ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

95 ಶುದ್ಧ ನೀರಿನ ಘಟಕ ದುರಸ್ತಿಪಡಿಸಿ

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷೆ ಲತಾ ರವಿಕುಮಾರ್ ಆದೇಶ
Last Updated 19 ಮಾರ್ಚ್ 2018, 11:56 IST
ಅಕ್ಷರ ಗಾತ್ರ

ತುಮಕೂರು: ಬೇಸಿಗೆ ಶುರುವಾಗಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕೆಟ್ಟಿರುವ 95 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತಕ್ಷಣ ದುರಸ್ತಿಪಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಎಂ.ಲತಾ ರವಿಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

ಶನಿವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ(ಕೆ.ಡಿ.ಪಿ) ಅಧ್ಯಕ್ಷತೆವಹಿಸಿ ಮಾತನಾಡಿದರು.

ಕಳೆದ ಬೇಸಿಗೆ ದಿನಗಳಲ್ಲಿ ನೀರಿನ ಬವಣೆಯಿಂದ ಜನರು ಸಾಕಷ್ಟು ಪರದಾಡಿದರು. ಈ ಬಾರಿ ಅಂತಹ ಸ್ಥಿತಿ ಎದುರಾಗದಂತೆ ನಿಗಾವಹಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರೂ ಇದೇ ವೇಳೆ ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ಒಟ್ಟು 967ಕ್ಕೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕ ಇವೆ. ಜಿಲ್ಲಾ ಪಂಚಾಯಿತಿ ಸದಸ್ಯರು, ಸಾರ್ವಜನಿಕರು ಕೆಟ್ಟಿರುವ ಘಟಕಗಳ ದುರಸ್ತಿಗೆ ಒತ್ತಾಯಿಸುತ್ತಿದ್ದರೂ ಇಲ್ಲಿಯವರೆಗೆ ಯಾವುದೇ ಕೆಲಸಗಳು ಆಗಿಲ್ಲ. ಇದೇ ಸ್ಥಿತಿ ಮುಂದುವರಿದರೆ ಬೇಸಿಗೆಯಲ್ಲಿ ಜನರಿಗೆ ಕಷ್ಟವಾಗುತ್ತದೆ ಎಂದು ಲತಾ ರವಿಕುಮಾರ್ ತಿಳಿಸಿದರು.

ಬತ್ತ ಜೊಳ್ಳಾಗಿದ್ದೇಕೆ: ಪಾವಗಡ ತಾಲ್ಲೂಕಿನ ತಿರುಮಣಿ ಸುತ್ತಮುತ್ತ 200 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದ ಬತ್ತ ಜೊಳ್ಳಾಗಿದ್ದು ಯಾಕೆ? ಪರಿಶೀಲನೆ ನಡೆಸಿದ್ದೀರಾ? ಎಂದು ಕೃಷಿ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರೂಪಾ ಮಾತನಾಡಿ, ನವೆಂಬರ್ ತಿಂಗಳಲ್ಲಿ ಬತ್ತ ನಾಟಿ ಮಾಡಲು ಸೂಕ್ತ ಕಾಲವಲ್ಲ. ಈ ತಿಂಗಳಲ್ಲಿ ನಾಟಿ ಮಾಡಿದರೆ ಕಾಳು ಕಟ್ಟುವುದಿಲ್ಲ. ಈ ಅವಧಿಯಲ್ಲಿಯೇ ಅಲ್ಲಿ ನಾಟಿ ಮಾಡಿದ್ದಾರೆ. ಇದರಿಂದ ಸಹಜವಾಗಿ ಜೊಳ್ಳಾಗಿದೆ ಎಂದು ವಿವರಿಸಿದರು.

ಈ ಬಗ್ಗೆ ಜಾಗೃತಿ ಮೂಡಿಸಿದ್ದರೂ ರೈತರು ಬೆಳೆಯುತ್ತಿದ್ದಾರೆ. ಈಗಾಗಲೇ ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಪಂಚಾಯತ್ ರಾಜ್ ಎಂಜಿನಿಯರಿಂಗ್ ತುಮಕೂರು ಮತ್ತು ಮಧುಗಿರಿ ಉಪವಿಭಾಗದಿಂದ ವಿವಿಧ ಇಲಾಖೆ ಕಟ್ಟಡಗಳ ದುರಸ್ತಿ ಕಾರ್ಯ ಸಮರ್ಪಕವಾಗಿ ಆಗುತ್ತಿಲ್ಲ. ಶೀಘ್ರ ಪೂರ್ಣಗೊಳಿಸಬೇಕು ಎಂದು ಲತಾ ರವಿಕುಮಾರ್ ಆದೇಶಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಮೂರ್ನಾಲ್ಕು ದಿನಗಳಲ್ಲಿ ಪ್ರಾರಂಭವಾಗಲಿದೆ. ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಆಗಬಾರದು. ನಕಲು ಪ್ರಕರಣಗಳು ವರದಿಯಾಗದಂತೆ ಮುನ್ನೆಚ್ಚರಿಕೆವಹಿಸಬೇಕು. ಪರೀಕ್ಷೆ ಫಲಿತಾಂಶ ಸುಧಾರಣೆಗೆ ಕೈಗೊಂಡ ಕ್ರಮಗಳನ್ನು ಮತ್ತೊಮ್ಮೆ ಸಂಬಂಧಪಟ್ಟ ಶಾಲೆ ಮುಖ್ಯಸ್ಥರಿಗೆ, ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಅಧಿಕಾರಿಗಳಿಗೆ ಆದೇಶಿಸಿದರು.

ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಸ್ಥಾಯಿ ಸಮಿತಿ ಅಧ್ಯಕ್ಷ ಜಿ.ಶಿವಕುಮಾರ್, ಉಪಕಾರ್ಯದರ್ಶಿ ಪ್ರೇಮಕುಮಾರ್ ಇದ್ದರು.
**
ಅನುದಾನ ಉಳಿಸಬೇಡಿ
ವಿವಿಧ ಇಲಾಖೆಗಳಿಗೆ ದೊರೆತಿರುವ ಅನುದಾನ ಯಾವುದೇ ಕಾರಣಕ್ಕೂ ಉಳಿಯಬಾರದು. ಅನುದಾನ ಉಳಿಸಿ ಸರ್ಕಾರಕ್ಕೆ ವಾಪಸ್ ಕಳುಹಿಸುವಂತಹ ಕೆಲಸವನ್ನು ಅಧಿಕಾರಿಗಳು ಮಾಡಬಾರದು ಎಂದು ಲತಾ ರವಿಕುಮಾರ್ ಆದೇಶಿಸಿದರು.

ನಿರ್ದಿಷ್ಟ ಉದ್ದೇಶಕ್ಕೆ ಲಭಿಸಿದ ಅನುದಾನವನ್ನು ಮಾರ್ಚ್ ಅಂತ್ಯದ ಒಳಗೆ ಬಳಕೆ ಮಾಡಬೇಕು. ಈ ಬಗ್ಗೆ ಬಳಕೆ ಪ್ರಮಾಣ ಪತ್ರವನ್ನು ಸರ್ಕಾರಕ್ಕೆ ಕಳುಹಿಸಿ ಕೊಡಬೇಕು ಎಂದು ಹೇಳಿದರು.
**
ಶಿಸ್ತು ಕ್ರಮಕ್ಕೆ ಪತ್ರ ಬರೆಯಲು ಆದೇಶ
ಅಂಗವಿಕಲರಿಗೆ ನಿಗದಿಪಡಿಸಿದ ಶೇ 3 ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಲು ಕ್ರಿಯಾ ಯೋಜನೆ ತಯಾರಿಸಲು ನಿರ್ಲಕ್ಷ್ಯವಹಿಸಿದ ಅಂಗವಿಕಲ ಕಲ್ಯಾಣಾಧಿಕಾರಿ ರಮೇಶ್ ವಿರುದ್ಧ ಶಿಸ್ತು ಕ್ರಮಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲು ಕೆ.ಡಿ.‍ಪಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಹಿಂದಿನ ಸಿಇಒ ಶಾಂತಾರಾಮ್ ಹಾಗೂ ಈಗಿನ ಸಿಇಒ ಅನೀಸ್ ಕಣ್ಮಣಿ ಜಾಯ್ ಅವರು ಸೂಚನೆ ನೀಡಿ ನೊಟೀಸ್ ನೀಡಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲದಿರುವುದರಿಂದ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲು ನಿರ್ಣಯ ಕೈಗೊಳ್ಳಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT