ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯ ಮಾರಾಟ: ಹದ್ದಿನ ಕಣ್ಣಿಡಿ

ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
Last Updated 17 ಮಾರ್ಚ್ 2018, 7:02 IST
ಅಕ್ಷರ ಗಾತ್ರ

ಕೋಲಾರ: ‘ಅಕ್ರಮ ಮದ್ಯ ಮಾರಾಟದ ಬಗ್ಗೆ ಜಿಲ್ಲಾಡಳಿತಕ್ಕೆ ಸಾಕಷ್ಟು ದೂರು ಬರುತ್ತಿವೆ. ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮ ಮದ್ಯ ಮಾರಾಟ ಜಾಲದ ಮೇಲೆ ಹದ್ದಿನ ಕಣ್ಣಿಡಬೇಕು’ ಎಂದು ಜಿಲ್ಲಾಧಿಕಾರಿ ಜಿ.ಸತ್ಯವತಿ ಸೂಚಿಸಿದರು.

ನಗರದಲ್ಲಿ ಶುಕ್ರವಾರ ನಡೆದ ಅಬಕಾರಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ‘ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ನಗರ ಮತ್ತು ಗ್ರಾಮೀಣ ಭಾಗದ ಮನೆ ಹಾಗೂ ಅಂಗಡಿಗಳಲ್ಲಿ ಮದ್ಯ ದಾಸ್ತಾನಿನ ತಪಾಸಣೆ ಮಾಡಬೇಕು’ ಎಂದು ಹೇಳಿದರು.

‘ಚುನಾವಣೆ ಸಂದರ್ಭದಲ್ಲಿ ಮತದಾರರ ಓಲೈಕೆಗಾಗಿ ಹಣ, ಮದ್ಯ ಮತ್ತು ಉಡುಗೊರೆಗಳನ್ನು ಕೊಡುವುದು ಸಾಮಾನ್ಯ. ಈ ನಿಟ್ಟಿನಲ್ಲಿ ಚುನಾವಣಾ ಆಯೋಗವು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಸಭೆ ನಡೆಸಿ ಅಕ್ರಮ ಮದ್ಯ ಮಾರಾಟದ ಬಗ್ಗೆ ನಿಗಾ ವಹಿಸುವಂತೆ ಸೂಚಿಸಿದೆ. ಮದ್ಯ ವ್ಯಾಪಾರಿಗಳಿಂದ ಪ್ರತಿನಿತ್ಯ ವಹಿವಾಟಿನ ಮಾಹಿತಿ ಸಂಗ್ರಹಿಸಿ’ ಎಂದು ಅವರು ತಿಳಿಸಿದರು.

‘ಜಿಲ್ಲೆಯ ಮದ್ಯದ ವ್ಯಾಪಾರಿಗಳು ಮುದ್ರಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮದ್ಯ ಮಾರುತ್ತಿದ್ದಾರೆ. ವಹಿವಾಟಿಗೆ ರಸೀದಿ ಸಹ ಕೊಡುತ್ತಿಲ್ಲ. ಮದ್ಯದ ದಾಸ್ತಾನಿನ ಲೆಕ್ಕಪತ್ರ ನಿರ್ವಹಣೆ ಮಾಡುತ್ತಿಲ್ಲ. ಇದು ಸರಿಯಲ್ಲ. ನಿಯಮಬಾಹಿರವಾಗಿ ಹೆಚ್ಚಿನ ಅವಧಿವರೆಗೆ ವಹಿವಾಟು ನಡೆಸುವ ವ್ಯಾಪಾರಿಗಳಿಗೆ ದಂಡ ವಿಧಿಸಿ ಮತ್ತು ಪರವಾನಗಿ ರದ್ದುಪಡಿಸಿ. ಯಾವುದೇ ಒತ್ತಡಗಳಿಗೆ ಮಣಿಯಬೇಡಿ’ ಎಂದು ಖಡಕ್‌ ಎಚ್ಚರಿಕೆ ನೀಡಿದರು.

ಸಿಬ್ಬಂದಿ ಕೊರತೆ: ‘ಜಿಲ್ಲೆಯ ಚೆಕ್‌ಪೋಸ್ಟ್‌ಗಳಲ್ಲಿ ಕಾರ್ಯ ನಿರ್ವಹಣೆಗೆ ಸಿಬ್ಬಂದಿ ಕೊರತೆ ಇದೆ. ಇದರಿಂದ ಅಕ್ರಮ ಮದ್ಯ ಸಾಗಣೆ ಮೇಲೆ ನಿಗಾ ಇಡಲು ಸಮಸ್ಯೆಯಾಗುತ್ತಿದೆ’ ಎಂದು ಅಬಕಾರಿ ಇಲಾಖೆ ಉಪ ಆಯುಕ್ತೆ ಕೆ.ಕೆ.ಸುಮಿತಾ ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಪ್ರಸ್ತಾವ ಕಳುಹಿಸಿ. ಸರ್ಕಾರದ ಅನುಮತಿ ಪಡೆದು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಚೆಕ್‌ಪೋಸ್ಟ್‌ಗಳಿಗೆ ಕಾವಲು ಸಿಬ್ಬಂದಿಯನ್ನು ನಿಯೋಜಿಸಿ’ ಎಂದು ಸೂಚಿಸಿದರು.

‘ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕೆಲ ಅಧಿಕಾರಿಗಳು ಪ್ರತಿನಿತ್ಯ ಬೆಂಗಳೂರಿನಿಂದ ಕೆಲಸಕ್ಕೆ ಬಂದು ಹೋಗುತ್ತಿರುವುದು ಗಮನಕ್ಕೆ ಬಂದಿದೆ. ಇದು ಸರಿಯಲ್ಲ. ಚುನಾವಣೆ ಸಮೀಪಿಸುತ್ತಿದ್ದು, ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದರಬೇಕು’ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹಿಣಿ ಕಟೋಚ್‌ ಸೆಪಟ್‌, ಕೆಜಿಎಫ್ ಪೊಲೀಸ್‌ ಜಿಲ್ಲಾ ವರಿಷ್ಠಾಧಿಕಾರಿ ಲೋಕೇಶ್‌ಕುಮಾರ್, ಉಪ ವಿಭಾಗಾಧಿಕಾರಿ ಶುಭಾ ಕಲ್ಯಾಣ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT