ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ಅಲ್ಪಸಂಖ್ಯಾತರನ್ನು ಓಲೈಸಿ ಮತಬ್ಯಾಂಕ್‌ ಸೃಷ್ಟಿಸಿಕೊಳ್ಳಲು ಕಾಂಗ್ರೆಸ್‌ ಮುಂದಾಗಿದೆ. ದೇಶದಲ್ಲಿ ಅಲ್ಪಸಂಖ್ಯಾತರನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಓಲೈಕೆ ಮಾಡಿದ ಪರಿಣಾಮ ಹಾಗೂ ಪಾಕಿಸ್ತಾನದ ಎಲ್ಲಾ ಆಟಾಟೋಪಗಳನ್ನು ಪೋಷಿಸಿಕೊಂಡು ಬಂದ ಹಿನ್ನೆಲೆಯಲ್ಲಿ ಉಗ್ರಗಾಮಿಗಳ ಸಂಖ್ಯೆ ಹೆಚ್ಚಾಗಿದೆ. ದೇಶದಲ್ಲಿ ಮೋದಿ ಸರ್ಕಾರದ ಆರ್ಥಿಕ ಸಾಧನೆಯನ್ನು ವಿಶ್ವ ಬ್ಯಾಂಕ್, ಏಷಿಯಾ ಬ್ಯಾಂಕ್ ಮೆಚ್ಚಿಕೊಂಡಿದೆ. ಅಲ್ಲದೇ ವಿಶ್ವದ ದೊಡ್ಡಣ್ಣ ಅಮೆರಿಕದ ಅಧ್ಯಕ್ಷ ಟ್ರಂಪ್ ಅವರು ಕೂಡ ಮೋದಿ ಅವರನ್ನು ಎದ್ದುನಿಂತು ಗೌರವ ಸಲ್ಲಿಸಿರುವುದು ಮೋದಿ ಅವರ ಆಡಳಿತಕ್ಕೆ ಗೌರವ ಸಲ್ಲಿಸುತ್ತಿರುವುದು ಕೇಂದ್ರ ಸರ್ಕಾರದ ಸಾಧನೆಯಾಗಿದೆ’ ಎಂದು ಹೇಳಿದರು.

ರಾಜ್ಯ ಸರ್ಕಾರ ಕೊಡಗು ಜಿಲ್ಲೆಯನ್ನು ತೀವ್ರ ನಿರ್ಲಕ್ಷ್ಯಕ್ಕೀಡು ಮಾಡಿರುವುದರಿಂದ ಅಭಿವೃದ್ಧಿ ವಂಚಿತವಾಗಿದೆ. ಕೊಡಗಿನ ಶಾಸಕರಾದ ಕೆ.ಜಿ. ಬೋಪಯ್ಯ ಹಾಗೂ ಅಪ್ಪಚ್ಚು ರಂಜನ್‌ ಅವರು ಬಿಜೆಪಿ ಸರ್ಕಾರವಿದ್ದ ಸಂದರ್ಭ ವಿಧಾನಸಭೆ ಅಧ್ಯಕ್ಷರಾಗಿ, ಸಚಿವರಾಗಿ ಕೊಡಗಿನ ಸಮಗ್ರ ಅಭಿವೃದ್ಧಿಯ ಕುರಿತು ಗಮನಹರಿಸಿದ್ದರು. ಮುಂದಿನ ಚುನಾವಣೆಯಲ್ಲಿ ಕೊಡಗಿನ ಎರಡು ಕ್ಷೇತ್ರಗಳಲ್ಲಿಯೂ ಬಿಜೆಪಿಯನ್ನು ಗೆಲ್ಲಿಸಬೇಕು ಎಂದೂ ಮನವಿ ಮಾಡಿದರು. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ 150 ಸ್ಥಾನ ಪಡೆದು ಅಧಿಕಾರ ನಡೆಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲ ಪಡಿಸುವುದಾಗಿ ತಿಳಿಸಿದರು.

ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಕಾಳನ ರವಿ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ಸುನಿಲ್ ಸುಬ್ರಮಣಿ, ರಾಜ್ಯ ಕಾರ್ಯದರ್ಶಿ ಮನು ಮುತ್ತಪ್ಪ, ಜಿಲ್ಲಾ ಅಧ್ಯಕ್ಷ ಬಿ.ಬಿ. ಭಾರತೀಶ್, ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಜಿ. ಮೇದಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಮಾಚಿಮಡ ಗಪ್ಪಣ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಯಮುನಾ ಚಂಗಪ್ಪ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್, ಪಕ್ಷಕ್ಕೆ ಸೇರ್ಪಡೆಗೊಂಡ ಪ್ರಮುಖರಾದ ವಿ.ಎಂ. ವಿಜಯ್, ಎಸ್.ಬಿ. ಭರತ್‌ಕುಮಾರ್, ಎನ್.ಆರ್. ಅಜೀಶ್‌ಕುಮಾರ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಉಪಸ್ಥಿತರಿದ್ದರು. ಸಮಾರಂಭಕ್ಕೂ ಮುನ್ನ ಇಲ್ಲಿನ ವಿವೇಕಾನಂದ ವೃತ್ತದಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು.

* * 

ಚುನಾವಣೆಯ ನಂತರ ಜೆಡಿಎಸ್‌ ಸರ್ಕಾರ ರಚಿಸುವಲ್ಲಿ ಕಿಂಗ್‌ ಮೇಕರ್‌ ಆಗಲಿದೆ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಎರಡಂಕಿಯನ್ನು ದಾಟುವುದಿಲ್ಲ.
– ಡಿ.ವಿ. ಸದಾನಂದಗೌಡ, ಕೇಂದ್ರ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT