ತೈಲೋತ್ಪನ್ನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ: ಕೇಂದ್ರದ ವಿರುದ್ಧ ಆಕ್ರೋಶ

7
ಜಯ ಕರ್ನಾಟಕ ಸಂಘಟನೆ ಸದಸ್ಯರ ಮೆರವಣಿಗೆ

ತೈಲೋತ್ಪನ್ನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ: ಕೇಂದ್ರದ ವಿರುದ್ಧ ಆಕ್ರೋಶ

Published:
Updated:
Deccan Herald

ಕೋಲಾರ: ತೈಲೋತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ಜಯ ಕರ್ನಾಟಕ ಸಂಘಟನೆ ಸದಸ್ಯರು ಇಲ್ಲಿ ಶುಕ್ರವಾರ ಪ್ರತಿಭಟನೆ ಮಾಡಿದರು.

ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಹೋದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್‌, ಡೀಸೆಲ್‌ ಹಾಗೂ ಅಡುಗೆ ಅನಿಲ ಸಿಲಿಂಡರ್‌ ಬೆಲೆ ಏರು ಗತಿಯಲ್ಲಿ ಸಾಗಿದೆ. ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಬೆಲೆ ಏರಿಕೆಯಿಂದ ಜನಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರವು ತೈಲೋತ್ಪನ್ನ ಹಾಗೂ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ’ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಆರ್.ತ್ಯಾಗರಾಜ್ ದೂರಿದರು.

‘ತೈಲೋತ್ಪನ್ನಗಳ ಬೆಲೆಯನ್ನು ಪ್ರತಿನಿತ್ಯ ಏರಿಕೆ ಮಾಡಲಾಗುತ್ತಿದೆ. ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಸರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟ ತಲುಪಿದೆ. ಬೇಳೆ ಕಾಳು, ಅಕ್ಕಿ, ಅಡುಗೆ ಎಣ್ಣೆಯಂತಹ ಆಹಾರ ಪದಾರ್ಥಗಳ ಬೆಲೆ ದುಪ್ಪಟ್ಟಾಗಿದೆ. ದುಡಿಮೆಯ ಹಣ ಜೀವನ ನಿರ್ವಹಣೆಗೆ ಸಾಕಾಗುತ್ತಿಲ್ಲ. ಕೇಂದ್ರದ ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಬಡ ಮತ್ತು ಮಧ್ಯಮ ವರ್ಗದ ಜನ, ಕಾರ್ಮಿಕರು, ರೈತರು ತೊಂದರೆ ಅನುಭವಿಸುವಂತಾಗಿದೆ’ ಎಂದು ಹೇಳಿದರು.

ತೆರಿಗೆ ಹೊರೆ: ‘ಪ್ರಧಾನಿ ಮೋದಿ ಜನಪರ ಆಡಳಿತ ನೀಡುವಲ್ಲಿ ವಿಫಲರಾಗಿದ್ದಾರೆ. ಬಂಡವಾಳಶಾಹಿಗಳು ಹಾಗೂ ಕಾರ್ಪೊರೇಟ್‌ ಕಂಪನಿಗಳ ಕೈಗೊಂಬೆಯಾಗಿರುವ ಅವರಿಗೆ ಜನಸಾಮಾನ್ಯರ ಕಷ್ಟದ ಅರಿವಿಲ್ಲ. ಅಮಾನ್ಯೀಕರಣ ಕ್ರಮದಿಂದ ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಜನರ ಮೇಲೆ ತೆರಿಗೆ ಹೊರೆ ಹೆಚ್ಚಿದೆ’ ಎಂದು ಧರಣಿನಿರತರು ಆರೋಪಿಸಿದರು.

‘ಕೇಂದ್ರದ ದುರಾಡಳಿತದಿಂದ ಬೇಸತ್ತಿರುವ ಜನ ಹಿಡಿಶಾಪ ಹಾಕುತ್ತಿದ್ದಾರೆ. ತೈಲೋತ್ಪನ್ನ ಹಾಗೂ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸದಿದ್ದರೆ ಮತ್ತಷ್ಟು ಕಷ್ಟದ ದಿನಗಳು ಎದುರಾಗುತ್ತವೆ. ತೈಲೋತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕು. ತೈಲೋತ್ಪನ್ನ ಕಂಪನಿಗಳನ್ನು ರಾಷ್ಟ್ರೀಕರಣಗೊಳಿಸಿ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಜನ ಬೀದಿಗಿಳಿದು ಹೋರಾಟ ಮಾಡುತ್ತಾರೆ’ ಎಂದು ಎಚ್ಚರಿಕೆ ನೀಡಿದರು.

ಸಂಘಟನೆ ಸದಸ್ಯರಾದ ಕೆ.ದಿನೇಶ್, ಎಸ್.ಸುಧಾಕರ್, ರಮೇಶ್, ಶ್ರೀನಿವಾಸ್, ವಿ.ಜಗದೀಶ್, ಕೆ.ಎನ್.ಕಾಂತರಾಜು, ವೇಣು, ಮಂಜುನಾಥರಾವ್, ಪಿ.ಅಶೋಕ್, ಸಿ.ಮಂಜುನಾಥ್, ಕೆ.ಶ್ರೀಧರ್, ಕೆ.ವಿ.ನಾರಾಯಣಸ್ವಾಮಿ, ಎಂ.ಶ್ರೀನಿವಾಸ್ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !