ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ; ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ
Last Updated 18 ಜನವರಿ 2018, 8:09 IST
ಅಕ್ಷರ ಗಾತ್ರ

ಬಾಗಲಕೋಟೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬುಧವಾರ ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ಕಾರ್ಮಿಕರ ಸಂಘ, ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದ ನೇತೃತ್ವದಲ್ಲಿ ನವನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.

ನವಗರದ ಎಲ್ಐಸಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಬಂದ ನೂರಾರು ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.

ಅಂಗನವಾಡಿ, ಆಶಾ ಮತ್ತು ಬಿಸಿಯೂಟ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಬೇಕು. ಮಾಸಿಕ ಕನಿಷ್ಠ ₹ 18,000 ವೇತನ ನೀಡಬೇಕು ಮತ್ತು ಮಾಸಿಕ ₹ 3,000 ಪೆನ್ಷನ್ ನೀಡಬೇಕು. ಸಾಮಾಜಿಕ ಭದ್ರತೆ ಒದಗಿಸಬೇಕು. 45ನೇ ಭಾರತ ಕಾರ್ಮಿಕ ಸಮ್ಮೇಳನದ ಶಿಫಾರಸು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ಹೆಚ್.ಟಿ.ಮಲ್ಲಿಕಾರ್ಜುನ, ಅಂಜನಾ ಕುಂಬಾರ ಮಾತನಾಡಿ, ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳನ್ನು ಕಳೆದ 40ಕ್ಕೂ ಹೆಚ್ಚು ವರ್ಷಗಳಿಂದ ಅನುಷ್ಠಾನಗೊಳಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸದೇ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಕನಿಷ್ಠ ವೇತನ ದರದಂತೆ ಮಾಸಿಕ ವೇತನ ಮತ್ತು ಸಾಮಾಜಿಕ ಭದ್ರತೆಯ ಸೌಕರ್ಯ ನೀಡುತ್ತಿಲ್ಲ. ಗೌರವಧನದ ಹೆಸರಿನಲ್ಲಿ ಸರ್ಕಾರವೇ ಶೋಷಣೆ ಮಾಡುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಮಾಸಿಕ ಪುಡಿಗಾಸಿನ ಗೌರವಧನ ನೀಡಲಾಗುತ್ತಿದೆ. ಇದರಿಂದ ಆದಾಯ ಅನಿಶ್ಚಿತವಾಗಿದೆ’ ಎಂದರು.

ಕೇಂದ್ರ ಸರ್ಕಾರದ ಪ್ರಾಯೋಜಿತ ಯೋಜನೆಗಳ ಉತ್ತಮ ಗುಣಮಟ್ಟ ಮತ್ತು ಸಂಪರ್ಕ ಅನುಷ್ಠಾನಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಹಾಗೂ ಯೋಜನೆ ಸಾರ್ವತ್ರಿಕಗೊಳಿಸಲು ಬೇಕಾಗುವ ಖರ್ಚು ವೆಚ್ಚಗಳನ್ನು ಹಣವನ್ನು ಬಜೆಟ್‌ನಲ್ಲಿ ಒದಗಿಸಬೇಕು. ನಗದು ಹಣ ವರ್ಗಾವಣೆ, ಮಾರ್ಪಾಡು ಮಾಡುವುದು ಹಾಗೂ ಬದಲಾವಣೆ ಮಾಡುವುದು ಇಲ್ಲವೇ ಖಾಸಗಿಯವರಿಗೆ ವಹಿಸುವುದನ್ನು ಮಾಡಬಾರದು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಕೆ.ಸಿ ತೇಲಿ, ಆರ್.ಬಿ.ಮನಗೂಳಿ, ಶಾಂತಾ ಸೇರಿದಂತೆ ಅಂಗನವಾಡಿ, ಆಶಾ ಮತ್ತು ಬಿಸಿಯೂಟದ ನೂರಾರು ಕಾರ್ಯಕರ್ತೆಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT