ರೈತರು ಸಾಲ ಸವಲತ್ತು ಸದುಪಯೋಗಪಡಿಸಿಕೊಳ್ಳಿ

ಭಾನುವಾರ, ಮಾರ್ಚ್ 24, 2019
32 °C
ಪಿಎಲ್‌ಡಿ ಬ್ಯಾಂಕ್‌ ಆವರಣದಲ್ಲಿ ಬ್ಯಾಂಕಿನ ನೂತನ ಕಟ್ಟಡ ಹಾಗೂ ವಾಣಿಜ್ಯ ಸಂಕೀರ್ಣ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ

ರೈತರು ಸಾಲ ಸವಲತ್ತು ಸದುಪಯೋಗಪಡಿಸಿಕೊಳ್ಳಿ

Published:
Updated:
Prajavani

ಚಿಕ್ಕಬಳ್ಳಾಪುರ: ‘ತಾಲ್ಲೂಕು ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್‌ಡಿ) ಬ್ಯಾಂಕ್‌ನಲ್ಲಿ ದೊರೆಯುವ ಕಡಿಮೆ ಬಡ್ಡಿ ದರದ ಸಾಲವನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಸಂಸದ ಕೆ.ಎಚ್.ಮುನಿಯಪ್ಪ ತಿಳಿಸಿದರು.

ನಗರದಲ್ಲಿ ಶುಕ್ರವಾರ ಪಿಎಲ್‌ಡಿ ಬ್ಯಾಂಕ್‌ ಆವರಣದಲ್ಲಿ ನಡೆದ ಬ್ಯಾಂಕಿನ ನೂತನ ಕಟ್ಟಡ ಹಾಗೂ ವಾಣಿಜ್ಯ ಸಂಕೀರ್ಣ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಈ ಹಿಂದೆ ಅನೇಕ ಶಾಸಕರು ಆಡಳಿತ ನಡೆಸಿದರೂ ಪಿಎಲ್‌ಡಿ ಬ್ಯಾಂಕ್‌ಗೆ ಹೊಸ ಕಟ್ಟಡ ನಿರ್ಮಾಣ ಮಾಡಲು 50 ವರ್ಷ ಬೇಕಾಯಿತು. ಸುಧಾಕರ್ ಅವರ ಕಳೆದ ಐದು ವರ್ಷಗಳ ಅವಧಿಯಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆದಿವೆ. ಮುಂಬರುವ ದಿನಗಳಲ್ಲಿ ನಮ್ಮ ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ’ ಎಂದು ಹೇಳಿದರು.

ಸಂಸದ ಎಂ. ವೀರಪ್ಪ ಮೊಯಿಲಿ ಮಾತನಾಡಿ, ‘ಕಳೆದ ಐದು ವರ್ಷಗಳಿಂದ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಇನ್ನು ಎರಡು ವರ್ಷದ ಒಳಗೆ ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸುವುದು ನೂರಕ್ಕೆ ನೂರು ಸತ್ಯ. ಎಚ್.ಎನ್ ವ್ಯಾಲಿ ನೀರು ಅಶುದ್ಧ ಎನ್ನುವವರ ಮಾತಿಗೆ ಮನ್ನಣೆ ಕೊಡಬೇಕಾಗಿಲ್ಲ. ಈ ಎರಡು ಯೋಜನೆಗಳಿಂದ ಈ ಭಾಗಕ್ಕೆ ನೀರು ಬಂದಾಗ ರೈತರಲ್ಲಿ ಹೊಸ ಕಳೆ ಬರಲಿದೆ’ ಎಂದರು.

‘ರೈತರು ಇವತ್ತು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ದೆಹಲಿಯಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡಿದರೆ ಪ್ರಧಾನಿ ನರೇಂದ್ರ ಮೋದಿ ಅವರು ಆ ಕಡೆ ತಿರುಗಿ ಸಹ ನೋಡಲಿಲ್ಲ. ರೈತರ ಸಾಲವನ್ನು ಸಹ ಮನ್ನಾ ಮಾಡಲಿಲ್ಲ. ಆದರೆ ಹಿಂದೆ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ರೈತರ ಸಾಲ ಮನ್ನಾ ಮಾಡಿ, ನುಡಿದಂತೆ ನಡೆದಿತ್ತು’ ಎಂದು ಹೇಳಿದರು.

ಉಸ್ತುವಾರಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಮಾತನಾಡಿ, ‘ಪಿಎಲ್‌ಡಿ ಬ್ಯಾಂಕಿನಲ್ಲಿ ರೈತರು ಪಡೆದ ಸಾಲದ ಬಡ್ಡಿ ಮನ್ನಾ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಬಹಳ ಸಮಸ್ಯೆ ಇದೆ. ಇದೇ ರೀತಿ ಮುಂದುವರೆದರೆ ಪರಿಸ್ಥಿತಿ ಬಹಳ ಕಷ್ಟವಾಗುತ್ತದೆ. ಆದ್ದರಿಂದ ನೀರಾವರಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಬೇಕಾಗಿದೆ’ ಎಂದು ತಿಳಿಸಿದರು.

ಶಾಸಕ ಡಾ.ಕೆ.ಸುಧಾಕರ್, ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್.ಕೇಶವರೆಡ್ಡಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಸದಸ್ಯ ತಿರುಮಳಪ್ಪ, ನಗರಸಭೆ ಅಧ್ಯಕ್ಷ ಎಂ.ಮುನಿಕೃಷ್ಣ, ಕೋಚಿಮುಲ್ ನಿರ್ದೇಶಕ ಕೆ.ವಿ ನಾಗರಾಜ್, ಪಿಎಲ್‌ಡಿ ಬ್ಯಾಂಕ್ ಪ್ರಧಾನ ಕಚೇರಿ ಅಧ್ಯಕ್ಷ ಕೆ.ಷಡಕ್ಷರಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಮೋಹನ್ ರೆಡ್ಡಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ನಾಗೇಶ್, ಉಪಾಧ್ಯಕ್ಷ ಅಕ್ಕಲಮ್ಮ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೇಶವರೆಡ್ಡಿ, ಮುಖಂಡರಾದ ಯಲುವಹಳ್ಳಿ ಎನ್.ರಮೇಶ್, ಮರಳುಕುಂಟೆ ಕೃಷ್ಣಮೂರ್ತಿ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !