ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್‌ ಅಂತ್ಯದೊಳಗೆ ಅನುದಾನ ಬಳಕೆ

ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
Last Updated 18 ಜನವರಿ 2018, 7:42 IST
ಅಕ್ಷರ ಗಾತ್ರ

ಕಲಬುರ್ಗಿ: ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ. ಯೋಜನೆಯಲ್ಲಿ ವಿವಿಧ ಇಲಾಖೆಗಳಿಗೆ ನಿಗದಿಯಾದ ಅನುದಾನ ಸಂಪೂರ್ಣವಾಗಿ ಬಿಡುಗಡೆಯಾಗಿದೆ. ಈ ಹಣವನ್ನು ಅಧಿಕಾರಿಗಳು ಸಂಪೂರ್ಣವಾಗಿ ಖರ್ಚು ಮಾಡಬೇಕು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯ ಕಾರ್ಯಕ್ರಮಗಳ ಅನುಷ್ಠಾನ ಕುರಿತ ಜಿಲ್ಲಾಮಟ್ಟದ ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಮಾರ್ಚ್ ಅಂತ್ಯದವರೆಗೆ ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ. ಅನುದಾನ ಖರ್ಚು ಮಾಡಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.

‘ಕೃಷಿ ಇಲಾಖೆಯಲ್ಲಿ ಕೃಷಿ ಭಾಗ್ಯ ಯೋಜನೆಗೆ ಸಾಕಷ್ಟು ಅನುದಾನ ಲಭ್ಯವಿದೆ. ಪರಿಶಿಷ್ಟ ಪಂಗಡದ ರೈತರು ಮುಂದೆ ಬಂದು ಕೃಷಿ ಹೊಂಡ ನಿರ್ಮಿಸಿಕೊಂಡು ಪ್ರಯೋಜನ ಪಡೆಯಬೇಕು. ತೋಟಗಾರಿಕೆ ಇಲಾಖೆಯು ಗಂಗಾಕಲ್ಯಾಣ ಯೋಜನೆಯ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಹನಿ ನೀರಾವರಿ ಯೋಜನೆ ಪ್ರಯೋಜನ ದೊರಕಿಸಿಕೊಡಬೇಕು’ ಎಂದು ತಿಳಿಸಿದರು.

‘ಸರ್ಕಾರವು ಪಶುಭಾಗ್ಯ ಯೋಜನೆಯನ್ನು ರೈತರ ಹಾಗೂ ಸಾರ್ವಜನಿಕರ ಉಪ ಜೀವನಕ್ಕೆ ಸಹಾಯವಾಗುವ ಹಾಗೆ ರೂಪಿಸಿದೆ. ಮೂರು ವರ್ಷಗಳಿಂದ ಪಶುಭಾಗ್ಯ ಯೋಜನೆ ಪ್ರಯೋಜನ ಪಡೆದ ಫಲಾನುಭವಿಗಳನ್ನು ಸಂಪರ್ಕಿಸಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಪರಿಶೀಲಿಸಬೇಕು’ ಎಂದರು.

‘ಮಧ್ಯಾಹ್ನದ ಬಿಸಿಯೂಟ ಸರಬರಾಜು ಮಾಡುವವರಿಗೆ ಬಿಲ್ಲು ಪಾವತಿ ಆಗಿಲ್ಲ ಎಂಬ ದೂರುಗಳಿವೆ. ಅಧಿಕಾರಿಗಳು ತಾಲ್ಲೂಕು ಪಂಚಾಯಿತಿ
ಗಳಿಂದ ಜಿಲ್ಲಾ ಪಂಚಾಯಿತಿಗೆ ಮೇಲು ರುಜುವಿಗಾಗಿ ಬಂದಿರುವ ಬಿಲ್ಲುಗಳ ವಿವರ ಪಡೆಯಬೇಕು. ಆದಷ್ಟು ಬೇಗ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು’ ಎಂದು ತಿಳಿಸಿದರು.

‘ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಗರ್ಭಿಣಿಯರು ತಪಾಸಣೆಗೆ ಬರುವಾಗ ಅವರ ಬ್ಯಾಂಕ್ ಖಾತೆ ವಿವರ ಪಡೆಯಬೇಕು. ಬ್ಯಾಂಕ್ ಖಾತೆ ಇಲ್ಲದಿದ್ದಲ್ಲಿ ಖಾತೆ ತೆರೆದು ಕೊಡಬೇಕು. ಈ ಖಾತೆಗೆ ಗರ್ಭಿಣಿಯರಿಗೆ ವಿವಿಧ ಯೋಜನೆಗಳಡಿ ನೀಡುವ ಅನುದಾನವನ್ನು ಕಡ್ಡಾಯವಾಗಿ ಪಾವತಿಸಬೇಕು’ ಎಂದು ಹೇಳಿದರು.

’ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕಾರ್ಯಕ್ರಮಗಳ ಜಿಲ್ಲಾಮಟ್ಟದ ಮೇಲ್ವಿಚಾರಣೆ ಸಮಿತಿ ಸಭೆಗೆ ಗೈರುಹಾಜರಾದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಬೇಕು. ಪದೇಪದೇ ಗೈರು ಹಾಜರಾಗುತ್ತಿರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT