ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಪಂಜಿನ ಮೆರವಣಿಗೆ

7
ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿ ಜಾರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಒತ್ತಾಯ

ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಪಂಜಿನ ಮೆರವಣಿಗೆ

Published:
Updated:
Deccan Herald

ಚಿಕ್ಕಬಳ್ಳಾಪುರ: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರದ ಮಿನಮೇಷ ಎಣಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಮಂಗಳವಾರ ರಾತ್ರಿ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಜಿಲ್ಲಾ ಘಟಕದ ಸಂಚಾಲಕ ತಿಪ್ಪೇನಹಳ್ಳಿ ನಾರಾಯಣ, ‘ಪರಿಶಿಷ್ಟ ಜಾತಿಯ ಮೀಸಲಾತಿ ವರ್ಗೀಕರಣಕ್ಕಾಗಿ ನೇಮಕವಾಗಿದ್ದ ನ್ಯಾಯಮೂರ್ತಿ ಸದಾಶಿವ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿ ಅನೇಕ ವರ್ಷಗಳಿವೆ. ಆಯೋಗದ ವರದಿಯನ್ನು ಯಥಾವತ್ತಾಗಿ ಅನುಮೋದಿಸಿ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿ ಎಂದು ಒತ್ತಾಯಿಸಿ ಅನೇಕ ವರ್ಷಗಳಿಂದ ಹೋರಾಡುತ್ತ ಬರಲಾಗುತ್ತಿದೆ. ಆದರೆ ಸರ್ಕಾರ ನಮ್ಮ ಬೇಡಿಕೆ ಈಡೇರಿಸಲು ಮುಂದಾಗುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ 101 ಪಂಗಡಗಳಿವೆ. ಇದಕ್ಕೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗಗಳಿಗೆ ಶೇ15 ರಷ್ಟು ಮೀಸಲಾತಿ ಕಲ್ಪಿಸುವುದು ರಾಜ್ಯ ಮತ್ತು ಕೇಂದ್ರ ಸರ್ಕಾರದ ಕರ್ತವ್ಯವಾಗಬೇಕು. ಅದನ್ನು ಬಿಟ್ಟು ನಮ್ಮನ್ನಾಳುವ ರಾಜಕೀಯ ಪಕ್ಷಗಳು ಕಳೆದ 70 ವರ್ಷಗಳಿಂದ ಪರಿಶಿಷ್ಟ ಜಾತಿಗೆ ನ್ಯಾಯಬದ್ಧ ಮೀಸಲಾತಿ ಕಲ್ಪಿಸದೇ ಅನ್ಯಾಯ ಮಾಡಿದ್ದಾರೆ’ ಎಂದು ದೂರಿದರು.

‘ರಾಜ್ಯ ಸರ್ಕಾರ ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನಗೊಳಿಸಿ, ಕೂಡಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಮಾಡದಿದ್ದರೆ ಅದಕ್ಕೆ ಸೂಕ್ತ ಕಾರಣ ತಿಳಿಸಬೇಕು. ಸಮಾಜದಲ್ಲಿ ಇವತ್ತು ಮಾದಿಗರಿಗೂ ಸಮಾನತೆ ದೊರೆಯಬೇಕಾಗಿದೆ. ಸಮುದಾಯದ ಮುಂದಿನ ಪೀಳಿಗೆಯ ಭವಿಷ್ಯದ ದೃಷ್ಟಿಯಿಂದಲಾದರೂ ಸದಾಶಿವ ಆಯೋಗದ ವರದಿ ಜಾರಿಯಾಗಲೇಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯದಲ್ಲಿ ಮಾದಿಗರನ್ನು ರಾಜಕಾರಣಿಗಳು ಕೇವಲ ಮತಕ್ಕಾಗಿ ಬಳಸಿಕೊಳ್ಳುತ್ತಿರುವುದು ದುರಂತ. ಮಾದಿಗ ಸಮುದಾಯ ಇವತ್ತು ಹೀನಾಯ ಸ್ಥಿತಿ ತಲುಪಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅದರ ಏಳಿಗೆಗೆ ಮುಂದಾಗುತ್ತಿಲ್ಲ. ಇಂದಿಗೂ ವಿದ್ಯಾಭ್ಯಾಸ, ಉದ್ಯೋಗ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಮಾದಿಗರಿಗೆ ವಂಚನೆಯಾಗುತ್ತಲೇ ಇದೆ’ ಎಂದು ಆರೋಪಿಸಿದರು.

ಮುಖಂಡರಾದ ಗೊರಮಡುಗು ನಾರಾಯಣಸ್ವಾಮಿ, ಕಡ್ಡೀಲು ವೈ.ಎ.ವೆಂಕಟರವಣ, ಎಂ.ಜಿ.ಶಶಿಕುಮಾರ್, ಕೆ.ನಂಜುಂಡಪ್ಪ, ಚಂದ್ರಣ್ಣ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !