ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಣ್ಣಾ ಹಜಾರೆ ಬೆಂಬಲಿಸಿ ಧರಣಿ

ರೈತರ ಸಾಲ ಮನ್ನಾ, ಲೋಕಪಾಲ, ಲೋಕಾಯುಕ್ತ ಕಾಯಿದೆ ಜಾರಿಗೆ ಆಗ್ರಹ
Last Updated 24 ಮಾರ್ಚ್ 2018, 11:08 IST
ಅಕ್ಷರ ಗಾತ್ರ

ಹಾವೇರಿ: ರೈತರ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಸಾಮಾಜಿಕ ಹೋರಾಟಗಾರ, ಗಾಂಧಿವಾದಿ ಅಣ್ಣಾ ಹಜಾರೆ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಇಲ್ಲಿನ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ರೈತ ಮುಖಂಡರು ಧರಣಿ ನಡೆಸಿದರು.

‘ಸ್ವಾಮಿನಾಥನ್ ವರದಿ ಜಾರಿ ಮಾಡಬೇಕು. ರೈತರ ಕೃಷಿ ಸಾಲವನ್ನು ಮನ್ನಾ ಮಾಡಬೇಕು. ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿ ಪಡಿಸಬೇಕು. ರೈತರ ರಕ್ಷಣೆಗಾಗಿ ಯೋಜನೆಗಳನ್ನು ರೂಪಿಸಬೇಕು. ಲೋಕಪಾಲ ಮತ್ತು ಲೋಕಾಯುಕ್ತ ಮಸೂದೆಯನ್ನು ಕೇಂದ್ರ ಸರ್ಕಾರ ಅಂಗೀಕರಿಸಬೇಕು ಎಂದು ಆಗ್ರಹಿಸಿ ಅಣ್ಣಾ ಹಜಾರೆ ದೆಹಲಿಯಲ್ಲಿ ಹೋರಾಟ ಆರಂಭಿಸಿದ್ದಾರೆ. ರೈತರು ಹಾಗೂ ದೇಶದ ನಾಗರಿಕರ ಪರವಾಗಿ ಅವರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ನಾವು ಧರಣಿ ನಡೆಸುತ್ತಿದ್ದೇವೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಹೇಳಿದರು.

‘ರಾಜ್ಯದ ನೀರಿನ ಬವಣೆಯನ್ನು ನೀಗಿಸುವ ಸಲುವಾಗಿ ಕಳಸಾ ಬಂಡೂರಿ ಯೋಜನೆ ಪೂರ್ಣಗೊಳಿಸಬೇಕು. ರಾಜ್ಯದ ಪಾಲಿನ ನೀರನ್ನು ನೀಡಬೇಕು. ಎಲ್ಲ ರಾಜ್ಯದಲ್ಲೂ ಬಲಿಷ್ಠ ಲೋಕಾಯುಕ್ತ ಜಾರಿಗೆ ಬರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವೇ ಈ ಮಸೂದೆಯನ್ನು ಜಾರಿ ಮಾಡಬೇಕು’ ಎಂದು ಸಂಜೀವಿನಿ ಲಿಂಗತ್ವ ಅಲ್ಪಸಂಖ್ಯಾತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ಅಕ್ಷತಾ ಕೆ.ಸಿ. ಆಗ್ರಹಿಸಿದರು.

‘ದೇಶದಾದ್ಯಂತ ನೀರಾವರಿ ಯೋಜನೆಗಳಿಗೆ ಒತ್ತು ನೀಡಬೇಕು. ರೈತರಿಗೆ 60 ವರ್ಷದ ಬಳಿಕ ಪಿಂಚಣಿ ನೀಡಬೇಕು. ರೈತರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಯೋಜನೆ ರೂಪಿಸಬೇಕು. ರೈತರ ಆತ್ಮಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕಾರ್ಯಕ್ರಮಗಳನ್ನು ಜಾರಿಗೊಳಿಸ
ಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ ಬಣ)ಯ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತಪ್ಪ ತಿ.ಹುಚ್ಚಣ್ಣನವರ ಆಗ್ರಹಿಸಿದರು. ‘ಪ್ರಧಾನಿ ನರೇಂದ್ರ ಮೋದಿ ಅವರು ಉದ್ಯಮಿಗಳ ಲಕ್ಷ ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡುತ್ತಿದ್ದಾರೆ. ಆದರೆ, ರೈತರ ಸಾಲ ಮನ್ನಾ ಮಾಡುತ್ತಿಲ್ಲ. ದೇಶಕ್ಕೆ ಅನ್ನ ನೀಡುತ್ತಿರುವ ಬಡವರನ್ನು ನಿರ್ಲಕ್ಷಿಸುತ್ತಿದ್ದಾರೆ. ಇಂತಹ ಜನವಿರೋಧಿ ಧೋರಣೆಗಳನ್ನು ಕೇಂದ್ರ ಸರ್ಕಾರ ಕೈ ಬಿಡಬೇಕು’ ಎಂದು ಆಗ್ರಹಿಸಿದರು.

ರೈತ ಮುಖಂಡರಾದ ಮಲ್ಲಿಕಾರ್ಜುನ ವಿ. ಬಳ್ಳಾರಿ, ಅಡಿವಪ್ಪ ಆಲದಕಟ್ಟಿ, ಶಿವಬಸಪ್ಪ ಗೋವಿ, ರುದ್ರಗೌಡ ಕಾಡನಗೌಡ್ರ, ಬಸನಗೌಡ ಗಂಗಪ್ಪಳ್ಳವರ, ಕರಬಸಪ್ಪ ಅಗಸಿಬಾಗಿಲು, ಮರಿಗೌಡ್ರ ಪಾಟೀಲ, ದಿಳ್ಳೆಪ್ಪ ಮಳ್ಳೂರ, ನಾಗರಾಜ ಮ. ದೊಡ್ಡ ಕುರುಬರ, ರುದ್ರಪ್ಪ ಬಳಿಗಾರ, ರಾಜೇಶಸಾಬ ತರ್ಲಘಟ್ಟ, ಬಸವರಾಜ ದುರುಗಪ್ಪ ತಳವಾರ, ಮಂಜುನಾಥ ಕದಂ, ದಿಳ್ಳೆಪ್ಪ ಮಣ್ಣುರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT