ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯ ತಂಡದಿಂದ ‘ನಾಯಕತ್ವ’ ಪಾಠ

ಯುವ ಕಾಂಗ್ರೆಸ್‌ನ ರಾಜ್ಯ ಮಟ್ಟದ ‘ಯುವ ದೃಷ್ಟಿ–2018’ಗೆ ಚಾಲನೆ
Last Updated 18 ಜನವರಿ 2018, 20:41 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಯುವ ನಾಯಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಅರಮನೆ ಮೈದಾನದಲ್ಲಿ ಯುವ ಕಾಂಗ್ರೆಸ್‌ ರಾಜ್ಯ ಘಟಕ ಆಯೋಜಿಸಿರುವ ಮೂರು ದಿನಗಳ ನಾಯಕತ್ವ ತರಬೇತಿ ಕಾರ್ಯಾಗಾರಕ್ಕೆ ಗುರುವಾರ ಚಾಲನೆ ನೀಡಲಾಯಿತು.

ಎಲ್ಲ ತಾಲ್ಲೂಕು ಘಟಕಗಳ ಯುವ ಕಾಂಗ್ರೆಸ್‌ ಅಧ್ಯಕ್ಷರು, ಜಿಲ್ಲಾ ಘಟಕಗಳ ಅಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳು ಸೇರಿ ಸುಮಾರು 320 ಯುವ ನಾಯಕರು ‘ಯುವ ದೃಷ್ಟಿ–2018’ ಕಾರ್ಯಾಗಾರದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಯುವ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ಬಸನಗೌಡ ಬಾದರ್ಲಿ ತಿಳಿಸಿದರು.

‘ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವುದು ಹೇಗೆ ಎಂಬ ವಿಷಯವನ್ನು ಕೇಂದ್ರೀಕರಿಸಿ ನಡೆಯಲಿರುವ ಈ ಕಾರ್ಯಾಗಾರವನ್ನು ದೆಹಲಿಯ ಜವಹಾರಲಾಲ್‌ ನೆಹರೂ ವಿಶ್ವವಿದ್ಯಾಲಯದ ಸುರೇಶ್‌ ಶರ್ಮ ನೇತೃತ್ವದ 20 ಸದಸ್ಯರ ತಂಡ ನಡೆಸಿಕೊಡುತ್ತಿದೆ. ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸಲಹೆಯಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.

‘ರಾಜ್ಯದಲ್ಲಿ ಈ ಬಾರಿ ಸುಮಾರು 72 ಲಕ್ಷ ಹೊಸ ಮತದಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಹೀಗಾಗಿ, ಮುಂದಿನ ಚುನಾವಣೆಯಲ್ಲಿ ಯುವ ಸಮೂಹದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಯುವಕರಿಗೆ ಪಕ್ಷ ಈಗಾಗಲೇ ಪ್ರಾತಿನಿಧ್ಯ ನೀಡಿದೆ. ಇನ್ನಷ್ಟು ಪ್ರಾತಿನಿಧ್ಯ ನೀಡುವಂತೆ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಮುಂದೆ ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಅಮರೀಂದರ್ ಸಿಂಗ್ ಬೇಡಿಕೆ ಇಟ್ಟಿದ್ದಾರೆ’ ಎಂದರು.

‘ಸುಳ್ಳು ಪ್ರಚಾರಗಳ ಮೂಲಕ ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಯುವ ಸಮೂಹವನ್ನು ಕೆಟ್ಟ ದಾರಿಗೆ ಕೊಂಡೊಯ್ಯುತ್ತಿದೆ. ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ, ಆ ಭರವಸೆ ಈಡೇರಿಸಲು ವಿಫಲರಾಗಿದ್ದಾರೆ. ಇಂತಹ ಅಪಪ್ರಚಾರಗಳ ವಿರುದ್ಧ ಬೂತ್‌ಮಟ್ಟದಿಂದ ಹೋರಾಟ ನಡೆಸಲು ಮತ್ತು ಆ ಮೂಲಕ ಪಕ್ಷದಲ್ಲಿ ಗುರುತಿಸಿಕೊಂಡು ನಾಯಕರಾಗಿ ಬೆಳೆಯಲು ಈ ಕಾರ್ಯಾಗಾರ ಪ್ರಯೋಜನಾಗಲಿದೆ’ ಎಂದು ರಾಜ್ಯ ಯುವ ಕಾಂಗ್ರೆಸ್‌ ಕಾರ್ಯದರ್ಶಿ ತ್ರಿಭುವನ್‌ ತಿಳಿಸಿದರು.

ವಿದ್ಯಾರ್ಥಿ ಜೀವನದಿಂದ ಸಂಸದನಾಗಿ ಬೆಳೆದ ತಮ್ಮ ಅನುಭವಗಳ ಬಗ್ಗೆ ಕಾರ್ಯಾಗಾರದಲ್ಲಿ ಮಾತನಾಡಿದ ಕೆ.ಸಿ. ವೇಣುಗೋಪಾಲ್‌, ‘2019ರಲ್ಲಿ ರಾಹುಲ್‌ ದೇಶದ ಪ್ರಧಾನಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಅವರನ್ನು ಪ್ರಧಾನಿ ಮಾಡಲು ಪಕ್ಷದ ಯುವ ತಂಡ ಕಾರ್ಯೋನ್ಮುಖವಾಗಬೇಕು’ ಎಂದು ಸಲಹೆ ನೀಡಿದರು. ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಸಕ್ರಿಯವಾಗಿ ಕೆಲಸ ಮಾಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‌.ಆರ್‌. ಪಾಟೀಲ ವಿನಂತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT