ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರಳಾದೇವಿ ಕಾಲೇಜು ಸ್ವಾಯತ್ತತೆಗಾಗಿ ಧರಣಿ

ಜಿಲ್ಲಾಧಿಕಾರಿ ಕಚೇರಿವರೆಗೆ ವಿದ್ಯಾರ್ಥಿಗಳ ಮೆರವಣಿಗೆ
Last Updated 21 ಮಾರ್ಚ್ 2018, 7:39 IST
ಅಕ್ಷರ ಗಾತ್ರ

ಬಳ್ಳಾರಿ: ‘ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯವು ಇಲ್ಲಿನ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಸ್ವಾಯತ್ತ ಕಾಲೇಜನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವ ನಿರ್ಧಾರವನ್ನು ಕೈಬಿಡಬೇಕು’ ಎಂದು ಆಗ್ರಹಿಸಿ ಕಾಲೇಜಿನ ನೂರಾರು ವಿದ್ಯಾರ್ಥಿಗಳು ನಗರದಲ್ಲಿ ಮಂಗಳವಾರ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ, ಧರಣಿ ನಡೆಸಿದರು.

‘ಮೂರೂವರೆ ದಶಕಗಳ ಕಾಲ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ದಾಸೋಹ ನೀಡಿರುವ ಸರಳಾದೇವಿ ಕಾಲೇಜ ಅನ್ನು ಆಯ್ಕೆ ಮಾಡಿರುವುದು ಸರಿಯಲ್ಲ. ಈ ಬಗ್ಗೆ ವಿಶ್ವವಿದ್ಯಾಲಯ ಏಕಪಕ್ಷೀಯವಾಗಿ ತೀರ್ಮಾನ ಕೈಗೊಂಡಿದೆ’ ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಅನಿಲ್‌ಲಾಡ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

‘ವಿಶ್ವವಿದ್ಯಾಲಯಕ್ಕೆ ಯು.ಜಿ.ಸಿಯ 12 ಬಿ ಮಾನ್ಯತೆಯನ್ನು ಪಡೆಯಬೇಕಾದರೆ ವಿಶ್ವವಿದ್ಯಾಲಯದ ಒಂದು ಕಾಲೇಜಾದರೂ ಇರಬೇಕು ಎಂಬ ಷರತ್ತು ಪಾಲನೆಗೋಸ್ಕರ ಕಾಲೇಜನ್ನು ಆಯ್ಕೆ ಮಾಡಿರುವುದು ವಿಶ್ವವಿದ್ಯಾಲಯದ ಅಸಹಾಯಕತೆಯನ್ನು ತೋರುತ್ತದೆ’ ಎಂದು ಎಐಡಿಎಸ್‌ಒ ರಾಜ್ಯ ಘಟಕದ ಕಾರ್ಯದರ್ಶಿ ಡಾ.ಪ್ರಮೋದ್‌ ಆರೋಪಿಸಿದರು.

‘ಕಾಲೇಜು ವಿಶ್ವವಿದ್ಯಾಲಯಕ್ಕೆ ಸೇರ್ಪಡೆಗೊಂಡರೆ ವಿದ್ಯಾರ್ಥಿಗಳ ಪ್ರವೇಶಾತಿ ಸಂಖ್ಯೆಯನ್ನು ಪ್ರತಿ ತರಗತಿಗೆ ಕೇವಲ 50ಕ್ಕೆ ಸೀಮಿತಗೊಳಿಸಲಾಗುತ್ತದೆ. ನಂತರ ಪರಿಶಿಷ್ಟ, ಪರಿಶಿಷ್ಟ ವರ್ಗ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯದ ಬಡವರು, ಗಡಿನಾಡಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆಯಲು ಸಾಧ್ಯವಾಗುವುದಿಲ್ಲ’ ಎಂದು ಚಾಗನೂರು–ಸಿರಿವಾರ ಭೂ ಹೋರಾಟದ ಮುಖಂಡ ಮಲ್ಲಿಕಾರ್ಜುನ ರೆಡ್ಡಿ ಆತಂಕ ವ್ಯಕ್ತಪಡಿಸಿದರು.

ಪ್ರೊ.ಹೇಮಣ್ಣ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ದುರುಗಪ್ಪ, ರೈತ ಮುಖಂಡ ಮಾಧವರೆಡ್ಡಿ, ಪ್ರಾಶುಪಾಲ ಅಬ್ದುಲ್‌ ಮುತಾಲಿಬ್‌ ಮಾತನಾಡಿದರು.

ಸಮಿತಿಯ ಪ್ರಮುಖರಾದ ಕೆ.ಬಸಪ್ಪ, ಹನುಮೇಶ್, ಡಾ.ಬಿ.ಆರ್.ಅಂಬೇಡ್ಕರ್ ಸಂಘದ  ಶಿವಪ್ರಸಾದ್, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಎಚ್.ಸಿದ್ದೇಶ್, ಜಿ.ಪಂಪಾಪತಿ, ಕೃಷ್ಣ, ಗಾದಿಲಿಂಗಪ್ಪ, ಯರಿಸ್ವಾಮಿ, ಎಐಡಿಎಸ್‍ಒ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್, ಗೋವಿಂದ, ಕರ್ನಾಟಕ ದಲಿತ ವಿದ್ಯಾರ್ಥಿ ಒಕ್ಕೂಟದ ಅರುಣ್‍ಕುಮಾರ ಪಾಲ್ಗೊಂಡಿದ್ದರು.

ಮೆರವಣಿಗೆ: ಕಾಲೇಜಿನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಮೆರವಣಿಗೆಯಲ್ಲಿ ಬಾಲಕರಿಗಿಂತಲೂ ಬಾಲಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಸುಡು ಬಿಸಿಲನ್ನು ಲೆಕ್ಕಿಸದೆ ನಡೆದ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ವಿರುದ್ಧ ಘೋಷಣೆಗಳನ್ನು ಕೂಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT