ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ನಾಳೆ ಲಂಚಮುಕ್ತ ಅಭಿಯಾನ

Last Updated 28 ಸೆಪ್ಟೆಂಬರ್ 2018, 14:02 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ಇದೇ 29ರಂದು ಹಿರಿಯೂರಿನಲ್ಲಿ ಹಾಗೂ ಅ. 1ರಂದು ಹೊಸದುರ್ಗದಲ್ಲಿ ಲಂಚಮುಕ್ತ ಕರ್ನಾಟಕ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಅಧ್ಯಕ್ಷ ರವಿಕೃಷ್ಣಾರೆಡ್ಡಿ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ತಾಲ್ಲೂಕು ಕಚೇರಿ, ಉಪ ನೋಂದಣಾಧಿಕಾರಿ ಕಚೇರಿ ಸೇರಿ ಇತರೆ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಈ ವೇಳೆ ಕಂಡು ಬರುವ ಲೋಪದೋಷಗಳನ್ನು ಪಟ್ಟಿ ಮಾಡಿ ಇಲಾಖೆಯ ಮುಖ್ಯಸ್ಥರಿಗೆ ಮಾಹಿತಿ ನೀಡಲಾಗುವುದು’ ಎಂದರು.

‘ರಾಜ್ಯದಲ್ಲಿ ಸುಮಾರು 3 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ದೇಶದಲ್ಲಿ ಒಟ್ಟು 23 ಲಕ್ಷ ಹುದ್ದೆಗಳು ಖಾಲಿ ಇವೆ. ಇವುಗಳನ್ನು ಭರ್ತಿ ಮಾಡಿ ನಿರುದ್ಯೋಗ ಸಮಸ್ಯೆ ನಿವಾರಿಸಬೇಕು’ ಎಂದು ಆಗ್ರಹಿಸಿದರು.

‘ಸರ್ಕಾರ ಹಾಗೂ ಜನಪ್ರತಿನಿಧಿಗಳ ವೈಪಲ್ಯದಿಂದ ನಿರುದ್ಯೋಗ ಸಮಸ್ಯೆ ಹೆಚ್ಚಳವಾಗಿದೆ. ನಿರುದ್ಯೋಗಿಗಳಿಗೆ ಮಾಸಿಕ ₹ 2000 ಭತ್ಯೆ ನೀಡಬೇಕು. ಚಿತ್ರದುರ್ಗ, ದಾವಣಗೆರೆ ಭಾಗಗಳಲ್ಲಿ ಸರ್ಕಾರಿ ಹಾಗೂ ಖಾಸಗಿ ಉದ್ದಿಮೆಗಳನ್ನು ಸ್ಥಾಪಿಸಿ ಉದ್ಯೋಗ ನೀಡಬೇಕು’ ಎಂದು ಒತ್ತಾಯಿಸಿದರು.

‘ಅಧಿಕಾರಿಗಳು ಲಂಚದ ಬೇಡಿಕೆ ಇಟ್ಟಲ್ಲಿ ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಕಿಲ್ಲ. ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಸಹಾಯವಾಣಿಯ ದೂರವಾಣಿ ಸಂಖ್ಯೆ 88842-77730 ಕರೆ ಮಾಡಿ ಮಾಹಿತಿ ನೀಡಿ’ ಎಂದು ಮನವಿ ಮಾಡಿದರು.

‘ಎಸಿಬಿಯಿಂದ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಹಾಗಾಗಿ ಲೋಕಾಯುಕ್ತ ಬಲಪಡಿಸಲು ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ಧರಣಿ ನಡೆಸಲಾಗುವುದು. ನಿರುದ್ಯೋಗ ಸಮಸ್ಯೆ ಕುರಿತು ರಾಜ್ಯವ್ಯಾಪಿ ಹೋರಾಟ ರೂಪಿಸಲಾಗುವುದು’ ಎಂದರು.

ವೇದಿಕೆಯ ಕಾರ್ಯಕಾರಿಣಿ ಸದಸ್ಯ ದೀಪಕ್, ‘ಕಳೆದ ಎರಡು ವರ್ಷಗಳಿಂದ ಸುಮಾರು 150 ಕಚೇರಿಗಳಲ್ಲಿ ಲಂಚಮುಕ್ತ ಅಭಿಯಾನ ಆಯೋಜಿಸಲಾಗಿದೆ. ಮಧ್ಯವರ್ತಿಗಳ ಸಹಾಯವಿಲ್ಲದೇ ನೇರವಾಗಿ ಸೌಲಭ್ಯಗಳನ್ನು ಒದಗಿಸಲಾಗಿದೆ’ ಎಂದರು.

ವೇದಿಕೆ ಕಾರ್ಯಕಾರಿಣಿ ಸದಸ್ಯ ಲಿಂಗೇಗೌಡ ಮಾತನಾಡಿ, ‘ರಾಜ್ಯದಲ್ಲಿ ವ್ಯಾಪಕ ನಿರುದ್ಯೋಗ ಸಮಸ್ಯೆ ಇದೆ. ಇದರ ನಿವಾರಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ. ಉದ್ಯೋಗ ಕಡಿತದಿಂದ ಭ್ರಷ್ಟಾಚಾರ ಹೆಚ್ಚಳವಾಗಲು ಕಾರಣವಾಗಿದೆ. ಹಾಗಾಗಿ ಯುವಕರನ್ನು ಉದ್ಯೋಗದಲ್ಲಿ ತೊಡಗಿಸಲು ಸರ್ಕಾರದಲ್ಲಿರುವ ಖಾಲಿ ಹುದ್ದೆ ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಲಂಚಮುಕ್ತ ಕರ್ನಾಟಕ ವೇದಿಕೆ ಕಾರ್ಯಕಾರಿಣಿ ಸಮಿತಿಯ ಎನ್.ಮೂರ್ತಿ, ಉಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT