ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ: 28,032 ವಿದ್ಯಾರ್ಥಿಗಳು

ಎಲ್ಲ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ: ಜಿಲ್ಲಾಧಿಕಾರಿ
Last Updated 17 ಮಾರ್ಚ್ 2018, 6:17 IST
ಅಕ್ಷರ ಗಾತ್ರ

ಬೀದರ್: ‘ಜಿಲ್ಲೆಯಲ್ಲಿ ಮಾರ್ಚ್‌ 23 ರಿಂದ ಆರಂಭವಾಗಲಿರುವ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಎಲ್ಲ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗುತ್ತಿದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಇನಾಯತ್ ಅಲಿ ಶಿಂಧೆ ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಎಚ್‌.ಆರ್‌. ಮಹಾದೇವ ಅಧ್ಯಕ್ಷತೆಯಲ್ಲಿ ನಗರದಲ್ಲಿ ಶುಕ್ರವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ಮಾಹಿತಿ ನೀಡಿದರು.

ಪರೀಕ್ಷೆಗಾಗಿ ಜಿಲ್ಲೆಯಲ್ಲಿ ಒಟ್ಟು 94 ಕೇಂದ್ರಗಳನ್ನು ಗುರುತಿಸಲಾಗಿದೆ. ಈಗಾಗಲೇ 91 ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಬಾಕಿ ಉಳಿದ 3 ಕೇಂದ್ರಗಳಲ್ಲೂ ಶೀಘ್ರ ಅಳವಡಿಸಲಾಗುವುದು ಎಂದು ಹೇಳಿದರು.

‘ಸರ್ಕಾರಿ, ಅನುದಾನಿತ, ಅನುದಾನ ರಹಿತ ಸೇರಿ ಜಿಲ್ಲೆಯಲ್ಲಿ ಒಟ್ಟು 520 ಪ್ರೌಢಶಾಲೆಗಳಿವೆ. ರೆಗ್ಯುಲರ್, ರಿಪೀಟರ್, ಖಾಸಗಿ ಹಾಗೂ ಖಾಸಗಿ ರಿಪೀಟರ್ ಸೇರಿ ಒಟ್ಟು 28,032 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಜಾಗೃತ ದಳಗಳನ್ನು ನೇಮಿಸಲಾಗಿದೆ’ ಎಂದು ತಿಳಿಸಿದರು.

‘ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕಾರ್ಯಕ್ಕೆ ಅನುಕೂಲವಾಗಲು ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಂಗವಿಕಲ ವಿದ್ಯಾರ್ಥಿಗಳಿಗೆ ನಿಯಮದಂತೆ ಸಹಕರಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ’
ಎಂದು ಹೇಳಿದರು.

‘ಎಸ್ಸೆಸ್ಸೆಲ್ಸಿ ಪರೀಕ್ಷೆ ನಿಯಮದಂತೆ, ಪಾರದರ್ಶಕವಾಗಿ ನಡೆಸಬೇಕು. ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

‘ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸರಿಯಾಗಿ ಗಾಳಿ, ಬೆಳಕು ಬರುವಂತೆ ವ್ಯವಸ್ಥೆ ಮಾಡಬೇಕು. ಈ ನಿಟ್ಟಿನಲ್ಲಿ ಒಂದು ಬಾರಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮತ್ತು ಸಂಬಂಧಿಸಿದ ಅಧಿಕಾರಿಗಳು ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಡಿ.ಷಣ್ಮಖ ಇದ್ದರು. ಆಯಾ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT