ಟೇಕಾಫ್ ಇರಲಿ, ರನ್‌ವೇಗೆ ಬಂದಿಲ್ಲ

7
ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿ: ಅರವಿಂದ ಲಿಂಬಾವಳಿ ಲೇವಡಿ

ಟೇಕಾಫ್ ಇರಲಿ, ರನ್‌ವೇಗೆ ಬಂದಿಲ್ಲ

Published:
Updated:

ಬಾಗಲಕೋಟೆ: 'ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಲಿದೆ. ಆಗ ಮಾಡಲು ಏನೂ ಕೆಲಸ ಇರುವುದಿಲ್ಲ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭತ್ತ ನಾಟಿ ಮಾಡುವುದನ್ನು ಕಲಿಯಲು ಮಂಡ್ಯಕ್ಕೆ ಹೋಗಿದ್ದಾರೆ' ಎಂದು ಶಾಸಕ ಅರವಿಂದ ಲಿಂಬಾವಳಿ ಲೇವಡಿ ಮಾಡಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರ ಟೇಕ್‌ ಆಫ್ ಆಗುವುದಿರಲಿ, ಇನ್ನೂ ರನ್‌ವೇಗೆ ಬಂದಿಲ್ಲ’ ಎಂದು ಕಟಕಿಯಾಡಿದರು.

‘ರಾಜ್ಯದ ಆರ್ಥಿಕ ಸ್ಥಿತಿಗತಿ ನೋಡಿಕೊಂಡು ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ ಮಂಡಿಸಿದ್ದರು. ಆದರೆ ಅದರಲ್ಲಿನ ಅಂಶಗಳನ್ನು ಅನುಷ್ಠಾನಕ್ಕೆ ತರದೇ ನೆಪಗಳನ್ನು ಹೇಳುತ್ತಿದ್ದಾರೆ ಎಂದು ಟೀಕಿಸಿದ ಅವರು, ನೇಕಾರರ ಸಾಲ ಮನ್ನಾ, ವಿದ್ಯಾರ್ಥಿಗಳಿಗೆ ಉಚಿತ್ ಬಸ್ ಪಾಸ್ ಮತ್ತು ಸ್ವಸಹಾಯ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಆದರೆ ಈಗ ಅವುಗಳ ಜಾರಿಗೆ ಹಿಂದೇಟು ಹಾಕುತ್ತಿದೆ’ ಎಂದು ಆರೋಪಿಸಿದರು.

‘ರಾಜ್ಯದಲ್ಲಿ ಒಂದು ಕಡೆ ಅತಿವೃಷ್ಟಿ, ಮತ್ತೊಂದು ಕಡೆ ಅನಾವೃಷ್ಟಿ ತಲೆದೋರಿದೆ. ಸ್ವತಃ ಮುಖ್ಯಮಂತ್ರಿಗೆ ಆ ಬಗ್ಗೆ ಮಾಹಿತಿ ಇಲ್ಲ. ಅತಿವೃಷ್ಟಿ ಬಗ್ಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮಾಹಿತಿ ಕೂಡಾ ನೀಡಿಲ್ಲ’ ಎಂದು ದೂರಿದರು.

‘ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಸಂಖೈಯಲ್ಲಿ ಅಕ್ರಮ ಬಾಂಗ್ಲಾದೇಶಿಗರು ನೆಲೆಸಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು. ಅಧಿಕಾರಕ್ಕೆ ಬಂದ ಮೇಲೆ ಅದರ ಬಗ್ಗೆ ಚಕಾರ ಎತ್ತುತ್ತಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಮೂರು ಜಿಲ್ಲೆಯವರು ಮಾತ್ರ ಮತ ಹಾಕಿದ್ದಾರೆ ಎಂದು ಹೇಳುತ್ತಿರುವುದು ಸರಿಯಲ್ಲ, ಅವರು ಇಡೀ ರಾಜ್ಯದ ಮುಖ್ಯಮಂತ್ರಿ ಎನ್ನುವುದನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು’ ಎಂದರು.

‘ವಿಧಾನಸಭೆ ಚುನಾವಣೆ ವೇಳೆ ಪಕ್ಷದ ಬೆಂಬಲಕ್ಕೆ ನಿಂತಿದ್ದ ರಾಜ್ಯದ ಜನತೆ ಈಗ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಅದೇ ರೀತಿ ಬೆಂಬಲ ನೀಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದ ಅವರು, ಜಿಲ್ಲೆಯ 12 ಕಡೆ ಸ್ಥಳೀಯ ಸಂಸ್ಥೆಯ ಚುನಾವಣೆಗಳು ನಡೆಯುತ್ತಿದ್ದು, ಎಲ್ಲ ಕಡೆ ಬಿಜೆಪಿ ಹೆಚ್ಚು ಸ್ಥಾನಗಳಿಸಲಿದೆ’ ಎಂದರು.

‘ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಸಮ್ಮಿಶ್ರ ಸರ್ಕಾರ ಸ್ಪಂದಿಸದಿದ್ದರೆ ಸ್ಥಳೀಯ ಸಂಸ್ಥೆಯ ಚುನಾವಣೆ ಬಳಿಕ ಬಿಜೆಪಿ ಮತ್ತೆ ಹೋರಾಟ ಮುಂದುವರೆಸಲಿದೆ’ ಎಂದರು

‘ಪೊಲೀಸ್‌ ಇಲಾಖೆಯಲ್ಲಿ ಶೇ 45 ರಷ್ಟು ಹುದ್ದೆಗಳು ಖಾಲಿ ಇವೆ. ಜೊತೆಗೆ ಬೇರೆ ಇಲಾಖೆಗಳಲ್ಲೂ ಖಾಲಿ ಇರುವ ಸ್ಥಾನಗಳನ್ನು ತುಂಬುವ ಕೆಲಸ ಆಗುತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

‘ಶಾಸಕ ಸಿದ್ದರಾಮಯ್ಯ ಅವರ ಪ್ರಭಾವ ಬಾದಾಮಿಯಲ್ಲಿ ಕೆಲಸ ಮಾಡುವುದಿಲ್ಲ. ಬಾದಾಮಿ ಸೇರಿದಂತೆ ತಾಲ್ಲೂಕಿನ ಕೆರೂರ, ಹಾಗೂ ಗುಳೇದಗುಡ್ಡದ ಸ್ಥಳೀಯ ಸಂಸ್ಥೆಗಳಲ್ಲೂ ಬಿಜೆಪಿ ಹೆಚ್ಚಿನ ಸ್ಥಾನ ಪಡೆಯಲಿದೆ’ ಎಂದರು.

ಶಾಸಕ ಸಿದ್ದು ಸವದಿ ಮಾತನಾಡಿ, ‘ಜಿಲ್ಲೆಯ ಮುಳುಗಡೆ ಸಮಸ್ಯೆಯ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಸಂತ್ರಸ್ತರು ಈ ಭಾಗದ ಅಭಿವೃದ್ಧಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ’ ಎಂದರು.

‘ಜಿಲ್ಲೆಯ ಕಬ್ಬು ಕಾರ್ಖಾನೆಗಳು ರೈತರ ಬಾಕಿ ಹಣವನ್ನು ಇಲ್ಲಿಯವರೆಗೆ ರೈತರ ಖಾತೆಗೆ ಜಮೆ ಮಾಡಿಲ್ಲ. ರಾಜ್ಯ ಸರ್ಕಾರ ಶಿಸ್ತು ಕ್ರಮದ ಮೂಲಕ ಕಾರ್ಖಾನೆಗಳಿಗೆ ಹೇಳಬೇಕಿತ್ತು ಆದರೆ, ಆ ಕೆಲಸವು ಆಗಿಲ್ಲ’ ಎಂದು ದೂರಿದರು.

ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಶಾಸಕರಾದ ಎಂ.ಕೆ.ಪಟ್ಟಣಶೆಟ್ಟಿ, ಶ್ರೀಕಾಂತ ಕುಲಕರ್ಣಿ, ನಾರಾಯಣಸಾ ಭಾಂಡಗೆ ಪಾಲ್ಗೊಂಡಿದ್ದರು.

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !