ಕುಡಾ ಆಡಳಿತ ಸುಧಾರಣೆಗೆ ಕ್ರಮ

7

ಕುಡಾ ಆಡಳಿತ ಸುಧಾರಣೆಗೆ ಕ್ರಮ

Published:
Updated:
Prajavani

ಕೋಲಾರ: ‘ಪ್ರಾಧಿಕಾರದ ಆಡಳಿತ ಸುಧಾರಣೆ ಹಾಗೂ ಪಾರದರ್ಶಕತೆ ತರಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮಾಜುದ್ದೀನ್‌ ಖಾನ್‌ ತಿಳಿಸಿದರು.

ಇಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪ್ರಾಧಿಕಾರದ ಅಧಿಕಾರಿಗಳ ಮತ್ತು ಸಿಬ್ಬಂದಿಯ ಸಭೆ ನಡೆಸಿ ಆಡಳಿತ ಸುಧಾರಣೆಗೆ ಒತ್ತು ನೀಡುವಂತೆ ಸೂಚಿಸಲಾಗಿದೆ’ ಎಂದರು.

‘ಹೊಣೆಗಾರಿಕೆ ಹೆಚ್ಚಿಸುವುದು, ಅಧಿಕಾರದಲ್ಲಿ ಸೃಜನಶೀಲತೆ ಕಾಪಾಡುವುದು, ಯೋಜಿತಾ ಗುರಿ ಸಾಧಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಸಿಬ್ಬಂದಿಗೆ ತಿಳಿವಳಿಕೆ ನೀಡಲಾಗಿದೆ. ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿದ್ದ ಯೋಜನೆಗಳನ್ನು ಹಿಂದಿನ ವರ್ಷ ಪೂರ್ಣಗೊಳಿಸಲಾಗಿದೆ’ ಎಂದು ಹೇಳಿದರು.

‘ನಗರದ ಹೊರವಲಯದಲ್ಲಿ ವರ್ತುಲ ರಸ್ತೆ ನಿರ್ಮಿಸುವ ಸಂಬಂಧ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವ ಸಲ್ಲಿಸಲಾಗಿದೆ. ಮೊದಲ ಹಂತದಲ್ಲಿ ₹ 81 ಕೋಟಿ ಅಂದಾಜು ವೆಚ್ಚದಲ್ಲಿ 6.45 ಕಿ.ಮೀ ವರ್ತುಲ ರಸ್ತೆ ನಿರ್ಮಿಸುವ ಗುರಿಯಿದೆ. ಮಾಲೂರು ರಸ್ತೆಯಿಂದ ಬೆಂಗಳೂರು ರಸ್ತೆ, ಅಂತರಗಂಗೆ ಬೆಟ್ಟದ ರಸ್ತೆ, ಖಾದ್ರಿಪುರ ರಸ್ತೆ, ಚಿಕ್ಕಬಳ್ಳಾಪುರ ರಸ್ತೆ, ಚಿಂತಾಮಣಿ ರಸ್ತೆ, ಶ್ರೀನಿವಾಸಪುರ ರಸ್ತೆವರೆಗೆ ವರ್ತುಲ ರಸ್ತೆ ಸಂಪರ್ಕ ಕಲ್ಪಿಸಲಿದೆ’ ಎಂದು ವಿವರಿಸಿದರು.

ಅರ್ಜಿ ವಿಲೇವಾರಿ: ‘ಟಮಕ ಬಡಾವಣೆಯಲ್ಲಿ ವಿದ್ಯುತ್ ಸೌಕರ್ಯ ಕಲ್ಪಿಸಲಾಗುವುದು. ಆಟದ ಮೈದಾನ ಮತ್ತು ಉದ್ಯಾನ ಅಭಿವೃದ್ಧಿಪಡಿಸಲಾಗುವುದು. ಹೊಸ ಬಡಾವಣೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು. ಸಾರ್ವಜನಿಕರಿಂದ ಸ್ವೀಕರಿಸಿದ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ. ಅರ್ಜಿ ಪಡೆದ ನಂತರ 3 ದಿನದಲ್ಲಿ ವಿಲೇವಾರಿ ಮಾಡಲಾಗುತ್ತದೆ’ ಎಂದರು.

‘ಆನ್‌ಲೈನ್‌ ಮೂಲಕ ಸಲ್ಲಿಕೆಯಾದ ಅರ್ಜಿ ಮತ್ತು ವಿವಿಧ ಪರವಾನಗಿಗೆ ಸಂಬಂಧಿಸಿದ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ 3 ದಿನದೊಳಗೆ ವಿಲೇವಾರಿ ಮಾಡಲಾಗುತ್ತದೆ. ಸಿಬ್ಬಂದಿ ಹಾಜರಾತಿ ದಾಖಲು ಮಾಡಲು ಬಯೋ ಮೆಟ್ರಿಕ್ ವ್ಯವಸ್ಥೆ ಜಾರಿಗೊಳಿಸಲಾಗುತ್ತದೆ. ಸಿಬ್ಬಂದಿ ಕಾರ್ಯ ಚಟುವಟಿಕೆ ಮೇಲೆ ನಿಗಾ ಇಡಲು ಕಚೇರಿಯಲ್ಲಿ ಸಿ.ಸಿ ಕ್ಯಾಮೆರಾ ಅಳವಡಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.

ಶಿಸ್ತುಕ್ರಮ: ‘ಕಚೇರಿಯಲ್ಲಿ ಇ–ವ್ಯವಸ್ಥೆ ಅನುಷ್ಠಾನಗೊಳಿಸಲಾಗುವುದು. ನಗರದಲ್ಲಿ ಕೆಲವರು ಪರವಾನಗಿ ಇಲ್ಲದೆ ಬಹುಮಹಡಿ ಕಟ್ಟಡ ನಿರ್ಮಿಸುತ್ತಿರುವ ಬಗ್ಗೆ ಸಾಕಷ್ಟು ದೂರು ಬಂದಿವೆ. ನಿಯಮಬಾಹಿರವಾಗಿ ಮೂರ್ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಿಸಲಾಗುತ್ತದೆ. ಅಂತಹವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !