ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ: ಭರವಸೆ

ಬಂದ್‌ ಪ್ರಶ್ನಿಸಿದ ಹೈಕೋರ್ಟ್‌ನಲ್ಲಿ ಪಿಐಎಲ್‌
Last Updated 26 ಏಪ್ರಿಲ್ 2018, 19:38 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಯಾವುದೇ ಸಂಘಟನೆ ಬಂದ್‌ಗೆ ಕರೆ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರ ದೈನಂದಿನ ಚಟುವಟಿಕೆ ಹಾಗೂ ವಾಣಿಜ್ಯ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮಕೈಗೊಳ್ಳಲು ಬದ್ಧ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಭರವಸೆ ನೀಡಿದೆ.

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ 2018ರ ಏಪ್ರಿಲ್‌ 12ರಂದು ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ಪ್ರಶ್ನಿಸಿ ಸಲ್ಲಿಸಲಾಗಿರುವ ಮೂರು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (‍ಪಿಐಎಲ್‌) ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರ ಎಚ್‌.ಎನ್‌.ರಮೇಶ್‌ ಪರ ವಕೀಲ ಎಚ್.ಸುನೀಲ್ ಕುಮಾರ್‌, ‘ಬಂದ್ ಆಚರಣೆ ಕಾನೂನು ಬಾಹಿರ ಹಾಗೂ ಈ ಸಂದರ್ಭದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ ಬಗ್ಗೆ ನಮಗೆ ಇನ್ನೂ ಯಾವುದೇ ಪ್ರಮಾಣಪತ್ರದ ಪ್ರತಿ ತಲುಪಿಲ್ಲ’ ಎಂದು ಆಕ್ಷೇಪಿಸಿದರು.

ಇದಕ್ಕೆ ಸರ್ಕಾರಿ ವಕೀಲ ಎಸ್‌.ಎಚ್‌.ಪ್ರಶಾಂತ್, 2018ರ ಫೆ.2ರಂದು ಹೈಕೋರ್ಟ್ ಹೊರಡಿಸಿರುವ ತೀರ್ಪಿನ ಅನುಷ್ಠಾನ ಕುರಿತ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ವರದಿಯಲ್ಲಿ ಏನಿದೆ ?: ‘ಬಂದ್‌ಗೆ ಕರೆ ನೀಡಿದ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಕಮಿಷನರ್ ಎಲ್ಲ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಾವುದೇ ಅವಘಡ ಸಂಭವಿಸಿದ ಸಂದರ್ಭದಲ್ಲಿ ಆಂಬುಲೆನ್ಸ್, ಅಗ್ನಿಶಾಮಕ ವಾಹನಗಳಂಥ ತುರ್ತು ಸೇವೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ವರದಿಯಲ್ಲಿ ವಿವರಿಸಲಾಗಿದೆ.

‘2018ರ ಜನವರಿ 25ರಂದು ನಡೆದ ಬಂದ್ ವೇಳೆ ಇಬ್ಬರು ಹಾಗೂ 2016ರ ಸೆಪ್ಟೆಂಬರ್‌ 16ರಂದು ನಡೆದ ಬಂದ್‌ ಆಚರಣೆ ವೇಳೆ ಕನ್ನಡ ಚಳವಳಿ ಹೋರಾಟಗಾರ ವಾಟಾಳ್‌ ನಾಗರಾಜ್‌, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಪ್ರವೀಣ್‌ ಕುಮಾರ್ ಶೆಟ್ಟಿ ಸೇರಿದಂತೆ 18 ಜನರ ವಿರುದ್ಧ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ’ ಎಂದೂ ತಿಳಿಸಲಾಗಿದೆ.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಮೇ 31ಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT