ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದಲಿತ ವಚನಕಾರರು ಪ್ರೇರಣೆಯಾಗಲಿ’

Last Updated 16 ಮಾರ್ಚ್ 2018, 7:13 IST
ಅಕ್ಷರ ಗಾತ್ರ

ಉಡುಪಿ: ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿ ಬೆಳೆಸುವ ಹೊಣೆ ಸಮಾಜದ ಮೇಲಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಗುರುವಾರ ಏರ್ಪಡಿಸಿದ್ದ ದಲಿತ ವಚನಕಾರರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.

ದಲಿತ ವಚನಕಾರರ ವಚನಗಳನ್ನು ಓದಿದರೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ್ದರೂ, ಪ್ರತಿಭೆಯಲ್ಲಿ ಹಿಂದೆ ಇರಲಿಲ್ಲ ಎಂಬುದು ಗೊತ್ತಾಗುತ್ತದೆ. ಅಪಾರ ಪಾಂಡಿತ್ಯ ನಾವು ಕಾಣಬಹುದು. ದಲಿತ ವಚನಕಾರರು ಎಲ್ಲರಿಗೂ ಪ್ರೇರಣೆಯಾಗಲಿ. ಅವರ ಕಾಯಕ ನಿಷ್ಠೆ ಎಲ್ಲರಿಗೂ ಆದರ್ಶ ಎಂದರು.

ಅಭಿವೃದ್ಧಿ ಪರಿಕಲ್ಪಯೊಂದಿಗೆ ಕಾಲೊನಿಗಳಿಗೆ ಸೌಕರ್ಯ ಒದಗಿಸಲು ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ರಸ್ತೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತಿದೆ. ಇಷ್ಟು ಮಾತ್ರವಲ್ಲದೆ ಪ್ರತಿಭಾವಂತರನ್ನು ಬೆಳೆಸುವ ಕಡೆಗೂ ಗಮನ ನೀಡಬೇಕು ಎಂದು ಹೇಳಿದರು.

ಕನ್ನಡ ಪ್ರಾಧ್ಯಾಪಕ ಡಾ. ರಂಗನಾಥ ಕಂಟಿನಕುಂಟೆ ದಲಿತ ವಚನಕಾರರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಜಿ. ಅನುರಾಧ ಅವರು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಎಂದು ಕರೆ ನೀಡಿದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಶೆಟ್ಟಿ ಅವರು ವಚನಕಾರರ ವಚನಗಳನ್ನು ವಾಚಿಸಿ, ಅದರ ಅರ್ಥ ಹೇಳಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಿಳಿನಿ ಪ್ರದೀಪ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಹೆಚ್ಚುವರಿ ಎಸ್ಪಿ ಕುಮಾರಚಂದ್ರ, ಪ್ರಾಂಶುಪಾಲ ಬಾಲಕೃಷ್ಣ ಎಸ್ ಹೆಗ್ಡೆ ಉಪಸ್ಥಿತರಿದ್ದರು.

ಪೂರ್ಣಿಮಾ ಸ್ವಾಗತಿಸಿದರು. ಜಯಪ್ರಕಾಶ್ ಶೆಟ್ಟಿ ನಿರೂಪಿಸಿದರು. ವಿದ್ಯಾರ್ಥಿನಿ ಅಕ್ಷಯ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT