ಬಿಜೆಪಿ ಸರ್ಕಾರ ಬಂಡವಾಳಶಾಹಿಗಳ ಕೈಗೊಂಬೆ

7
ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಚಂದ್ರಾರೆಡ್ಡಿ ಟೀಕೆ

ಬಿಜೆಪಿ ಸರ್ಕಾರ ಬಂಡವಾಳಶಾಹಿಗಳ ಕೈಗೊಂಬೆ

Published:
Updated:
Deccan Herald

ಕೋಲಾರ: ‘ಬಂಡವಾಳಶಾಹಿಗಳ ಕೈಗೊಂಬೆಯಾಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನ ಪಾಠ ಕಲಿಸಬೇಕು. ಕಾರ್ಯಕರ್ತರು ಮತದಾರರನ್ನು ಪಕ್ಷದತ್ತ ಸೆಳೆಯುವ ಸಂಕಲ್ಪ ಮಾಡಬೇಕು’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಕಿವಿಮಾತು ಹೇಳಿದರು.

ಇಲ್ಲಿ ಶುಕ್ರವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ‘ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಕಾರ್ಯಕರ್ತರು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು. ಕೇಂದ್ರದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು ಕಾರ್ಯಕರ್ತರ ಗುರಿಯಾಗಬೇಕು’ ಎಂದು ಸಲಹೆ ನೀಡಿದರು.

‘ಮುಂಬೈನಲ್ಲಿ 1942ರ ನಡೆದ ಎಐಸಿಸಿ ಸಮ್ಮೇಳನದಲ್ಲಿ ಮಹಾತ್ಮ ಗಾಂಧೀಜಿ ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿದ್ದರು. ಆಗ ಬ್ರಿಟೀಷರು ಗಾಂಧೀಜಿ, ನೆಹರೂ ಸೇರಿದಂತೆ ಹಲವು ಪ್ರಮುಖರನ್ನು ಬಂಧಿಸಿದ್ದರು. ದೇಶದಲ್ಲಿ ಈಗ ಅದೇ ಪರಿಸ್ಥಿತಿಯಿದ್ದು, ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಬಿಜೆಪಿ ಮುಖಂಡರು ಚುನಾವಣೆಗೆ ಮುನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. 5 ವರ್ಷದಲ್ಲಿ 10 ಕೋಟಿ ಉದ್ಯೋಗಾವಕಾಶ ಸೃಷ್ಟಿಸುವುದಾಗಿ ಹೇಳಿದ್ದ ಮೋದಿ ಅವರು ನೋಟು ಅಮಾನ್ಯೀಕರಣ ಮಾಡಿ ಹಾಗೂ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಗೊಳಿಸಿ ನಿರುದ್ಯೋಗ ಸಮಸ್ಯೆ ಹೆಚ್ಚುವಂತೆ ಮಾಡಿದ್ದಾರೆ’ ಎಂದು ಟೀಕಿಸಿದರು.

ಬದುಕು ಬರ್ಬರ: ‘ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ತೈಲೋತ್ಪನ್ನಗಳ ಬೆಲೆ ನಿಯಂತ್ರಣದಲ್ಲಿತ್ತು. ಆದರೆ, ಈಗ ಪೆಟ್ರೋಲ್‌, ಡಿಸೇಲ್‌ ಹಾಗೂ ಅಡುಗೆ ಅನಿಲದ ಬೆಲೆ ಗಗನಕ್ಕೇರಿದೆ. ದೈನಂದಿನ ಅಗತ್ಯ ವಸ್ತುಗಳ ಬೆಲೆಯೂ ಗಣನೀಯವಾಗಿ ಏರಿದೆ. ಬೆಲೆ ಹೆಚ್ಚಳದಿಂದ ಬಡವರು, ಕಾರ್ಮಿಕರು, ಮಧ್ಯಮ ವರ್ಗದವರ ಬದುಕು ಬರ್ಬರವಾಗಿದೆ’ ಎಂದರು.

‘ಬಿಜೆಪಿಯು ಬಂಡವಾಳಶಾಹಿಗಳು ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಪರವಾಗಿದೆ. ಬಂಡವಾಳಶಾಹಿಗಳು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕೋಟಿಗಟ್ಟಲೇ ಸಾಲ ಮಾಡಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಇದಕ್ಕೆಲ್ಲಾ ಮೋದಿ ಕುಮ್ಮಕು ನೀಡುತ್ತಿದ್ದಾರೆ. ರೈತರ ಕೃಷಿ ಸಾಲ ಮನ್ನಾ ಮಾಡಲು ಹಿಂದೇಟು ಹಾಕುವ ಕೇಂದ್ರವು ಬಂಡವಾಳಶಾಹಿಗಳ ಪರವಾದ ನೀತಿ ಅನುಸರಿಸುತ್ತಿದೆ’ ಎಂದು ಆರೋಪಿಸಿದರು.

ಪ್ರಜಾಪ್ರಭುತ್ವಕ್ಕೆ ಅಪಾಯ: ‘ಬಿಜೆಪಿಯ ದುರಾಡಳಿತದಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಸಂವಿಧಾನಕ್ಕೆ ಅಪಾಯವಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಕಾಂಗ್ರೆಸ್ ಪಕ್ಷದ ಮೇಲೆ ದೊಡ್ಡ ಜವಾಬ್ದಾರಿಯಿದೆ. ಆದರೆ ಪಕ್ಷದಲ್ಲಿ ಕೆಲವರಿಗೆ ಬದ್ಧತೆಯಿಲ್ಲ. ಪಕ್ಷದಲ್ಲಿ ಇದ್ದುಕೊಂಡೇ ದ್ರೋಹ ಬಗೆಯುತ್ತಾರೆ’ ಎಂದು ನಿವೃತ್ತ ಐಎಎಸ್‌ ಅಧಿಕಾರಿ ಸೈಯದ್‌ ಜಮೀರ್‌ ಪಾಷಾ ಬೇಸರ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಅರುಣ್‌ಪ್ರಸಾದ್‌, ಸಿ.ಎಸ್.ವೆಂಕಟೇಶ್, ಮಾಜಿ ಸಚಿವ ನಿಸಾರ್‌ ಅಹಮ್ಮದ್‌, ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಮಾಜಿ ಅಧ್ಯಕ್ಷ ಎಲ್‌.ಗೋಪಾಲಕೃಷ್ಣ, ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಫ್ಯಾನ್ಸಿಸ್, ಅಲ್ಪಸಂಖ್ಯಾತ ಘಟಕದ ಸದಸ್ಯರಾದ ಹನೀಫ್, ಇಕ್ಬಾಲ್ ಅಹಮ್ಮದ್‌, ಜಿಲ್ಲಾ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ವೆಂಕಟಪತೆಪ್ಪ ಪಾಲ್ಗೊಂಡಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !