ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರಸಭೆಯಿಂದ ನೋಡಲ್‌ ಅಧಿಕಾರಿ ನೇಮಿಸಿ

Last Updated 24 ಜನವರಿ 2018, 7:02 IST
ಅಕ್ಷರ ಗಾತ್ರ

ರಾಯಚೂರು: ನಗರಸಭೆ ವ್ಯಾಪ್ತಿಯ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ನಗರಸಭೆಯಿಂದ ಕೂಡಲೇ ನೋಡಲ್‌ ಅಧಿಕಾರಿಯನ್ನು ನೇಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಪೌರಾಯುಕ್ತರಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯ ನೇತೃತ್ವ ವಹಿಸಿ ಮಾತನಾಡಿದರು. ನಗರಸಭೆ ವ್ಯಾಪ್ತಿಯ ಕುಂದುಕೊರತೆಯ ಅರ್ಜಿಗಳು ವಿಲೇವಾರಿ ಆಗದಿರುವುದು ಗಮನಕ್ಕೆ ಬಂದಿದೆ. ಸಾರ್ವಜನಿಕರ ಅರ್ಜಿಗಳನ್ನು ವಿಲೇವಾರಿ ಮಾಡಿ, ವರದಿ ಸಲ್ಲಿಸಲು ಒಬ್ಬ ನೋಡಲ್‌ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದು ತಿಳಿಸಿದರು.

ಸಭೆಗಳಿಗೆ ಗೈರು ಹಾಜರಿ ಆಗುತ್ತಿರುವ ದೇವರಾಜು ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಗುಂಡಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳಲು ನಿಗಮದ ಹಿರಿಯ ಅಧಿಕಾರಿಗಳಿಗೆ ಶಿಫಾರಸು ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಯೂಸೂಫ್‌ ಅವರಿಗೆ ನಿರ್ದೇಶನ ನೀಡಿದರು.

ಸಾರ್ವಜನಿಕರ ಕುಂದು ಕೊರತೆ ಅರ್ಜಿಗಳಲ್ಲಿ ಎಲ್ಲವೂ ಸತ್ಯ ಇಲ್ಲದಿರಬಹುದು. ಆದರೆ, ನಿಜವಾಗಿ ಸಮಸ್ಯೆ ಅನುಭವಿಸುವವರಿಗೆ ಸ್ಪಂದನೆ ನೀಡಬೇಕು. ಸಮಸ್ಯೆಗಳು ಪುನರಾವರ್ತನೆ ಆಗದಂತೆ ಸಮಸ್ಯೆಗಳನ್ನು ಪರಿಹರಿಸಬೇಕು ಎಂದರು.

ಅಲೆಮಾರಿಗಳ ವಸತಿ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿ ಕೇಳಿದ ಪ್ರಶ್ನೆಗೆ ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಅಧಿಕಾರಿ ಉತ್ತರಿಸಿ, ಅಲೆಮಾರಿ ಜನಾಂಗದವರಿಗೆ ವಸತಿ ಸೌಕರ್ಯ ಕಲ್ಪಿಸಲು ಮೂರು ಎಕರೆ ಪ್ರದೇಶದಲ್ಲಿ 70 ನಿವೇಶನಗಳನ್ನು ಒದಗಿಸಲಾಗುತ್ತಿದೆ ಎಂದು ವಿವರಿಸಿದರು.

ಮಾನ್ವಿ ತಾಲ್ಲೂಕಿನ ಜೀನೂರಲ್ಲಿ ಅಕ್ರಮ ಮರಳು ಸಾಗಣೆಗೆ ಸಂಬಂಧಪಟ್ಟ ಅರ್ಜಿಯ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಜೀನೂರಿಗೆ ಹೋಗಿ ಐದು ಟಿಪ್ಪರ್‌ಗಳನ್ನು ಹಿಡಿದು, ಕ್ರಮ ಜರುಗಿಸಿ ವರದಿ ನೀಡಬೇಕು ಎಂದರು.

ಪ್ರವಾಸಿ ಟ್ಯಾಕ್ಸಿ ಖರೀದಿಗೆ ಸಾಲ ನೀಡದ ಬ್ಯಾಂಕ್‌ ಅಧಿಕಾರಿಗಳ ವಿರುದ್ಧ ದೂರಿಗೆ ಪ್ರತಿಕ್ರಿಯೆ ನೀಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿ, 2013–14ನೇ ಸಾಲಿನ ಯೋಜನೆಯಲ್ಲಿ ಮೂವರು ಫಲಾನುಭವಿಗಳಿಗೆ ಬ್ಯಾಂಕ್‌ ಆಫ್‌ ಮಹಾರಾಷ್ಟ್ರದ ವ್ಯವಸ್ಥಾಪಕರಿಂದ ಸಾಲ ಮಂಜೂರು ಮಾಡದೇ ಸಹಾಯಧನವನ್ನು ಠೇವಣಿ ಇಡಲಾಗಿದೆ ಎಂದು ಗಮನಕ್ಕೆ ತಂದರು. ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕ್ಕೆ ವರದಿ ನೀಡಲಾಗುವುದು ಎಂದರು.

ಜಿಲ್ಲಾ ಪಂಚಾಯಿತಿ ಹಾಗೂ ಕಂದಾಯ ಇಲಾಖೆಗೆ ಸಂಬಂಧಪಟ್ಟ ದೂರುಗಳಿಗಿಂತ ನಗರಸಭೆ, ನಿಗಮಮಂಗಳಿ ಹಾಗೂ ಲೀಡ್‌ ಬ್ಯಾಂಕ್‌ಗೆ ಸಂಬಂಧಪಟ್ಟ ದೂರುಗಳೇ ಅಧಿಕವಾಗಿವೆ. ಆಶ್ರಯ ಯೋಜನೆಯಡಿ ವಸತಿ ಸೌಲಭ್ಯ ಕೋರಿ ಬಹಳಷ್ಟು ಅರ್ಜಿಗಳು ಬಂದಿವೆ. ಅರ್ಹರನ್ನು ಗುರುತಿಸಿ ವಸತಿ ಸೌಕರ್ಯ ಒದಗಿಸಬೇಕು ಎಂದು ತಿಳಿಸಿದರು. ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT