ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ

7
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಆಗ್ರಹ

ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ

Published:
Updated:
ಜಿಲ್ಲಾಡಳಿತ ಭವನದ ಎದುರು ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಿದರು.

ಚಿಕ್ಕಬಳ್ಳಾಪುರ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮಂಗಳವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಜಿ.ಎಂ.ಲಕ್ಷ್ಮೀದೇವಮ್ಮ, ‘ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳ (ಐಸಿಡಿಎಸ್‌) ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರು ಅತ್ಯಂತ ಕಡಿಮೆ ಸವಲತ್ತುಗಳಿಗೆ ದಿನಕ್ಕೆ ಆರೂವರೆ ಗಂಟೆ ಕೆಲಸ ಮಾಡುತ್ತಿದ್ದಾರೆ. ಇದಲ್ಲದೇ ಕಾರ್ಯಕರ್ತೆರನ್ನು ಚುನಾವಣೆ ಕರ್ತವ್ಯ, ಸಮೀಕ್ಷೆಗಳು, ವಿವಿಧ ಯೋಜನೆಗಳ ಅನುಷ್ಟಾನಕ್ಕೆ ಬಳಸಿಕೊಳ್ಳಲಾಗುತ್ತಿದೆ’ ಎಂದು ಹೇಳಿದರು.

‘ಅಂಗನವಾಡಿ ಕಾರ್ಯಕರ್ತೆಯರಿಗೆ ಸೇವಾ ನಿಯಮಾವಳಿ ರಚಿಸಬೇಕು. ಕೇಂದ್ರ ಸರ್ಕಾರ ಕಡಿತ ಮಾಡಿರುವ ಅನುದಾನ ವಾಪಸ್‌ ನೀಡಬೇಕು. ಅಂಗನವಾಡಿ ಕೇಂದ್ರದ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಸೂಚನೆಯನ್ನು ರಾಜ್ಯ ಸರ್ಕಾರ ಒಪ್ಪಬಾರದು. ಅಂಗನವಾಡಿ ಕೇಂದ್ರಗಳಿಗೆ ಗುಣಮಟ್ಟದ ಆಹಾರ ಸಾಮಗ್ರಿ ಅಗತ್ಯಕ್ಕೆ ತಕ್ಕಷ್ಟು ಪೂರೈಸಬೇಕು ಎಂಬುದು ಸೇರಿದಂತೆ 20ಕ್ಕೂ ಹೆಚ್ಚು ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಆಗ್ರಹಿಸಿದರು.

‘ಅಂಗನವಾಡಿ ಕಾರ್ಯಕರ್ತರ ಕೆಲಸದಲ್ಲಿ ಸಣ್ಣ ಪುಟ್ಟ ಅಡಚಣೆಯಾದರೂ ಅವರನ್ನು ಹೊಣೆ ಮಾಡಿ ಕೆಲಸದಿಂದ ತೆಗೆದು ಹಾಕುವ, ಅವಮಾನಿಸುವಂತಹ ಕೆಲಸಗಳು ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ಮುಂಬಡ್ತಿ ಹೊಂದಿದ ಸಹಾಯಕಿಯರಿಗೆ ಯಾವುದೇ ಸ್ಥಳೀಯ ಪಟ್ಟಭದ್ರ ಹಿತಾಸಕ್ತಿಗಳಿಂದ ತೊಂದರೆಯಾಗದಂತೆ ಕೆಲಸ ಮಾಡಿಕೊಂಡು ಹೋಗುವಂತಹ ಸೂಸುತ್ರವಾದ ವಾತಾವರಣ ಕಲ್ಪಿಸಿಕೊಡಬೇಕು’ ಎಂದು ತಿಳಿಸಿದರು.

ರಾಜ್ಯ ಅಂಗನವಾಡಿ ನೌಕರರ ಸಂಘದ ಗುಡಿಬಂಡೆ ತಾಲ್ಲೂಕು ಘಟಕದ ಕಾರ್ಯದರ್ಶಿ ಭಾಗ್ಯಮ್ಮ ಮಾತನಾಡಿ, ‘ಖಾಸಗಿ ಶಾಲೆಗಳ ರೀತಿ ಸರ್ಕಾರಿ ಶಾಲೆಗಳಲ್ಲಿಯೂ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳು ಆರಂಭವಾದರೆ ಅಂಗನವಾಡಿಗಳು ಮುಚ್ಚುತ್ತವೆ. ಆದ್ದರಿಂದ ಅಂಗನವಾಡಿಗಳನ್ನೇ ಮೇಲ್ದರ್ಜೆಗೇರಿಸಿ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಬೇಕು’ ಎಂದು ಹೇಳಿದರು.

‘ನೆರೆ ರಾಜ್ಯಗಳಾದ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಗೋವಾ, ಪಾಂಡಿಚೇರಿಯಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ಕನಿಷ್ಠ ₨12 ಸಾವಿರ ವೇತನ ಇದೆ. ರಾಜ್ಯದಲ್ಲಿ ₨18 ಸಾವಿರ ವೇತನ ನೀಡಬೇಕು’ ಎಂದು ಒತ್ತಾಯಿಸಿದರು.

‘ಮಾತೃಪೂರ್ಣ ಯೋಜನೆಯನ್ನು ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಮೂಲಸೌಕರ್ಯಗಳನ್ನು ಒದಗಿಸಬೇಕು. ಯೋಜನೆಗೆ ಬೇಕಾದ ಮೊಟ್ಟೆ, ತರಕಾರಿ, ಅಡುಗೆ ಅನಿಲ ಹಣವನ್ನು ಮುಂಗಡವಾಗಿ ಖಾತೆಗೆ ಜಮಾ ಮಾಡಬೇಕು. ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಗೌರವಧನ ದೊರೆಯುವಂತೆ ಮಾಡಬೇಕು. ಇಲಾಖೆಯಲ್ಲಿ ಖಾಲಿ ಇರುವ ಹಾಗೂ ಸೃಷ್ಟಿಯಾಗುವ ಶೇ50 ರಷ್ಟು ಮೇಲ್ವಿಚಾರಕಿ ಹುದ್ದೆಗಳಿಗೆ ಮುಂಬಡ್ತಿ ನೀಡಬೇಕು’ ಎಂದು ಆಗ್ರಹಿಸಿದರು.

ಪ್ರತಿಭಟನೆಗೂ ಮುನ್ನ ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಿಂದ ಜಿಲ್ಲಾಡಳಿತ ಭವನದವರೆಗೂ ಪ್ರತಿಭಟನಾಕಾರರು ಮೆರವಣಿಗೆ ನಡೆಸಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ವೆಂಕಟಲಕ್ಷಮ್ಮ , ಖಜಾಂಚಿ ಲಕ್ಷ್ಮೀನರಸಮ್ಮ, ಅಂಗನವಾಡಿ ಕಾರ್ಯಕರ್ತೆಯರಾದ ಅಶ್ವತ್ಥಮ್ಮ, ಮಂಜುಳಾ, ವೆಂಕಟರತ್ನಮ್ಮ, ವಿಜಯ ಭಾರತಿ, ರತ್ಮಮ್ಮ, ಟಿ.ವಿ.ನಾರಯಣಮ್ಮ, ಸೌಭಾಗ್ಯಮ್ಮ, ಗಾಯಿತ್ರಿ, ಮುನಿರತ್ಮಮ್ಮ ಪ್ರತಿಭಟನೆಯಲ್ಲಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !