ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರು ಹಕ್ಕು ಪಡೆಯುವಲ್ಲಿ ವಿಫಲ

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ರಾಜಶೇಖರ ಹಿಟ್ನಾಳ್‍ ಹೇಳಿಕೆ
Last Updated 21 ಮಾರ್ಚ್ 2018, 11:24 IST
ಅಕ್ಷರ ಗಾತ್ರ

ಕೊಪ್ಪಳ: 'ಮಹಿಳೆಯರಿಗೆ ಪುರುಷ ಪ್ರಧಾನ ಸಮಾಜದಲ್ಲಿ ಹಲವು ಹಕ್ಕುಗಳನ್ನು ಕಲ್ಪಿಸಲಾಗಿದೆ. ಆದರೆ, ಶಿಕ್ಷಣದ ಕೊರತೆಯಿಂದ ಮಹಿಳೆಯರು ತಮ್ಮ ಹಕ್ಕುಗಳನ್ನು ಪಡೆಯುವಲ್ಲಿ ವಿಫಲರಾಗಿದ್ದಾರೆ' ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರ ಹಿಟ್ನಾಳ ಹೇಳಿದರು.

ನಗರದ ಸಾಹಿತ್ಯಭವನದಲ್ಲಿ  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿವಿಧ ಸೇವಾ ಸಂಸ್ಥೆಗಳು, ಸ್ತ್ರೀ ಶಕ್ತಿ ಸಂಘಗಳು, ಪ್ರಗತಿಪರ ಮಹಿಳಾ ಮಂಡಳಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಆಶ್ರಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

'ಮಹಿಳೆಯರು ಮತ್ತು ಪುರುಷರು ಸಮಾನವಾಗಿ ಬದುಕುವುದು ಸಂವಿಧಾನದ ಆಶಯವಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರಿಗೆ ಪುರುಷರಷ್ಟೇ ಸಮಾನ ಹಕ್ಕುಗಳು ಸಿಗಬೇಕು. ಅವುಗಳನ್ನು ಪಡೆದುಕೊಂಡು ಎಲ್ಲ ಕ್ಷೇತ್ರದಲ್ಲಿ ಮಹಿಳೆಯರು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಆದರೆ ಮಹಿಳೆಯರು ಶಿಕ್ಷಣ ಪಡೆಯದ ಕಾರಣ ಅನೇಕ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಎಲ್ಲ ಮಹಿಳೆಯರು ಶಿಕ್ಷಣ ಪಡೆಯುವುದರ ಮೂಲಕ ಹಕ್ಕುಗಳನ್ನು ಅನುಭವಿಸಬೇಕು. ಈ ಉದ್ದೇಶಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳೆಯರಿಗೆ ಉಚಿತ ಶಿಕ್ಷಣ ನೀಡುವ ಬಗ್ಗೆ ಬಜೆಟ್‍ನಲ್ಲಿ ಘೋಷಿಸಿದ್ದಾರೆ' ಎಂದರು.

'ಮಾತೃಪೂರ್ಣ ಯೋಜನೆಯಿಂದ ಮಹಿಳೆಯರಿಗೆ ಅನುಕೂಲ ಆಗಲಿದೆ. ಮಹಿಳೆಯರು ಸಾಮಾಜಿಕ ಚಟುವಟಿಕೆಯಲ್ಲಿ ಭಾಗವಹಿಸಬೇಕು. ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಬೇಕು' ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೃಷ್ಣ ಸಿ. ಉಕ್ಕುಂದ ಮಾತನಾಡಿ, 'ಅಮೆರಿಕಾದಲ್ಲಿ ಮಹಿಳೆಯರಿಗೆ ಮತದಾನದ ಹಕ್ಕು ಇರಲಿಲ್ಲ. ಮತದಾನದ ಹಕ್ಕು ನೀಡಬೇಕು ಮತ್ತು ಉದ್ಯೋಗ ಹಾಗೂ ವಿವಿಧ ಹಕ್ಕುಗಳನ್ನು ಪಡೆಯುವ ಉದ್ದೇಶದಿಂದ ಹಿಂದೆ ಹೋರಾಟ ನಡೆಯಿತು. ಈ ಹೋರಾಟದ ಮುಂದಾಳತ್ವವನ್ನು ಒಬ್ಬ ಮಹಿಳೆ ವಹಿಸಿದ್ದಳು. ಈ ಹೋರಾಟದ ಪ್ರಭಾವದಿಂದಾಗಿ ಬೇರೆ ಬೇರೆ ದೇಶದ ಪ್ರತಿನಿಧಿಗಳು ಸೇರಿಕೊಂಡು ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲು ಒಮ್ಮತದಿಂದ ನಿರ್ಣಯ ಕೈಗೊಂಡರು. 1910ರಿಂದ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು' ಎಂದರು.

'ಮಹಿಳೆಯರಿಗಾಗಿ ಕಾರ್ಯಕ್ರಮ ಆಯೋಜನೆ, ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಮೂಲಕ ರಾಷ್ಟ್ರೀಯ, ಜನಾಂಗೀಯ, ಸಾಮಾಜಿಕ, ಆರ್ಥಿಕ, ರಾಜಕೀಯ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಲು ಸಹಕಾರಿ ಆಗುತ್ತದೆ. ಮಹಿಳೆ ತಾಯಿಯಾಗಿ, ಗೆಳತಿ, ತಂಗಿ, ಹೆಂಡತಿಯಾಗಿ ಜೀವನದಲ್ಲಿ ಮಹತ್ವದ ಪಾತ್ರ ವಹಿಸಿದ್ದಾಳೆ. ಸಮುದಾಯವನ್ನು ಸಮರ್ಥವಾಗಿ ನಿಭಾಹಿಸುವ ಶಕ್ತಿಯನ್ನು ಹೊಂದಿದ್ದಾಳೆ' ಎಂದರು.

ಸಾಹಿತಿ ವಿಠ್ಠಪ್ಪ ಗೋರಂಟ್ಲಿ, ರಂಗಕರ್ಮಿ ಶಿವಶಂಕರ ಹಾಲ್ಕುರಿಕೆ, ಅರುಣಾ ನರೇಂದ್ರ, ಅನ್ನಪೂರ್ಣಮ್ಮ, ಕೋಮಲಾ ಕುದರಿಮೋತಿ, ಹೇಮಲತಾ, ಜಯಶ್ರೀ ಇದ್ದರು. ಪ್ರಭಾರಿ ಶಿಶು ಅಭಿವೃದ್ಧಿ ಅಧಿಕಾರಿ ಸಿಂಧೂ ಎಲೆಗಾರ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT