ಸೋಮವಾರ, ಡಿಸೆಂಬರ್ 9, 2019
22 °C

ಅಧ್ಯಯನ ಪ್ರವಾಸದಿಂದ ಜ್ಞಾನ ವೃದ್ಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಕೋಲಾರ: ‘ವಿದ್ಯಾರ್ಥಿಗಳು ಐತಿಹಾಸಿಕ ಸ್ಥಳಗಳಿಗೆ ಭೇಟಿ ಕೊಡುವುದರ ಜತೆಗೆ ಆ ಸ್ಥಳಗಳ ಮಾಹಿತಿ ಸಂಗ್ರಹಿಸಿದರೆ ಜ್ಞಾನ ವೃದ್ಧಿಯಾಗುತ್ತದೆ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅಭಿಪ್ರಾಯಪಟ್ಟರು.

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸದಸ್ಯರ ಅಧ್ಯಯನ ಪ್ರವಾಸಕ್ಕೆ ನಗರದಲ್ಲಿ ಬುಧವಾರ ಚಾಲನೆ ನೀಡಿ ಮಾತನಾಡಿ, ‘ಅಧ್ಯಯನ ಪ್ರವಾಸದಲ್ಲಿ ಮನರಂಜನೆಯೂ ಸಿಗುತ್ತದೆ. ಪ್ರವಾಸದ ವೇಳೆ ಬಹಳ ಎಚ್ಚರಿಕೆಯಿಂದ ಇರಬೇಕು’ ಎಂದು ಸಲಹೆ ನೀಡಿದರು.

‘ಮಕ್ಕಳು ಪಠ್ಯ ವಿಷಯಕ್ಕಷ್ಟೇ ಸೀಮಿತವಾಗದೆ ಕ್ರೀಡೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಸಾಹಿತ್ಯದ ಪುಸ್ತಕಗಳು ಹಾಗೂ ದಿನಪತ್ರಿಕೆಗಳನ್ನು ಓದಬೇಕು. ಐತಿಹಾಸಿಕ ಸ್ಥಳಗಳಿಗೆ ಪ್ರವಾಸ ಹೋಗಬೇಕು’ ಎಂದು ಕಿವಿಮಾತು ಹೇಳಿದರು.

‘ಇತಿಹಾಸ ಓದಿದರೆ ಮಾತ್ರ ಹೊಸ ಇತಿಹಾಸ ಸೃಷ್ಟಿಸಲು ಸಾಧ್ಯ. ಏನೂ ತಿಳಿಯದೆ ಇತಿಹಾಸ ಸೃಷ್ಟಿಸುವುದು ಸಾಧ್ಯವಿಲ್ಲ. ದೇಶ ಸುತ್ತಿ ಕೋಶ ಓದಿ ಎಂಬ ಮಾತಿನಂತೆ ವಿದ್ಯಾರ್ಥಿ-ಗಳು ಪ್ರವಾಸ ಹೋಗಿ ನಾಡಿನ ಕಲೆ, ಸಂಸ್ಕತಿ, ಪರಂಪರೆ ತಿಳಿಯಬೇಕು’ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಜಿಲ್ಲಾ ಮುಖ್ಯ ಆಯುಕ್ತ ಕೆ.ವಿ.ಶಂಕರಪ್ಪ ಹೇಳಿದರು.

‘ರಾಜ್ಯದಲ್ಲಿ ಸಾಕಷ್ಟು ಐತಿಹಾಸಿಕ ಮತ್ತು ಪುರಾಣ ಪ್ರಸಿದ್ಧ ಸ್ಥಳಗಳಿವೆ. ಅಧ್ಯಯನ ಪ್ರವಾಸವು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕ. ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಗೌಡ, ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್, ಸಂಸ್ಥೆಯ ಜಿಲ್ಲಾ ಆಯುಕ್ತರಾದ ಕೆ.ಆರ್.ಜಯಶ್ರೀ, ಸುರೇಶ್, ಕಾರ್ಯದರ್ಶಿ ಎಂ.ವಿ.ಜನಾರ್ದನ್, ಸಂಘಟನಾ ಆಯುಕ್ತ ವಿ.ಬಾಬು ಹಾಜರಿದ್ದರು.

ಪ್ರತಿಕ್ರಿಯಿಸಿ (+)