ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

465 ಅಂಕಪಟ್ಟಿಗಳು ನಾಪತ್ತೆ!

ಎಂಜಿನಿಯರಿಂಗ್ ವಿದ್ಯಾರ್ಥಿಗಳ ಸ್ಥಿತಿ ಅತಂತ್ರ
Last Updated 23 ಏಪ್ರಿಲ್ 2018, 5:53 IST
ಅಕ್ಷರ ಗಾತ್ರ

ದಾವಣಗೆರೆ: ನಗರದ ಯುಬಿಡಿಟಿ ಎಂಜಿನಿಯರಿಂಗ್‌ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಕಾಲಕ್ಕೆ ಅಂಕಪಟ್ಟಿ ಸಿಗದೇ ಅತಂತ್ರ ಸ್ಥಿತಿಗೆ ಸಿಲುಕಿದ್ದಾರೆ.

2016–17ನೇ ಸಾಲಿನ 8ನೇ ಸೆಮಿಸ್ಟರ್‌ನ ವಿವಿಧ ವಿಭಾಗಗಳ 465 ವಿದ್ಯಾರ್ಥಿಗಳು ಅಂತಿಮ ಪರೀಕ್ಷೆ ಬರೆದು 5 ತಿಂಗಳಾದರೂ ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಅಂಕಪಟ್ಟಿಗಳನ್ನೇ ವಿತರಿಸಿಲ್ಲ. ವಿದ್ಯಾರ್ಥಿಗಳು ಹಾಗೂ ಪೋಷಕರು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ಅಧಿಕಾರಿಗಳನ್ನು ವಿಚಾರಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

‘ಪರೀಕ್ಷೆ ಮುಗಿದು 5 ತಿಂಗಳಾದರೂ ನಮಗೆ ಅಂಕಪಟ್ಟಿಗಳನ್ನು ವಿತರಿಸಿಲ್ಲ. ಈ ಬಗ್ಗೆ ವಿಚಾರಿಸಿದರೆ, ವಿಶ್ವವಿದ್ಯಾಲಯದಿಂದ ಕಾಲೇಜಿಗೆ ಬರುವ ಮಾರ್ಗಮಧ್ಯದಲ್ಲಿ ನಾಪತ್ತೆಯಾಗಿವೆ ಎಂದು ಹೇಳುತ್ತಿದ್ದಾರೆ. ಇದರಿಂದಾಗಿ ನಮಗೆ ವಿದ್ಯಾರ್ಥಿವೇತನ ಮಂಜೂರಾಗುತ್ತಿಲ್ಲ. ಕೆಲಸಕ್ಕೆ ಅರ್ಜಿಸಲ್ಲಿಸಲೂ ಸಾಧ್ಯವಾಗುತ್ತಿಲ್ಲ’ ಎಂದು ವಿದ್ಯಾರ್ಥಿ ಶರತ್‌ ‘ಪ್ರಜಾವಾಣಿ’ಯೊಂದಿಗೆ ಅಳಲು ತೋಡಿಕೊಂಡರು.

‘ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ 160 ವಿದ್ಯಾರ್ಥಿಗಳಿದ್ದು, ಸಕಾಲಕ್ಕೆ ಅಂಕಪಟ್ಟಿ ದೊರೆಯದೇ ಸಮಾಜ ಕಲ್ಯಾಣ ಇಲಾಖೆಯಿಂದ ಬರಬೇಕಿದ್ದ ವಿದ್ಯಾರ್ಥಿವೇತನ ಕೂಡ ಮಂಜೂರಾಗಿಲ್ಲ’ ಎಂದು ವಿದ್ಯಾರ್ಥಿನಿ ವಿಜಯಲಕ್ಷ್ಮಿ ಅಸಮಾಧಾನ ವ್ಯಕ್ತಪಡಿಸಿದರು.

‘465 ಅಂಕಪಟ್ಟಿಗಳು ನಾಪತ್ತೆಯಾಗಿರುವುದು ನಿಜ. ಈ ಬಗ್ಗೆ ತನಿಖೆ ನಡೆಸಲು ವಿಶ್ವವಿದ್ಯಾಲಯವು ಈಗಾಗಲೇ ಸಮಿತಿ ರಚಿಸಿದೆ. ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರು ಮಾಡುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಲ್ಲಿ ಮನವಿ ಮಾಡಿಕೊಳ್ಳಲಾಗಿದೆ’ ಎಂದು ಯುಬಿಡಿಟಿ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಂಶುಪಾಲ ಶಿವಪ್ರಸಾದ್‌ ದಂಡಗಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT