ಬೆಲೆ ಏರಿಕೆಗೆ ಸರ್ಕಾರದ ಮೇಲೆ ಒತ್ತಡ

7
ಕೋಚಿಮುಲ್ ದತ್ತಿ ನಿಧಿಯಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ಡಾ.ಕೆ.ಸುಧಾಕರ್ ಭರವಸೆ

ಬೆಲೆ ಏರಿಕೆಗೆ ಸರ್ಕಾರದ ಮೇಲೆ ಒತ್ತಡ

Published:
Updated:
Deccan Herald

ಚಿಕ್ಕಬಳ್ಳಾಪುರ: ‘ಕಡಿತ ಮಾಡಿರುವ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಈಗಾಗಲೇ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ನಿಯೋಗ ಮುಖ್ಯಮಂತ್ರಿ ಅವರಿಗೆ ಒತ್ತಾಯಿಸಿದೆ. ಈ ಬಗ್ಗೆ ಮತ್ತೊಮ್ಮೆ ನಿಯೋಗದಲ್ಲಿ ತೆರಳಿ ಸರ್ಕಾರದ ಮೇಲೆ ಒತ್ತಡ ಹಾಕಲಾಗುತ್ತದೆ’ ಎಂದು ಶಾಸಕ ಡಾ.ಕೆ.ಸುಧಾಕರ್ ಹೇಳಿದರು.

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಕೋಚಿಮುಲ್‌), ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಸಾಮಾಜಿಕ ಕಲ್ಯಾಣ ಟ್ರಸ್ಟ್ ಸಹಯೋಗದೊಂದಿಗೆ ನಗರದಲ್ಲಿ ಸೋಮವಾರ ಆಯೋಜಿಸಿದ್ದ ಕೋಚಿಮುಲ್ ದತ್ತಿ ನಿಧಿಯಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕೋಚಿಮುಲ್ ಪ್ರಸ್ತುತ ₨25 ಕೋಟಿ ನಷ್ಟದಲ್ಲಿದೆ. ಆದ್ದರಿಂದ ಹಾಲಿನ ದರ ಕಡಿತ ಮಾಡಲಾಗಿದೆ. ಸಹಕಾರ ಸಂಘಗಳ ಕಾರ್ಯದರ್ಶಿ ಅವರು ಹಾಲಿನ ದರ ಏರಿಕೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದಾರೆ. ನಾವು ಸಹ ನಿಯೋಗದಲ್ಲಿ ಹೋಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಕಂಡು ಬೆಲೆ ಹೆಚ್ಚಳಕ್ಕೆ ಒತ್ತಾಯಿಸುತ್ತೇವೆ’ ಎಂದು ತಿಳಿಸಿದರು.

‘ಅವಳಿ ಜಿಲ್ಲೆಗಳಲ್ಲಿ ಸುಮಾರು 90 ಸಾವಿರ ಕುಟುಂಬಗಳು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿವೆ. ಒಕ್ಕೂಟ ರೈತರಿಗೆ ಮಾತ್ರವಲ್ಲದೆ ಹಾಲು ಉತ್ಪಾದಕರ ಮಕ್ಕಳಿಗೆ ಸಹ ವಿವಿಧ ರೂಪದಲ್ಲಿ ಸಹಾಯ ಮಾಡುತ್ತ ಬರುತ್ತಿದೆ. ವಿದ್ಯಾರ್ಥಿಗಳು ಏಕಾಗ್ರತೆ ಹಾಗೂ ಶ್ರದ್ಧೆಯಿಂದ ವಿದ್ಯಾರ್ಜನೆ ಮಾಡಿದರೆ ಉಜ್ವಲ ಭವಿಷ್ಯ ಲಭ್ಯವಾಗುತ್ತದೆ. ಖಾಸಗಿ ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗಿಂತ ಸರಕಾರಿ ಶಾಲೆ ಮಕ್ಕಳು ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶ್ರಮ ಹಾಕಬೇಕು’ ಎಂದರು.

ಕೋಚಿಮುಲ್ ನಿರ್ದೇಶಕ ಕೆ.ವಿ.ನಾಗರಾಜ್ ಮಾತನಾಡಿ, ‘ನೀರು, ಮೇವು, ಮಾರುಕಟ್ಟೆ ಕೊರತೆ ನಡುವೆಯೂ ಎರಡು ಜಿಲ್ಲೆಗಳ ಪೈಕಿ ನಿತ್ಯ ಸುಮಾರು 11 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಈ ಹಾಲಿಗೆ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ಒಕ್ಕೂಟ ತುಂಬಾ ಶ್ರಮ ವಹಿಸುತ್ತಿದೆ. ಹೈನುಗಾರರ ಶ್ರೇಯೋಭಿವೃದ್ಧಿಗೆ ಬದ್ಧವಾಗಿರುವ ಒಕ್ಕೂಟ ಈ ರೀತಿಯ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬರುತ್ತಿದೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಪಿ.ಎನ್.ಕೇಶವರೆಡ್ಡಿ, ಪಿ.ಎನ್.ಪ್ರಕಾಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಕೋಚಿಮುಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಸ್ವಾಮಿ, ನಿರ್ದೇಶಕರಾದ ಬಂಕ್ ಮುನಿಯಪ್ಪ, ಸುನಂದಮ್ಮ, ಚಿಕ್ಕಬಳ್ಳಾಪುರ ಶಿಬಿರ ಕಚೇರಿಯ ವ್ಯವಸ್ಥಾಪಕ ಪಾಪೇಗೌಡ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ನಾಗೇಶ್, ನಗರಸಭೆ ಅಧ್ಯಕ್ಷ ಮುನಿಕೃಷ್ಣಪ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !