ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ, ಕಾಂಗ್ರೆಸ್‌ ತಿರಸ್ಕರಿಸಿ: ಮಾಯಾವತಿ

ಕುಮಾರಪರ್ವ ಸಮಾವೇಶದಲ್ಲಿ ಮಾಯಾವತಿ ಕರೆ
Last Updated 25 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಮೈಸೂರು: ಬಡವರು, ದಲಿತರು ಮತ್ತು ಇತರೆ ಹಿಂದುಳಿದ ವರ್ಗದವರನ್ನು ಸಂಪೂರ್ಣವಾಗಿ ಕಡೆಗಣಿಸಿರುವ ಕಾಂಗ್ರೆಸ್‌ ಮತ್ತು ಬಿಜೆಪಿಯನ್ನು ತಿರಸ್ಕರಿಸಬೇಕು ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಕರೆ ನೀಡಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬುಧವಾರ ನಡೆದ ‘ಕುಮಾರ ಪರ್ವ’ ಸಮಾವೇಶದಲ್ಲಿ ಮಾತನಾಡಿದರು.

ಸ್ವಾತಂತ್ರ್ಯದ ಬಳಿಕ ಹಲವು ದಶಕಗಳ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್‌ನಿಂದ ಬಡವರ ಏಳಿಗೆ ಸಾಧ್ಯವಾಗಿಲ್ಲ. ಈಗಿನ ಬಿಜೆಪಿ ಸರ್ಕಾರ ಕೂಡ ಬಡವರ ಪರವಾಗಿಲ್ಲ. ಕೇಂದ್ರದ ತಪ್ಪು ಆರ್ಥಿಕ ನೀತಿಗಳಿಂದಾಗಿ ಬಡ ಮತ್ತು ಮಧ್ಯಮವರ್ಗದವರ ಬದುಕು ಶೋಚನೀಯ ಸ್ಥಿತಿಗೆ ತಲುಪಿದೆ. ರೈತರು ಕೂಡ ಸಂಕಷ್ಟದಲ್ಲಿದ್ದಾರೆ ಎಂದು ದೂರಿದರು.

‘ದಲಿತರ ಮತ್ತು ಇತರ ಹಿಂದುಳಿದ ವರ್ಗದವರ ಹಿತರಕ್ಷಣೆಗಾಗಿ ಕರ್ನಾಟಕದಲ್ಲಿ ಬಿಎಸ್‌ಪಿ ಮತ್ತು ಜೆಡಿಎಸ್‌ ಕೈಜೋಡಿಸಿವೆ. ಬಿಎಸ್‌ಪಿ ಈ ಹಿಂದೆ ಉತ್ತರ ಪ್ರದೇಶದಲ್ಲಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ವರ ಅಭಿವೃದ್ಧಿಗೆ ಶ್ರಮಿಸಿತ್ತು. ಈ ಬಾರಿ ರಾಜ್ಯದಲ್ಲಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಸರ್ವಜನರ ಏಳಿಗೆಗೆ ದುಡಿಯಲಿದೆ’ ಎಂದು ಹೇಳಿದರು.

ಸಮೀಕ್ಷೆ ನಂಬಬೇಡಿ: ರಾಜಕೀಯ ಪಕ್ಷಗಳು ಖಾಸಗಿ ಏಜೆನ್ಸಿಗಳಿಗೆ ಹಣ ನೀಡಿ ಸಮೀಕ್ಷೆಗಳನ್ನು ನಡೆಸಿ ಮತದಾರರ ದಿಕ್ಕುತಪ್ಪಿಸಲು ಪ್ರಯತ್ನಿಸುತ್ತಿವೆ. ಅಂತಹ ಸಮೀಕ್ಷೆಗಳನ್ನು ನಂಬಬೇಡಿ ಎಂದರು.

ವರುಣಾದಲ್ಲಿ ಕಾಂಗ್ರೆಸ್‌– ಬಿಜೆಪಿ ಹೊಂದಾಣಿಕೆ’

ಕಾಂಗ್ರೆಸ್‌ನವರು ಜೆಡಿಎಸ್ ಪಕ್ಷವನ್ನು ಬಿಜೆಪಿಯ ‘ಬಿ’ ಟೀಂ ಎಂದು ಟೀಕಿಸುತ್ತಾರೆ. ಆದರೆ ಬಿಜೆಪಿಯು ವರುಣಾದಲ್ಲಿ ಬಿ.ವೈ.ವಿಜಯೇಂದ್ರ ಅವರನ್ನು ಸ್ಪರ್ಧೆಯಿಂದ ಹಿಂದೆ ಕರೆಸಿಕೊಂಡದ್ದು ಏಕೆ? ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ನಡುವೆ ಹೊಂದಾಣಿಕೆ ನಡೆದಿರುವ ಸಾಧ್ಯತೆಯಿದೆ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು.

‘ನಾವು ಹೊಂದಾಣಿಕೆಯ ಕೆಲಸ ಮಾಡಿಲ್ಲ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳನ್ನು ನೇರವಾಗಿ ಎದುರಿಸುವ ಆತ್ಮಸ್ಥೈರ್ಯ ಇದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT