ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯ ಕಾರ್ಯದರ್ಶಿಗೆ ನೋಟಿಸ್‌

ಬಾಬಾ ಬುಡನ್‌ಗಿರಿ: ‘ಸುಪ್ರೀಂ’ಗೆ ನ್ಯಾಯಾಂಗ ನಿಂದನೆ ಅರ್ಜಿ
Last Updated 8 ಅಕ್ಟೋಬರ್ 2018, 20:17 IST
ಅಕ್ಷರ ಗಾತ್ರ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ಗಿರಿಯಲ್ಲಿ ಇರುವ ವಿವಾದಾತ್ಮಕ ಗುರು ದತ್ತಾತ್ರೇಯ ಬಾಬಾ ಬುಡನ್‌ಗಿರಿ ಸ್ವಾಮಿ ದರ್ಗಾದ ಷಾ ಖಾದ್ರಿ ಅವರು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತಿತರರಿಗೆ ನೋಟಿಸ್‌ ಜಾರಿ ಮಾಡಿದೆ.

‘ಧಾರ್ಮಿಕ ಆಚರಣೆಗಳಲ್ಲಿನ ತಮ್ಮ ಪಾತ್ರವನ್ನು ಸೀಮಿತಗೊಳಿಸಲಾಗಿದ್ದು, ಆಡಳಿತ ನಿರ್ವಹಣೆಯ ಹೊಣೆಯನ್ನು ಕಿತ್ತುಕೊಳ್ಳಲಾಗಿದೆ’ ಎಂದು ದೂರಿ ದರ್ಗಾದ ‘ಸಜ್ಜಾದ ನಶೀನ್’ ಆಗಿರುವ (ಸೂಫಿ ಸಂತರ ಉತ್ತರಾಧಿಕಾರಿ) ಸಯ್ಯದ್‌ ಗೌಸ್‌ ಮೊಹಿಯುದ್ದೀನ್‌ ಷಾ ಖಾದ್ರಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ಸೋಮವಾರ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ನೇತೃತ್ವದ ತ್ರಿಸದಸ್ಯ ಪೀಠವು, ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚಿಸಿದ್ದು, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ಖುದ್ದು ಹಾಜರಾತಿಗೆ ವಿನಾಯಿತಿ ನೀಡಿದೆ.

ಸುಪ್ರೀಂ ಕೋರ್ಟ್‌ ಸೂಚನೆಯ ಹೊರತಾಗಿಯೂ ಕಳೆದ ಜೂನ್‌ 11ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಪ್ರಕಾರ, ಸಜ್ಜಾದ ನಶೀನ್‌ ಅವರ ಅಧಿಕಾರ ಮತ್ತು ಕರ್ತವ್ಯ ವ್ಯಾಪ್ತಿಯನ್ನು ಮಾತ್ರ ನಿರ್ಬಂಧಿಸಲಾಗಿದ್ದು, ಆಡಳಿತವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ವಹಿಸಿರುವುದು ನ್ಯಾಯಾಂಗ ನಿಂದನೆಯಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಸಜ್ಜದ ನಶೀನ್ ಅವರು ಕರ್ತವ್ಯ ಲೋಪ ಎಸಗಿ, ಕ್ಷೇತ್ರದ ಆದಾಯದ ದುರ್ಬಳಕೆ ಮಾಡಿಕೊಂಡಿದ್ದು ಕಂಡುಬಂದಲ್ಲಿ ಅಥವಾ ಆಡಳಿತ ನಿರ್ವಹಿಸಲು ವಿಫಲವಾದಲ್ಲಿ ಮಾತ್ರ ಆಡಳಿತವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ನೀಡಬೇಕು ಎಂದು ಸರ್ಕಾರ ಕಳೆದ ಮಾರ್ಚ್‌ 19ರಂದು ಹೊರಡಿಸಲಾದ ಆದೇಶದ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಷಾ ಖಾದ್ರಿ ಅವರು ಈ ಹಿಂದೆಯೂ ನ್ಯಾಯಾಂಗ ನಿಂದನೆ ಸಲ್ಲಿಸಿದ್ದರಾದರೂ, ವಿವಾದ ಬಗೆಹರಿಸುವ ನಿಟ್ಟಿನಲ್ಲಿ ವಿಳಂಬವಾಗಿದೆ ಎಂದು ತಿಳಿಸಿ ಕಳೆದ ಏಪ್ರಿಲ್‌ನಲ್ಲಿ ಮುಖ್ಯ ಕಾರ್ಯದರ್ಶಿಯವರು ಕ್ಷಮೆ ಯಾಚಿಸಿದ್ದರಿಂದ ಪ್ರಕರಣವನ್ನು ಕೈಬಿಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT