ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಜೈಲ್‌ ಭರೋ ಚಳವಳಿ

7

ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಜೈಲ್‌ ಭರೋ ಚಳವಳಿ

Published:
Updated:
Deccan Herald

ಕೋಲಾರ: ಕೇಂದ್ರ ಸರ್ಕಾರವು ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಇಲ್ಲಿ ಗುರುವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಜೈಲ್‌ ಭರೋ ಚಳವಳಿ ನಡೆಸಿದ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಸದಸ್ಯರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು.

ಟಮಕ ಬಡಾವಣೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಬಂದ ಸದಸ್ಯರು, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹೋರಾಟದ ವೇಳೆ ಜಿಲ್ಲಾಧಿಕಾರಿ ಕಚೇರಿಯೊಳಗೆ ನುಗ್ಗಲೆತ್ನಿಸಿದ ಸದಸ್ಯರನ್ನು ಪೊಲೀಸರು ತಡೆದರು. ಆಗ ಪೊಲೀಸರು ಮತ್ತು ಸದಸ್ಯರ ನಡುವೆ ವಾಗ್ವಾದ ನಡೆದು ತಳ್ಳಾಟ ಉಂಟಾಯಿತು. ಈ ವೇಳೆ ಹಲವು ಸದಸ್ಯರು ಹಾಗೂ ಪೊಲೀಸ್‌ ಸಿಬ್ಬಂದಿಗೆ ಸಣ್ಣಪುಟ್ಟ ತರಚಿದ ಗಾಯಗಳಾದವು.

‘ಬಂಡವಾಳಶಾಹಿಗಳ ಕೈಗೊಂಬೆಯಾಗಿರುವ ಕೇಂದ್ರ ಸರ್ಕಾರಕ್ಕೆ ಜನಸಾಮಾನ್ಯರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲ. ಬಹುರಾಷ್ಟ್ರೀಯ ಕಂಪನಿಗಳು ಹಾಗೂ ಬಂಡವಾಳಶಾಹಿಗಳ ಹಿತರಕ್ಷಣೆಗಾಗಿ ಕೇಂದ್ರವು ಜನವಿರೋಧಿ ನೀತಿ ಅನುಸರಿಸುತ್ತಿದೆ’ ಎಂದು ಜನವಾದಿ ಮಹಿಳಾ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ವಿ.ಗೀತಾ ದೂರಿದರು.

‘ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಮೋದಿ ಸಂಪೂರ್ಣ ವಿಫಲರಾಗಿದ್ದಾರೆ. ಕೇಂದ್ರದ ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದೇಶದ ಅರ್ಥ ವ್ಯವಸ್ಥೆ ಬುಡ ಮೇಲಾಗಿದೆ. ನೋಟು ಅಮಾನ್ಯೀಕರಣ, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಯಿಂದ ಬಡವರು, ಕಾರ್ಮಿಕರು, ರೈತರು, ಸಣ್ಣ ಉದ್ದಿಮೆದಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ಹೇಳಿದರು.

ಭರವಸೆ ಹುಸಿ: ‘ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ತರಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದೆ. ಆದರೆ, ಆಯೋಗದ ವರದಿ ಜಾರಿ ಸಾಧ್ಯವಿಲ್ಲವೆಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ. ಬಿಜೆಪಿ ಮುಖಂಡರು ಲೋಕಸಭಾ ಚುನಾವಣೆಗೂ ಮುನ್ನ ಸ್ವಾಮಿನಾಥನ್‌ ಆಯೋಗದ ವರದಿ ಜಾರಿಗೊಳಿಸುವುದಾಗಿ ಘೋಷಿಸಿದ್ದರು. ಆದರೆ, ಆ ಭರವಸೆ ಹುಸಿಯಾಗಿದೆ’ ಎಂದು ಸದಸ್ಯರು ಆರೋಪಿಸಿದರು.

‘ಸದಾ ವಿದೇಶ ಪ್ರವಾಸದಲ್ಲಿರುವ ಮೋದಿ ಅವರಿಗೆ ದೇಶದ ಸಮಸ್ಯೆಗಳ ಅರಿವಿಲ್ಲ. ಕೇಂದ್ರವು ರೈತರು, ಕೃಷಿ ಕಾರ್ಮಿಕರು ಆರ್ಥಿಕ ಬೆಳೆವಣಿಗೆಗೆ ಅನುಕೂಲವಾಗುವ ಯಾವುದೇ ನೀತಿ ಜಾರಿ ಮಾಡಿಲ್ಲ. ಬದಲಿಗೆ ಕೆಲವೇ ಶ್ರೀಮಂತ ಕುಟುಂಬಗಳಿಗೆ ಇಡೀ ದೇಶದ ಆಸ್ತಿ ದೋಚಲು ಅನುಕೂಲವಾಗುವ ನೀತಿ ಜಾರಿಗೊಳಿಸುತ್ತಿದೆ. ಇದರಿಂದ ದುಡಿಯುವ ವರ್ಗದ ಜನ ಆರ್ಥಿಕವಾಗಿ ಮತ್ತಷ್ಟು ಬಡವರಾಗುತ್ತಿದ್ದಾರೆ’ ಎಂದು ಕಿಡಿಕಾರಿದರು.

ಕನಿಷ್ಠ ವೇತನ: ‘ಕೃಷಿ ಬಿಕ್ಕಟ್ಟು ಬಗೆಹರಿಸಬೇಕು. ಎಲ್ಲಾ ಕೃಷಿ ಉತ್ಪನ್ನಗಳಿಗೆ ಉತ್ಪಾದನಾ ಬಂಡವಾಳಕ್ಕೆ ಶೇ 50ರಷ್ಟು ಸೇರಿಸಿ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ ನಿಗದಿಪಡಿಸಬೇಕು. ಬಿಸಿಯೂಟ ಯೋಜನೆಯ ಸಹಾಯಧನ ಕಡಿತಗೊಳಿಸಬಾರದು. ಹೊರ ಗುತ್ತಿಗೆ ಆಧಾರದಲ್ಲಿ ನೌಕರರನ್ನು ನೇಮಿಸಿಕೊಳ್ಳುವ ಪದ್ಧತಿ ರದ್ದುಗೊಳಿಸಬೇಕು’ ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಟಿ.ಎಂ.ವೆಂಕಟೇಶ್, ಪದಾಧಿಕಾರಿಗಳಾದ ಬಿ.ಎಸ್.ನಾಗರತ್ನ, ವಿಜಯಕುಮಾರಿ, ಪಿ.ತಂಗರಾಜ್, ಪಿ.ಶ್ರೀನಿವಾಸ್, ಪಿ.ಅರ್.ಶಂಕರ್, ಈಶ್ವರಮ್ಮ, ಮುನಿರಾಜಮ್ಮ, ವಿಜಿಕೃಷ್ಣ, ಎನ್.ಎನ್.ಶ್ರೀರಾಮ್, ನಾರಾಯಣರೆಡ್ಡಿ, ವಾಸುದೇವರೆಡ್ಡಿ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !