ರೈತರ ಸಾಲ ಮನ್ನಾಕ್ಕೆ ಸರ್ಕಾರ ತೀರ್ಮಾನ

7
ಪತ್ರಿಕಾಗೋಷ್ಠಿಯಲ್ಲಿ ಸಂಸದ ಕೆ.ಎಚ್‌.ಮುನಿಯಪ್ಪ ಹೇಳಿಕೆ

ರೈತರ ಸಾಲ ಮನ್ನಾಕ್ಕೆ ಸರ್ಕಾರ ತೀರ್ಮಾನ

Published:
Updated:

ಕೋಲಾರ: ‘ಜೆಡಿಎಸ್– ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವು ರೈತರ ಸಾಲ ಮನ್ನಾ ಮಾಡಲು ತೀರ್ಮಾನ ಕೈಗೊಂಡಿದ್ದು, ಸಮನ್ವಯ ಸಮಿತಿ ಸಭೆಯಲ್ಲಿ ಅಂತಿಮಗೊಳ್ಳಲಿದೆ’ ಎಂದು ಸಂಸದ ಕೆ.ಎಚ್.ಮುನಿಯಪ್ಪ ತಿಳಿಸಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯಾವುದೇ ಗೊಂದಲವಿಲ್ಲದೆ ಬಜೆಟ್ ಮಂಡಿಸುತ್ತಾರೆ. ಇದಕ್ಕೆ ಕಾಂಗ್ರೆಸ್‌ ಶಾಸಕರು ಸಂಪೂರ್ಣ ಸಹಕಾರ ನೀಡುತ್ತಾರೆ’ ಎಂದು ಹೇಳಿದರು. ‘ಜಿಲ್ಲೆಯಲ್ಲಿ ನಿವೇಶನ ಹಾಗೂ ವಸತಿರಹಿತರ ಪಟ್ಟಿ ತಯಾರಿಸಿ ಶೀಘ್ರವೇ ಸರ್ಕಾರಕ್ಕೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಮ್ಮಿಶ್ರ ಸರ್ಕಾರವು ಹಿಂದಿನ ಕಾಂಗ್ರೆಸ್ ಸರ್ಕಾರದ ಎಲ್ಲಾ ಯೋಜನೆಗಳನ್ನು ಮುಂದುವರಿಸಲಿದೆ. ಕಾಂಗ್ರೆಸ್‌ ಸರ್ಕಾರ ಪ್ರಕಟಿಸಿದಂತೆ ಎಲ್ಲಾ ವರ್ಗದ ಬಡವರಿಗೂ ಸೂರು ಭಾಗ್ಯ ಕಲ್ಪಿಸಲು ಸಮ್ಮಿಶ್ರ ಸರ್ಕಾರ ಬದ್ಧವಿದೆ’ ಎಂದರು.

‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸ್ವಂತ ನಿವೇಶನವಿದ್ದರೆ ವಸತಿ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡಲಾಗುವುದು. ಪರಿಶಿಷ್ಟ ಜಾತಿ ಸೇರಿದಂತೆ ಇತರ ಎಲ್ಲಾ ವರ್ಗದವರಿಗೆ ನಿವೇಶನ ಇಲ್ಲದಿದ್ದರೆ ಸರ್ಕಾರವೇ ಭೂಸ್ವಾಧೀನ ಮಾಡಿ ನಿವೇಶನ ವಿಂಗಡಿಸಿ ಅರ್ಹರಿಗೆ ವಿತರಿಸಲಿದೆ’ ಎಂದು ವಿವರಿಸಿದರು.

‘ಬೆಂಗಳೂರಿನಲ್ಲಿ ಭಾನುವಾರ (ಜುಲೈ 1) ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ನಡೆಯಲಿದ್ದು, ಹಿಂದಿನ ಸರ್ಕಾರದ ಯೋಜನೆಗಳನ್ನು ಮುಂದುವರಿಸುವ ಕುರಿತು, ಯಾವ ಹಂತದವರೆಗೆ ಮತ್ತು ಎಷ್ಟು ಪ್ರಮಾಣದ ಸಾಲ ಮನ್ನಾ ಮಾಡಬೇಕು, ನಿವೇಶನರಹಿತರಿಗೆ ನಿವೇಶನ ಒದಗಿಸುವ ಬಗ್ಗೆ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ನಿರ್ಣಯ ಕೈಗೊಳ್ಳಲಾಗುತ್ತದೆ’ ಎಂದು ಮಾಹಿತಿ ನೀಡಿದರು.

ಸಮೀಕ್ಷೆ ನಡೆಸಿ: ‘ಅಧಿಕಾರಿಗಳು ನಗರ ಮತ್ತು ಗ್ರಾಮೀಣ ಭಾಗದಲ್ಲಿ ಸಮೀಕ್ಷೆ ನಡೆಸಿ ವಸತಿರಹಿತರು ಮತ್ತು ನಿವೇಶನರಹಿತರನ್ನು ಪಟ್ಟಿ ಮಾಡಬೇಕು. ಬಜೆಟ್ ಅಧಿವೇಶನಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಜಿಲ್ಲೆಯಲ್ಲಿನ ಪಕ್ಷದ ಯಾವ ಶಾಸಕರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ವರಿಷ್ಠರೇ ತೀರ್ಮಾನ ತೆಗೆದುಕೊಳ್ಳುತ್ತಾರೆ’ ಎಂದು ಸ್ಪಷ್ಟಪಡಿಸಿದರು.

ಹೋರಾಟಕ್ಕೆ ನಿರ್ಧಾರ: ‘ಕಾವೇರಿ ಹಾಗೂ ಹೇಮಾವತಿ ನದಿ ಪಾತ್ರದ ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸಂಸದರು ಮತ್ತು ರಾಜ್ಯಸಭಾ ಸದಸ್ಯರು ಪಕ್ಷಾತೀತವಾಗಿ ಸಂಘಟಿತ ಹೋರಾಟ ನಡೆಸಲು ನಿರ್ಧರಿಸಿದ್ದೇವೆ. ಕಾವೇರಿ ನದಿ ನೀರು ಹಂಚಿಕೆಯಲ್ಲಿ ಆಗಿರುವ ಅನ್ಯಾಯಕ್ಕೆ ಕಾವೇರಿ ಪ್ರಾಧಿಕಾರ, ಸಂಸತ್‌ ಹಾಗೂ ನ್ಯಾಯಾಲಯದ ಮೂಲಕ ನ್ಯಾಯ ಪಡೆದುಕೊಳ್ಳಲು ತೀರ್ಮಾನಿಸಲಾಗಿದೆ. ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ನ್ಯಾಯ ಒದಗಿಸಲು ಸಮ್ಮಿಶ್ರ ಸರ್ಕಾರ ಬದ್ಧವಾಗಿದೆ’ ಎಂದು ತಿಳಿಸಿದರು.

ಮುಳಬಾಗಿಲು ಶಾಸಕ ಎಚ್.ನಾಗೇಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಿ.ಗೀತಮ್ಮ, ಉಪಾಧ್ಯಕ್ಷೆ ಯಶೋದಾ, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಆವಣಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆನಂದರೆಡ್ಡಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್‌ಬಾಬು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !