ಸಮಗ್ರ ಅಭಿವೃದ್ಧಿ ಎಲ್ಲರ ಧ್ಯೇಯವಾಗಲಿ

7
ಮೊದಲ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಚ್.ಶಿವಶಂಕರರೆಡ್ಡಿ ಸಲಹೆ

ಸಮಗ್ರ ಅಭಿವೃದ್ಧಿ ಎಲ್ಲರ ಧ್ಯೇಯವಾಗಲಿ

Published:
Updated:
Deccan Herald

ಚಿಕ್ಕಬಳ್ಳಾಪುರ: ‘ನವ ಕರ್ನಾಟಕ ವಿಷನ್ 2025’ ಅಡಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪಂಚವಾರ್ಷಿಕ ಯೋಜನೆಯೊಂದನ್ನು ರೂಪಿಸಬೇಕು. ಎಲ್ಲ ಕ್ಷೇತ್ರಗಳಲ್ಲಿ ಮುಂದಿನ ಐದು ವರ್ಷಗಳಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯದ ಬಗ್ಗೆ ಪ್ರತಿಯೊಂದು ಇಲಾಖೆ ಅಧಿಕಾರಿಗಳು ಸಮಗ್ರ ನೀಲನಕ್ಷೆ ಸಿದ್ಧಪಡಿಸಬೇಕು. ಆ ಗುರಿಯನ್ನು ನಾವು ಸಾಧಿಸಲೇ ಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಚ್.ಶಿವಶಂಕರರೆಡ್ಡಿ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ತಮ್ಮ ಮೊದಲ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ‘ಬೆಂಗಳೂರು ನಗರ ಮತ್ತು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಇರುವ ಕಾರಣ ಜಿಲ್ಲೆಯನ್ನು ಎಲ್ಲ ಕ್ಷೇತ್ರಗಳಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ವಿಫುಲ ಅವಕಾಶಗಳಿವೆ. ಅದರ ಜವಾಬ್ದಾರಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮೇಲಿದೆ’ ಎಂದರು.

‘ಚುನಾವಣೆ ಕಾರಣದಿಂದ ಕುಂಠಿತಗೊಂಡಿದ್ದ ಅಭಿವೃದ್ಧಿ ಕಾರ್ಯಗಳು ಇನ್ನು ಮೇಲೆ ಚುರುಕುಗೊಳ್ಳಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳಷ್ಟೇ ಅಧಿಕಾರಿಗಳು ಸಹಕಾರ ಅಗತ್ಯ. ಸರ್ಕಾರದ ಪ್ರತಿಯೊಂದು ಯೋಜನೆಯನ್ನು ಸರಿಯಾದ ರೀತಿಯಲ್ಲಿ ಅನುಷ್ಟಾನಗೊಳಿಸದೇ ಬೇಜವಾಬ್ದಾರಿ ಮಾಡಿದರೆ ಅದರ ದುಷ್ಪರಿಣಾಮ ಸರ್ಕಾರದ ಮೇಲಾಗುತ್ತದೆ. ಅಧಿಕಾರಿಗಳಿಗೆ ಏನಾದರೂ ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತರಬೇಕು’ ಎಂದು ತಿಳಿಸಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಂದ ಮಳೆ ಮತ್ತು ಬಿತ್ತನೆ ಮಾಹಿತಿ ಪಡೆದ ಸಚಿವರು, ಪಶು ಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರನ್ನು ಕುರಿತು, ‘ಜಿಲ್ಲೆಯಲ್ಲಿ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಅಗತ್ಯ ಪ್ರಮಾಣದ ಮೇವಿನ ಕಿಟ್‌ಗೆ ಈಗಲೇ ತರಿಸುವ ಕೆಲಸ ಮಾಡಬೇಕು’ ಎಂದು ಸೂಚನೆ ನೀಡಿದರು.

ಕೃಷಿ ಇಲಾಖೆ ಅಧಿಕಾರಿಗಳನ್ನು ಉದ್ದೇಶಿಸಿ, ‘ಇಲಾಖೆಯ ಎಲ್ಲ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಪ್ರತಿ ಗ್ರಾಮ ಪಂಚಾಯಿತಿ ಮತ್ತು ಹಾಲಿನ ಡೇರಿ ಆವರಣದಲ್ಲಿ ಸಮಗ್ರ ಮಾಹಿತಿಯುಳ್ಳ ಫಲಕಗಳನ್ನು ಅಳವಡಿಸುವ ಮೂಲಕ ರೈತರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು’ ಎಂದು ತಾಕೀತು ಮಾಡಿದರು.

ಅಂಗವಿಕಲ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಕುರಿತು, ‘ಜಿಲ್ಲೆಯಲ್ಲಿರುವ ಅಂಗವಿಕಲರಿಗೆ ಸರ್ಕಾರದ ಪ್ರತಿಯೊಂದು ಸವಲತ್ತನ್ನು ಆದ್ಯತೆ ಮೆರೆಗೆ ಒದಗಿಸಬೇಕು. ಮನೆಯಲ್ಲಿ ಖಾಲಿ ಇರುವವರ ಬದಲು ಯಾವುದಾದರೂ ಕೆಲಸ, ಉದ್ಯೋಗದಲ್ಲಿ ಇರುವವರಿಗೆ ತ್ರಿಚಕ್ರ ವಾಹನ ನೀಡಿ’ ಎಂದು ತಿಳಿಸಿದರು.

‘ನೀರಿನ ಸಮಸ್ಯೆಗಳಿರುವ ಗ್ರಾಮಗಳನ್ನು ಗುರುತಿಸಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಿ. ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆ ಹೆಚ್ಚು ಗಮನ ಹರಿಸಿ. ಈ ಬಾರಿ ಮಳೆ ಕೊರತೆ ಇರುವುದರಿಂದ ನೀರಿನ ಅಭಾವವು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಎಲ್ಲೂ ಸಾರ್ವಜನಿಕರಿಗೆ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಿ’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸಂಪೂರ್ಣವಾಗಿ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಬೇಕು. ಎಲ್ಲೆಂದರಲ್ಲಿ ಫ್ಲೇಕ್ಸ್, ಬ್ಯಾನರ್ ಹಾಕುವುದಕ್ಕೆ ಕಡಿವಾಣ ಹಾಕಬೇಕು. ಮುಂದಿನ ಒಂದು ವರ್ಷದಲ್ಲಿ ಜಿಲ್ಲೆಯಲ್ಲಿ ಒಂದು ಕೋಟಿ ಸಸಿಗಳನ್ನು ನೆಡಲು ಅರಣ್ಯ ಇಲಾಖೆ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ವಿ. ಮಂಜುನಾಥ್, ಉಪಾಧ್ಯಕ್ಷೆ ಪಿ.ನಿರ್ಮಲಾ ಮುನಿರಾಜು, ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎನ್.ಅನುರಾಧಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !