ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರಿಗಳಿಗೆ ಶಿಕ್ಷೆ ನೀಡಲು ಆಗ್ರಹ

ವಿವಿಧ ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ
Last Updated 18 ಏಪ್ರಿಲ್ 2018, 10:44 IST
ಅಕ್ಷರ ಗಾತ್ರ

ಚನ್ನಪಟ್ಟಣ: ಜಮ್ಮು ಕಾಶ್ಮೀರದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಅಮಾನುಷವಾಗಿ ಕೊಲೆ ಮಾಡಿರುವ ಆರೋಪಿಗಳಿಗೆ ಉಗ್ರ ಶಿಕ್ಷೆ ನೀಡುವಂತೆ ಆಗ್ರಹಿಸಿ ವಿವಿಧ ಮುಸ್ಲಿಂ ಸಂಘಟನೆಯ ಪದಾಧಿಕಾರಿಗಳು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಶೇರೂ ಹೋಟೆಲ್ ನಿಂದ ಹೊರಟು ಎಂ.ಜಿ.ರಸ್ತೆ ಹಾಗೂ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಇಂತಹ ಹೀನ ಕೃತ್ಯ ನಡೆಸಿದವರನ್ನು ಗಲ್ಲಿಗೆ ಏರಿಸಬೇಕು ಎಂದು ಒತ್ತಾಯಿಸಿದರು.

ಹೋರಾಟಗಾರ್ತಿ ಅಫ್ಜಲ್ ಉನ್ನೀಸಾ ಮಾತನಾಡಿ, ಅಪರಾಧ ನಡೆದಿರುವುದು ಕೇವಲ ಒಬ್ಬ ಬಾಲಕಿಯ ಮೇಲೆ ಅಲ್ಲ, ಅದು ಇಡೀ ಮಾನವೀಯತೆಯ ಮೇಲೆ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಪರಾಧಿಗಳನ್ನು ಸುಮ್ಮನೆ ಬಿಡಬಾರದು. ಘಟನೆ ನಡೆದು ಇಷ್ಟು ದಿನಗಳಾದರೂ ಅಪರಾಧಿಗಳಿಗೆ ಶಿಕ್ಷೆಯಾಗಿಲ್ಲ, ಅವರನ್ನು ಯಾರು ರಕ್ಷಣೆ ಮಾಡುತ್ತಿದ್ದಾರೆ ಎಂಬುದು ತಿಳಿಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕೂಡಲೇ ಕೇಂದ್ರ ಸರ್ಕಾರ ಕ್ರಮ ಕೈಗೊಂಡು ಬಾಲಕಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಆಗ್ರಹಿಸಿದರು.ಬಾಲಕಿಯನ್ನು ಅಪಹರಿಸಿ ಆಕೆಗೆ ಮತ್ತು ಬರಿಸುವ ಔಷಧ ನೀಡಿ ನಿರಂತರ ಎಂಟು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿದರು.

ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ನಡೆಸಿರುವುದು ಸಾಬೀತಾಗಿದ್ದರೂ ಆರೋಪಿಗಳಿಗೆ ಇನ್ನೂ ಶಿಕ್ಷೆಯಾಗದಿರುವುದು ವ್ಯವಸ್ಥೆಯನ್ನು ಅಣಕಿಸುತ್ತಿದೆ. ಕೂಡಲೇ ಆರೋಪಿಗಳ ಮೇಲೆ ಉಗ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಟೆಕೀಸ್ ಟೀಂನ ಅಧ್ಯಕ್ಷೆ ಆರ್.ನವ್ಯಶ್ರೀ ಮಾತನಾಡಿ, ದೇಶದಲ್ಲಿ ಮಹಿಳೆಯರು, ಹೆಣ್ಣುಮಕ್ಕಳ ಸ್ಥಿತಿ ಹೇಗಿದೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ ಎಂದರು.

ಸಣ್ಣ ಮಗುವನ್ನೂ ಕಾಮದೃಷ್ಟಿಯಿಂದ ನೋಡುವ ಕೀಚಕರಿಗೆ ತಕ್ಕ ಶಿಕ್ಷೆಯಾಗದ ಹೊರತು ಇಂತಹ ಪ್ರಕರಣಗಳು ಕಡಿಮೆಯಾಗುವುದಿಲ್ಲ. ಯಾವುದೇ ಕಾರಣಕ್ಕೂ ಕೃತ್ಯ ಎಸಗಿರುವವರನ್ನು ಸುಮ್ಮನೆ ಬಿಡಬಾರದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT