ಶನಿವಾರ, ಮಾರ್ಚ್ 6, 2021
32 °C
‘ಘನತೆಯಿಂದ ಬದುಕುವುದು ಎಲ್ಲರ ಹಕ್ಕು’

ಮಾನವ ಹಕ್ಕುಗಳ ರಕ್ಷಣೆಗೆ ಬದ್ಧರಾಗಿ: ಜಿಲ್ಲಾ ನ್ಯಾಯಾಧೀಶ ಅನಿಲ್ ಕಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬಾಗಲಕೋಟೆ: ‘ಸ್ವಾತಂತ್ರ್ಯ, ಸಮಾನತೆ ಹಾಗೂ ಘನತೆಯಿಂದ ಜೀವಿಸಲು ಸಂವಿಧಾನ ಎಲ್ಲರಿಗೂ ಹಕ್ಕುಗಳನ್ನು ನೀಡಿದೆ. ಅವು ಉಲ್ಲಂಘನೆಯಾಗದಂತೆ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿಲ್ ಕಟ್ಟಿ ಹೇಳಿದರು.

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಜಿಲ್ಲಾಡಳಿತದಿಂದ ಆಯೋಜಿಸಿದ್ದ ‘ವಿಶ್ವ ಮಾನವ ಹಕ್ಕುಗಳ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ ದೇಶದ ಅನೇಕ ಭಾಗಗಳಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗುತ್ತಿರುವುದು ದುರ್ದೈವದ ಸಂಗತಿ’ ಎಂದು ಬೇಸರ ವ್ಯಕ್ತಪಡಿಸಿದರು.

‘ಮಾನವ ಹಕ್ಕುಗಳ ಉಲ್ಲಂಘನೆ ಕಂಡು ಬಂದಲ್ಲಿ ದೂರು ದಾಖಲಿಸಬಹುದಾಗಿದೆ. ಅದಕ್ಕಾಗಿ ಜಿಲ್ಲಾ ಮಟ್ಟದಲ್ಲಿಯೂ ಮಾನವ ಹಕ್ಕುಗಳ ನ್ಯಾಯಾಲಯ ಸ್ಥಾಪಿಸಲಾಗಿದೆ. ಮಾನವ ಹಕ್ಕುಗಳನ್ನು ರಕ್ಷಿಸುವ ಜೊತೆಗೆ ನ್ಯಾಯಯುತ ಜಗತ್ತನ್ನು ಸೃಷ್ಟಿಸುವ ಕೆಲಸವಾಗಬೇಕಿದೆ’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಮ್ ಮಾತನಾಡಿ, ‘ಮಾನವ ಹಕ್ಕುಗಳನ್ನು ನಾವೆಲ್ಲರೂ ಗೌರವಿಸುವ ಜೊತೆಗೆ ಅವುಗಳು ಉಲ್ಲಂಘನೆಯಾಗದಂತೆ ಕಾಪಾಡಬೇಕಿದೆ. ಎಲ್ಲ ರೀತಿಯ ತಾರತಮ್ಯ, ದೌರ್ಜನ್ಯ, ಅಮಾನವೀಯತೆಯಿಂದ ಮುಕ್ತರಾಗುವ ಜೊತೆಗೆ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಆಯೋಗ ಸ್ಥಾಪಿಸಲಾಗಿದೆ’ ಎಂದರು.

ಎಸ್.ಸಿ.ನಂದಿಮಠ ಕಾನೂನು ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ವಿ.ಎಸ್.ಶಿರೋಳ ಮಾತನಾಡಿ, ‘19ನೇ ಶತಮಾನದಲ್ಲಿ 1 ಹಾಗೂ 2ನೇ ಮಹಾಯುದ್ಧದ ಸಂದರ್ಭದಲ್ಲಿ ಮಾನವನ ಅವನತಿ, ನಿರ್ನಾಮ, ಜನಾಂಗೀಯ ತಾರತಮ್ಯ ಅಮಾನುಷ ಕೃತ್ಯಗಳು, ಮಹಿಳೆಯರ ಬಗ್ಗೆ ತಾರತಮ್ಯ ಕಂಡು ಬಂದವು. ಇದನ್ನು ಮನಗಂಡು ಎಲ್ಲ ರಾಷ್ಟ್ರಗಳು 1945ರಲ್ಲಿ ಸಂಯುಕ್ತ ರಾಷ್ಟ್ರ ಸಂಘ ಸ್ಥಾಪಿಸಿ ಮಾನವ ಹಕ್ಕಗಳ ರಕ್ಷಣೆಗೆ ಮುಂದಾದವು’ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಮ್ ಪ್ರತಿಜ್ಞಾವಿಧಿ ಬೋಧಿಸಿದರು. ವಿಶ್ವ ಮಾನವ ಹಕ್ಕುಗಳ ಸೇವಾ ಸಮಿತಿಯ ಅಧ್ಯಕ್ಷ ಎಸ್.ಬಿ.ಕರಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುಜಾತಾ ಪಾಟೀಲ, ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ದುರ್ಗೇಶ, ಡಿ.ವೈ.ಎಸ್.ಪಿ ಗಿರೀಶ ಪಾಲ್ಗೊಂಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು