ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧ್ಯಕ್ಷರ ಸ್ವಾಗತಕ್ಕೆ ಕಾಂಗ್ರೆಸ್ ಸಜ್ಜು

ಇಂದು ಚಿಕ್ಕಬಳ್ಳಾಪುರಕ್ಕೆ ರಾಹುಲ್ ಗಾಂಧಿ ಭೇಟಿ; ಭದ್ರತೆ ಮತ್ತು ಸುರಕ್ಷೆ ಪರಿಶೀಲಿಸುತ್ತಿರುವ ಎಸ್‌ಪಿಜಿ ತಂಡ
Last Updated 7 ಏಪ್ರಿಲ್ 2018, 7:16 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾಂಗ್ರೆಸ್‌ನ ಜನಾಶೀರ್ವಾದ ಯಾತ್ರೆ ಭಾಗವಾಗಿ ಶನಿವಾರ (ಏ.7) ನಗರಕ್ಕೆ ಭೇಟಿ ನೀಡಲಿದ್ದಾರೆ. ಅದಕ್ಕಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಮಾವೇಶದ ವೇದಿಕೆ ಸಿದ್ಧಪಡಿಸಲಾಗಿದೆ. ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕಾಗಿ ಸುಮಾರು 30 ಸಾವಿರ ಆಸನಗಳನ್ನು ಹಾಕಲಾಗಿದೆ. ರಾಹುಲ್ ಗಾಂಧಿ ಅವರ ಭದ್ರತೆ ಮತ್ತು ಸುರಕ್ಷೆ ಉಸ್ತುವಾರಿ ಹೊತ್ತಿರುವ ವಿಶೇಷ ರಕ್ಷಣಾ ದಳದ (ಎಸ್‌ಪಿಜಿ) ತಂಡ ಏ.4 ರಂದೇ ನಗರಕ್ಕೆ ಬಂದು ಠಿಕಾಣಿ ಹೂಡಿದೆ.

ಜತೆಗೆ ರಾಷ್ಟ್ರೀಯ ಭದ್ರತಾ ಪಡೆಯ (ಎನ್‌ಎಸ್‌ಜಿ) ಯೋಧರು ಕೂಡ ವೇದಿಕೆಯ ಭದ್ರತೆ ಪರಿಶೀಲನೆ ನಡೆಸುತ್ತಿದ್ದಾರೆ. ಕಾರ್ಯಕ್ರಮದ ಭದ್ರತೆಗಾಗಿ ನಗರದಲ್ಲಿ ವಿವಿಧ ದರ್ಜೆಯ ಪೊಲೀಸ್ ಅಧಿಕಾರಿಗಳು ಸೇರಿದಂತೆ 500ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ರಾಹುಲ್ ಗಾಂಧಿ ಅವರು ಶನಿವಾರ ಕೋಲಾರ ಪ್ರವಾಸ ಮುಗಿಸಿ ಹೆಲಿಕಾಪ್ಟರ್ ಮೂಲಕ ಸಂಜೆ 5ರ ಸುಮಾರಿಗೆ ನಗರ ಹೊರವಲಯದ ಆರ್‌ಟಿಒ ಕಚೇರಿ ಬಳಿ ನಿರ್ಮಿಸಿದ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ. ಅಂಬೇಡ್ಕರ್ ವೃತ್ತದಲ್ಲಿ ಅವರಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಸ್ವಾಗತಿಸಲಿದ್ದಾರೆ. ಬಳಿಕ ರಾಹುಲ್ ಅವರು ನೇರವಾಗಿ ಕ್ರೀಡಾಂಗಣಕ್ಕೆ ತೆರಳಿ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ರಸ್ತೆ ಮಾರ್ಗದ
ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭಾನುವಾರ ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಅವರು ಬೆಳಿಗ್ಗೆ ಪಕ್ಷದ ಮುಖಂಡರು ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಜತೆಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ಪೌರಕಾರ್ಮಿಕರು ಸೇರಿದಂತೆ ವಿವಿಧ ಕ್ಷೇತ್ರದ ಜನರ ಜತೆಗೆ ಸಂವಾದ ನಡೆಸಲಿದ್ದಾರೆ’ ಎಂದು ತಿಳಿಸಿದರು.

‘ಸಂಜೆ 4 ಗಂಟೆಗೆ ನಡೆಯುವ ಜನಾಶೀರ್ವಾದ ಯಾತ್ರೆಯ ಸಮಾರೋಪದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಆ ಕಾರ್ಯಕ್ರಮಕ್ಕೆ ಸುಮಾರು ನಾಲ್ಕೈದು ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ’ ಎಂದು ಹೇಳಿದರು.

ಶಾಸಕ ಡಾ.ಕೆ.ಸುಧಾಕರ್ ಮಾತನಾಡಿ, ‘ಜಿಲ್ಲೆಯಲ್ಲಿ ಸಾರ್ವಜನಿಕ ಸಮಾವೇಶಕ್ಕೆ ಸುಮಾರು ಒಂದು ಲಕ್ಷ ಜನರು ಸೇರುವ ನಿರೀಕ್ಷೆ ಇದೆ.ಕಾಂಗ್ರೆಸ್ ಕಾರ್ಯಕರ್ತರು ಹುಮ್ಮಸ್ಸಿನಿಂದ ಇದ್ದಾರೆ. ಕಾರ್ಯಕ್ರಮದ ಪೂರ್ವ ಸಿದ್ಧತೆ ಭರದಿಂದ ನಡೆದಿವೆ. ಅಂಬೇಡ್ಕರ್ ವೃತ್ತದಲ್ಲಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಲಾಗುತ್ತದೆ’ ಎಂದು ತಿಳಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್‌.ಕೇಶವರೆಡ್ಡಿ ಮಾತನಾಡಿ, ‘ಕಾರ್ಯಕ್ರಮದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದರಾದ ಕೆ.ಎಚ್‌.ಮುನಿಯಪ್ಪ, ವೀರಪ್ಪ ಮೊಯಿಲಿ, ಜಿಲ್ಲೆಯ ಕಾಂಗ್ರೆಸ್ ಶಾಸಕರು ಭಾಗವಹಿಸಲಿದ್ದಾರೆ’ ಎಂದು ಅವರು ಹೇಳಿದರು.

ಏ.12 ರಂದು ಅಭ್ಯರ್ಥಿಗಳ ಪಟ್ಟಿ ಪ್ರಕಟ

‘ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಎಲ್ಲಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಏ.12 ಅಥವಾ 13 ರಂದು ಪ್ರಕಟ ಮಾಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೆಹಲಿಯಲ್ಲಿ ಏ.9, 10 ರಂದು ಕಾಂಗ್ರೆಸ್‌ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷ ಮಧುಸೂಧನ್ ಮಿಸ್ತ್ರಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಬಳಿಕ ಏ.11, 12 ರಂದು ಕೇಂದ್ರ ಚುನಾವಣಾ ಸಮಿತಿ ಸಭೆ ಏರ್ಪಡಿಸಲಾಗಿದೆ’ ಎಂದು ಹೇಳಿದರು.

‘ಕಾಂಗ್ರೆಸ್‌ನಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ಯಾವುದೇ ಗೊಂದಲವಿಲ್ಲ. 224 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಒಂದೇ ಬಾರಿ ಪ್ರಕಟ ಮಾಡುತ್ತೇವೆ. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಸರ್ಕಾರದ ಮೇಲೆ ಇಲ್ಲ. ವೈಯಕ್ತಿಕವಾಗಿ ಶಾಸಕರುಗಳ ಮೇಲೆ ಇದ್ದರೆ ಅದನ್ನು ಸರಿಪಡಿಸಲು ಆಗಾಗ ಸೂಚನೆ ಕೊಡುತ್ತಲೇ ಇದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಾರೆ ಎನ್ನುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಆ ರೀತಿಯ ಚರ್ಚೆಗಳು ಕೂಡ ನಡೆದಿಲ್ಲ’ ಎಂದರು.

‘ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಅಭಿವೃದ್ಧಿ ಮಾಡದೆ ಐದು ವರ್ಷ ಭ್ರಷ್ಟ ಸರ್ಕಾರ ಕೊಟ್ಟವರಿಗೇ ಸರ್ಕಾರ ರಚನೆ ಮಾಡುತ್ತೇವೆ ಎನ್ನುವ ಆತ್ಮವಿಶ್ವಾಸ ಇರಬೇಕಾದರೆ, ಒಳ್ಳೆಯ ಆಡಳಿತ ಮತ್ತು ನಾಯಕತ್ವ ಕೊಟ್ಟ ನಮಗೆಷ್ಟು ಆತ್ಮವಿಶ್ವಾಸ ಇರಬೇಕು ಹೇಳಿ? ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ನೂರಕ್ಕೆ ನೂರು ಅಧಿಕಾರಕ್ಕೆ ಬರುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

**

ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷರಾದ ಮೇಲೆ ಕಾಂಗ್ರೆಸ್‌ಗೆ ಪುಷ್ಟಿ ಸಿಗುತ್ತಿದೆ. ಅವರ ಪ್ರವಾಸದುದ್ದಕ್ಕೂ ಯುವಕರು ಸ್ವಯಂ ಪ್ರೇರಣೆಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ – ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ.

**

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT