ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡಿ: ಶಾಸಕ ಡಾ.ಕೆ.ಸುಧಾಕರ್ ಸಲಹೆ

7
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮ

ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡಿ: ಶಾಸಕ ಡಾ.ಕೆ.ಸುಧಾಕರ್ ಸಲಹೆ

Published:
Updated:
Deccan Herald

ಚಿಕ್ಕಬಳ್ಳಾಪುರ: ‘ವಿದ್ಯಾರ್ಥಿಗಳು ಕೇವಲ ತರಗತಿಯ ಪಾಠಗಳಿಗೆ ಸೀಮಿತರಾಗದೆ ಕಲೆ, ಸಾಹಿತ್ಯ, ಸಂಗೀತ, ನೃತ್ಯದಂತಹ ವ್ಯಕ್ತಿತ್ವ ವಿಕಸನಗೊಳಿಸುವ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು’ ಎಂದು ಶಾಸಕ ಡಾ.ಕೆ.ಸುಧಾಕರ್ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ರೆಡ್‌ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ಎನ್‌ಸಿಸಿ, ಕ್ರೀಡೆಗಳು, ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಒಳ್ಳೆಯ ನಾಯಕತ್ವ ಗುಣಗಳನ್ನು ಬೆಳೆಸುತ್ತವೆ. ಆದ್ದರಿಂದ ಅಂತಹ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು’ ಎಂದು ತಿಳಿಸಿದರು.

‘ಮನುಷ್ಯನಿಗೆ ಹುಟ್ಟು ಮತ್ತು ಸಾವು ಖಚಿತ. ಆದರೆ ಅವುಗಳ ನಡುವೆ ನಾವು ಈ ಬದುಕಿನಲ್ಲಿ ಭೂಮಿಯ ಮೇಲೆ ನಮ್ಮದೇ ಆದ ವಿಶೇಷ ಹೆಜ್ಜೆ ಗುರುತುಗಳನ್ನು ಬಿಟ್ಟು ಹೋಗಬೇಕು. ಪ್ರತಿಯೊಬ್ಬರಲ್ಲಿಯೂ ಒಂದು ಪ್ರತಿಭೆ ಇರುತ್ತದೆ. ಅದನ್ನು ನಾವು ಗುರುತಿಸಿಕೊಳ್ಳಬೇಕು. ವಿದ್ಯಾರ್ಥಿಗಳ ಒಳಗಿನ ಸೃಜನಶೀಲತೆಯನ್ನು ಪೋಷಕರು, ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕು’ ಎಂದರು.

‘ಈ ಕಾಲೇಜು ಪ್ರಾರಂಭವಾಗಿ 50 ವರ್ಷಗಳನ್ನು ಪೂರೈಸಿದೆ. ಅದರ ಸವಿನೆನಪಿಗಾಗಿ ಆರು ತಿಂಗಳ ಒಳಗೆ ಸುವರ್ಣ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಮುಂದಿನ ಎರಡು ವರ್ಷಗಳ ಒಳಗೆ ಕಾಲೇಜಿಗೆ ಒಳಾಂಗಣ ಕ್ರೀಡಾಂಗಣ ನಿರ್ಮಿಸಲಾಗುತ್ತದೆ. ಹೆಚ್ಚುವರಿ ಕೊಠಡಿಗಳು ಮತ್ತು ಮೂಲಸೌಕರ್ಯ ಒದಗಿಸುವ ₨6 ಕೋಟಿ ವೆಚ್ಚದ ಕಾಮಗಾರಿ ಒಂದು ವಾರದಲ್ಲಿ ಆರಂಭವಾಗಲಿದೆ’ ಎಂದು ಹೇಳಿದರು.

‘ಬದಕು ಕಟ್ಟಿಕೊಳ್ಳಬೇಕಾದರೆ ಬದುಕಿಗೆ ಬೇಕಾದ ಶಿಕ್ಷಣ ಪಡೆಯಬೇಕು. ಸ್ವಯಂ ಉದ್ಯೋಗ ಮಾಡುವ ಮನಸ್ಸು ಎಲ್ಲರಿಗೂ ಬರಬೇಕು ಉದ್ಯೋಗ ಪಡೆಯುವುದು ಮಾತ್ರವಲ್ಲದೇ, ಅನೇಕರಿಗೆ ಉದ್ಯೋಗ ಕೊಡುವಂತೆ ಸೃಜನಶೀಲತೆ ಬೆಳೆಸಿಕೊಳ್ಳಬೇಕು. ಉನ್ನತ ಸಾಧಕರ ಬದುಕಿನ ಕುರಿತಾಗಿ ಓದಿದರೆ ವಿದ್ಯಾರ್ಥಿಗಳಿಗೆ ಹೆಚ್ಚು ಆತ್ಮವಿಶ್ವಾಸ ಬರುತ್ತದೆ’ ಎಂದು ತಿಳಿಸಿದರು.

ನಗರಸಭೆ ಅಧ್ಯಕ್ಷ ಮುನಿಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮರಳುಕುಂಟೆ ಕೃಷ್ಣಮೂರ್ತಿ, ಮುಖಂಡರಾದ ಸಂದೀಪ್ ಚಕ್ರವರ್ತಿ, ಪ್ರಾಂಶುಪಾಲ ನಾರಾಯಣಸ್ವಾಮಿ, ನಗರಸಭೆ ಆಯುಕ್ತ ಉಮಾಕಾಂತ್ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !