ಕುಡಿಯುವ ನೀರಿಗೆ ಆದ್ಯತೆ ನೀಡಿ

ಮಂಗಳವಾರ, ಮಾರ್ಚ್ 26, 2019
31 °C
ತಾಲ್ಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕ ಡಾ.ಕೆ. ಸುಧಾಕರ್ ಸಲಹೆ

ಕುಡಿಯುವ ನೀರಿಗೆ ಆದ್ಯತೆ ನೀಡಿ

Published:
Updated:
Prajavani

ಚಿಕ್ಕಬಳ್ಳಾಪುರ: ‘ಪ್ರತಿ ಹಳ್ಳಿಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಸಮಸ್ಯೆ ಕಾಣಿಸಿಕೊಂಡ ಕಡೆಗಳಲ್ಲಿ ಟ್ಯಾಂಕರ್ ಅಥವಾ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಕೆಗೆ ಕ್ರಮಕೈಗೊಳ್ಳಬೇಕು’ ಎಂದು ಶಾಸಕ ಡಾ.ಕೆ. ಸುಧಾಕರ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತಾಲ್ಲೂಕು ಪಂಚಾಯಿತಿಯಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಅಧ್ಯಕ್ಷರಿಗೆ ಕುಡಿಯುವ ನೀರು ಮತ್ತು ಬರ ನಿರ್ವಹಣೆಗೆ ಬಗ್ಗೆ ಶಾಸಕರು ಸಲಹೆ, ಸೂಚನೆಗಳನ್ನು ನೀಡಿದರು.

‘ಮುಂದಿನ ಮೂರು ತಿಂಗಳಲ್ಲಿ ಜನರಿಗೆ ಮಾತ್ರವಲ್ಲದೆ ಜಾನುವಾರುಗಳಿಗೂ ಸಹ ಲೆಕ್ಕಾಚಾರದ ಮೇಲೆ ಕುಡಿಯುವ ನೀರು ಒದಗಿಸಬೇಕು. ನೀರಿನ ಸಮಸ್ಯೆ ಕಾಣಿಸಿಕೊಳ್ಳುವ ಸಣ್ಣ ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ಹಾಗೂ ದೊಡ್ಡ ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿ ಮೂಲಕ ನೀರು ಪೂರೈಸಲು ಕ್ರಮಕೈಗೊಳ್ಳಬೇಕು’ ಎಂದು ಹೇಳಿದರು.

‘ಜಕ್ಕಲಮಡುಗು ಜಲಾಶಯದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ₹75 ಲಕ್ಷ ಅನುದಾನ ಬಿಡುಗಡೆ ಮಾಡಿ ನಾಲ್ಕು ತಿಂಗಳಾಗಿದೆ. ಆದರೆ ಗುತ್ತಿಗೆದಾರ ಈವರೆಗೆ ಆ ಕಾಮಗಾರಿ ಕೈಗೆತ್ತಿಕೊಂಡಿಲ್ಲ. ಕುಡಿಯುವ ನೀರಿನ ವಿಚಾರದಲ್ಲಿ ನಿರ್ಲಕ್ಷ್ಯ ಮಾಡುವುದು ಬೇಸರದ ಸಂಗತಿ. ಸಂಬಂಧಪಟ್ಟ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಮಂಚೇನಹಳ್ಳಿ ಹೋಬಳಿ ಗೌರಿಬಿದನೂರು ತಾಲ್ಲೂಕಿಗೆ ಸೇರಿದರೂ ಅದು ನಮ್ಮ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಅಧಿಕಾರಿಗಳು ಆ ಹೋಬಳಿಯ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡಬೇಕು. ಅಲ್ಲಿ ನೀರಿನ ಸಮಸ್ಯೆ ತುಂಬಾ ಇದೆ. ನನಗೆ ಅನೇಕ ಬಾರಿ ದೂರುಗಳು ಬರುತ್ತಿವೆ. ಈ ಬಗ್ಗೆ ಗಮನ ಹರಿಸಬೇಕು’ ಎಂದು ಹೇಳಿದರು.

‘ ಕಾಟನಾಗೇನಹಳ್ಳಿಗೆ ಕೊಳವೆಬಾವಿ ಮಂಜೂರು ಆಗಿ ಎರಡು ತಿಂಗಳು ಕಳೆದಿದೆ. ಆದರೆ ಈವರೆಗೆ ಅಲ್ಲಿ ಕೊಳವೆಬಾವಿ ಕೊರೆಯಿಸಲು ಅಧಿಕಾರಿಗಳು ಕ್ರಮಕೈಗೊಂಡಿಲ್ಲ. ಸರ್ಕಾರ ಹಣ ಕೊಟ್ಟಾಗಲೂ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ. ಬರಗಾಲ ತೀವ್ರವಾದಾಗಲೂ ಅಧಿಕಾರಿಗಳು ಎಚ್ಚೆತ್ತುಕೊಳ್ಳದಿದ್ದರೆ ಕಷ್ಟ. ಸಂಬಂಧಪಟ್ಟ ಕಿರಿಯ ಎಂಜಿನಿಯರ್ ನಾರಾಯಣಪ್ಪ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಅವರಿಗೆ ಪತ್ರ ಬರೆಯಿರಿ’ ಎಂದು ಶಾಸಕರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅವರಿಗೆ ಸೂಚಿಸಿದರು.

‘ಮಂಚೇನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ 63 ಹಳ್ಳಿಗಳು ಬರುತ್ತವೆ. ಆ ಹಳ್ಳಿಗಳಿಗೆ ದಂಡಿಗಾನಹಳ್ಳಿ ಡ್ಯಾಮ್‌ನಿಂದ ಕುಡಿಯುವ ನೀರು ಒದಗಿಸುವ ಯೋಜನೆ ರೂಪಿಸಬೇಕಾಗಿದೆ. ಆದ್ದರಿಂದ ಅಧಿಕಾರಿಗಳು ಈ ಬಗ್ಗೆ ನಾಗರಿಕರು, ರೈತರು, ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಿ ವರದಿ ನೀಡಿ’ ಎಂದು ತಿಳಿಸಿದರು.

‘ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಬಡಾವಣೆಗಳಲ್ಲಿ ಮನೆ ನಿರ್ಮಾಣ ಮಾಡುವವರು ಗ್ರಾಮ ಪಂಚಾಯಿತಿ, ಜಿಲ್ಲಾಧಿಕಾರಿ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನುಮೋದನೆ ಪಡೆಯಬೇಕು. ಆದರೆ ನಂದಿ ಹೋಬಳಿ ಹಾಗೂ ಕಸಬಾ ಹೋಬಳಿಯಲ್ಲಿ ಪಂಚಾಯಿತಿ ಅಧಿಕಾರಿಗಳು ಅಧ್ಯಕ್ಷರ ಮಾತುಗಳು ಕೇಳಿ ಅನುಮೋದನೆ ನೀಡುತ್ತಿರುವುದು ಕಂಡುಬಂದಿದ್ದು, ಹೀಗೆ ಮಾಡಿದರೆ ಅಧಿಕಾರಿಗೆ ತೊಂದರೆ ಸಿಲುಕಿ, ಕೆಲಸ ಕಳೆದುಕೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಸದಸ್ಯ ತಿರುಮಳಪ್ಪ, ತಹಶೀಲ್ದಾರ್ ನರಸಿಂಹಮೂರ್ತಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವಪ್ಪ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !