ಟಿಪ್ಪು ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ

7

ಟಿಪ್ಪು ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ

Published:
Updated:
Deccan Herald

ಕೋಲಾರ: ಜಿಲ್ಲೆಯಲ್ಲಿ ಟಿಪ್ಪು ಸುಲ್ತಾನ್‌ ಜಯಂತಿಯನ್ನು ಹಿಂದಿನ ವರ್ಷದಂತೆಯೇ ನ.10ರಂದು ಅರ್ಥಪೂರ್ಣವಾಗಿ ಆಚರಿಸಲು ನಗರದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ‘ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸಲಾಗುತ್ತಿದೆ. ಕಾರ್ಯಕ್ರಮ ಶಾಂತಿಯುವಾಗಿ ನಡೆಸಲು ಪ್ರತಿಯೊಬ್ಬರು ಸಹಕಾರ ನೀಡಬೇಕು. ಜಯಂತಿ ಒಂದು ಸಮುದಾಯಕ್ಕೆ ಸೀಮಿತವಾಗುವುದು ಬೇಡ. ಎಲ್ಲಾ ಸಮುದಾಯದವರು ಒಟ್ಟಾಗಿ ಸೌಹಾರ್ದದಿಂದ ಜಯಂತಿ ಆಚರಿಸೋಣ’ ಎಂದು ಮನವಿ ಮಾಡಿದರು.

‘ಕ್ಲಾಕ್‌ ಟವರ್ ವೃತ್ತದ ಬಳಿಯ ಹೈದರಾಲಿ ಪೂರ್ವಜರ ಸಮಾಧಿ ಆವರಣದಲ್ಲಿ ಗಣ್ಯರು ಬೆಳಿಗ್ಗೆ 10.30ಕ್ಕೆ ಚಾದರ್ ಅರ್ಪಿಸಿ, ಧ್ವಜಾರೋಹಣ ಮಾಡುತ್ತಾರೆ. ನಂತರ 11.30ಕ್ಕೆ ಟಿ.ಚನ್ನಯ್ಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯುತ್ತದೆ. ಟಿಪ್ಪು ಸುಲ್ತಾನ್ ಹೆಸರಿನಲ್ಲಿ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪುರಸ್ಕರಿಸಲಾಗುತ್ತದೆ’ ಎಂದು ವಿವರಿಸಿದರು.

‘ಸಂಪನ್ಮೂಲ ವ್ಯಕ್ತಿಗಳು ಟಿಪ್ಪು ಸುಲ್ತಾನ್ ಬಗ್ಗೆ ವಿಶೇಷ ಉಪನ್ಯಾಸ ನೀಡುತ್ತಾರೆ. ರಾಜ್ಯ ಸರ್ಕಾರದ ಆದೇಶದಂತೆ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಮೆರವಣಿಗೆ ಹಾಗೂ ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಅವಕಾಶ ನೀಡಿಲ್ಲ. ಶಾಂತಿ ಸುವ್ಯವಸ್ಥೆ ಮತ್ತು ಕೋಮು ಸಾಮರಸ್ಯಕ್ಕೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಏನೇ ಸಮಸ್ಯೆ ಎದುರಾದರೂ ಜಿಲ್ಲಾಡಳಿತದ ಗಮನಕ್ಕೆ ತರಬೇಕು’ ಎಂದು ಸೂಚಿಸಿದರು.

ನಿಷೇಧಾಜ್ಞೆ: ‘ಟಿಪ್ಪು ಸುಲ್ತಾನ್‌ ಜಯಂತಿ ದಿನ ಜಿಲ್ಲೆಯಾದ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವಂತೆ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುತ್ತೇವೆ. ನಿಷೇಧಾಜ್ಞೆ ಜಾರಿಯಾದ ಪ್ರದೇಶದಲ್ಲಿ 4ಕ್ಕಿಂತ ಹೆಚ್ಚು ಜನ ಗುಂಪುಗೂಡುವಂತಿಲ್ಲ. ಎಲ್ಲರೂ ಕಾನೂನು ಪಾಲನೆ ಮಾಡಬೇಕು’ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರಕುಮಾರ್ ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಜಗದೀಶ್ ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !