ಯುವ ಮತದಾರರಲ್ಲಿ ಉತ್ಸಾಹ ಮೂಡಿಸಿ

7
ಅಧಿಕಾರಿಗಳಿಗೆ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ ಸಲಹೆ

ಯುವ ಮತದಾರರಲ್ಲಿ ಉತ್ಸಾಹ ಮೂಡಿಸಿ

Published:
Updated:
Prajavani

ಚಿಕ್ಕಬಳ್ಳಾಪುರ: ‘ಜನವರಿ 25 ರಂದು ಜರುಗುವ ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮದಲ್ಲಿ ಬೂತ್‌ಮಟ್ಟದ ಏಜೆಂಟರುಗಳು ಪಾಲ್ಗೊಳ್ಳುವ ಮೂಲಕ ಯುವ ಮತದಾರರಲ್ಲಿ ಜಾಗೃತಿ ಮೂಡಿಸಿ ಅವರನ್ನು ಪ್ರೋತ್ಸಾಹಿಸಬೇಕು’ ಎಂದು ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ ಹೇಳಿದರು.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ- 2019ರ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲೆಯ ವಿವಿಧ ಅಧಿಕಾರಿಗಳು ಹಾಗೂ ರಾಜಕೀಯ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

‘ರಾಷ್ಟ್ರೀಯ ಮತದಾರರ ದಿನಾಚರಣೆಗೆ ಸರ್ಕಾರಿ ಕಾರ್ಯಕ್ರಮ ಎನಿಸದೆ, ಯುವ ಮತದಾರರ ಉತ್ಸಾಹದ ದಿನದಂತೆ ಆಚರಿಸಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು’ ಎಂದು ತಿಳಿಸಿದರು.

‘ಅಧಿಕಾರಿಗಳು ಮತದಾರರ ಪಟ್ಟಿಯಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಕಾರ್ಯನಿರ್ವಹಿಸಬೇಕು. ದೋಷ ರಹಿತ ಮತದಾರರ ಪಟ್ಟಿ ಸಿದ್ಧಪಡಿಸುವ ನಿಟ್ಟಿನಲ್ಲಿ, ಅರ್ಹ ಮತದಾರರ ಒಳಗೊಂಡ ಮಾದರಿ ಮತದಾರರ ಪಟ್ಟಿ ತಯಾರಿಸಲು ಹಾಗೂ ಪರಿಷ್ಕರಣೆ ಸಂದರ್ಭದಲ್ಲಿ ಮತಗಟ್ಟೆ ಅಧಿಕಾರಿಗಳ ಹಾಗೂ ಮತಗಟ್ಟೆ ಏಜೆಂಟರುಗಳ ಸಹಕಾರ ಮಹತ್ವದ್ದಾಗಿದೆ’ ಎಂದರು.

‘ಜಿಲ್ಲೆಯಲ್ಲಿ ಈಗಾಗಲೇ ಮತದಾರರ ಪರಿಷ್ಕರಣೆ ಹಾಗೂ ಮತದಾರರ ಪಟ್ಟಿಯಲ್ಲಿನ ದೋಷಗಳ ನಿವಾರಣೆಗೆ ನಾಗರಿಕರಿಂದ ಆಕ್ಷೇಪಗಳನ್ನು ಆಹ್ವಾನಿಸಿ, ಲೋಪದೋಷಗಳನ್ನು ತಿದ್ದುಪಡಿ ಮಾಡಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಆಸಕ್ತಿ ತೋರದೆ ವಿಳಂಬ ಕಾರ್ಯ ಮಾಡುತ್ತಿರುವ ಮತಗಟ್ಟೆ ಹಾಗೂ ಮೇಲ್ವಿಚಾರಕರನ್ನು ಗುರುತಿಸಿ ಕ್ರಮ ಜರುಗಿಸಬೇಕು’ ಎಂದು ಸೂಚಿಸಿದರು.

‘ಯುವ ಜನರು ಹಾಗೂ ಅರ್ಹರಿದ್ದು, ಮತದಾರ ಪಟ್ಟಿಯಲ್ಲಿ ಸೇರದೇ ಇರುವವರನ್ನು ಗುರುತಿಸಿ ಮತದಾರರಾಗಿ ಸೇರ್ಪಡೆಗೊಳಿಸಲು ಅಧಿಕಾರಿಗಳು ಎಲ್ಲಾ ಸಾಧ್ಯತೆಗಳನ್ನು ಬಳಸಿಕೊಳ್ಳಲು ಮುಂದಾಗಬೇಕು. ಹೆಸರು ಹಾಗೂ ದೂರವಾಣಿ ವಿವರ ಇರುವ ಬೂತ್ ಮಟ್ಟದ ಏಜೆಂಟರುಗಳ ಪಟ್ಟಿಯನ್ನು ರಾಜಕೀಯ ಪಕ್ಷದವರು ಆಯಾ ತಾಲ್ಲೂಕಿನ ತಹಶೀಲ್ದಾರ್ ಅವರಿಗೆ ಸಲ್ಲಿಸಬೇಕು’ ಎಂದು ಹೇಳಿದರು.

ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅವರು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿಯನ್ನು ಜನವರಿ 16 ರಂದು ಪ್ರಕಟಿಸುವ ನಿಟ್ಟಿನಲ್ಲಿ ಕೈಗೊಳ್ಳಲಾದ ಕ್ರಮಗಳ ಕುರಿತು ವಿವರಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಗುರುದತ್ ಹೆಗಡೆ ಅವರು ಜಿಲ್ಲೆಯಲ್ಲಿ ಯುವ ಮತದಾರರ ಸೇರ್ಪಡೆ ಜಾಗೃತಿಗೆ ಕಾಲೇಜುಗಳಲ್ಲಿ ಕೈಗೊಳ್ಳಲಾಗುತ್ತಿರುವ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಕೆ.ಎನ್.ರಮೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್, ಚುನಾವಣಾ ತಹಶೀಲ್ದಾರ್ ಕುಮಾರಸ್ವಾಮಿ, ಜಿಲ್ಲೆಯ ಎಲ್ಲಾ ತಾಲ್ಲೂಕಿನ ತಹಶೀಲ್ದಾರ್ ಮತ್ತು ರಾಜಕೀಯ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !