ಭಾನುವಾರ, ಸೆಪ್ಟೆಂಬರ್ 15, 2019
23 °C
ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಧೋರಣೆಗೆ ಅಸಮಾಧಾನ

ಮಾಧ್ಯಮಗಳನ್ನು ಹತ್ತಿಕ್ಕಲು ಸಮ್ಮಿಶ್ರ ಸರ್ಕಾರದಲ್ಲಿ ಸೇಡಿನ ಕ್ರಮ: ಬಿಜೆಪಿ

Published:
Updated:
Prajavani

ಚಿಕ್ಕಬಳ್ಳಾಪುರ: ಕೆಲ ತಿಂಗಳಿಂದ ರಾಜ್ಯ ಸಮ್ಮಿಶ್ರ ಸರ್ಕಾರ ಮಾಧ್ಯಮಗಳನ್ನು ಮತ್ತು ತನ್ನ ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ಸೇಡಿನ ಕ್ರಮಕ್ಕೆ ಮುಂದಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ನಗರದ ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಜಿ.ವಿ.ಮಂಜುನಾಥ್ ಮಾತನಾಡಿ, ‘ಬಿಜೆಪಿ ತನ್ನ ವಿರುದ್ಧ ನಡೆಯುತ್ತಿರುವ ಸೇಡಿನ ಕ್ರಮಗಳ ಬಗ್ಗೆ ದೂರುಗಳನ್ನು ನೀಡಿದರೂ ಈವರೆಗೆ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಬದಲು ರಾಜಕೀಯ ಎದುರಾಳಿಗಳ ವಿರುದ್ಧ ಪ್ರತೀಕಾರದ ಕ್ರಮಕ್ಕೆ ಮುಂದಾಗಿದೆ’ ಎಂದು ಆರೋಪಿಸಿದರು.

‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಬಿಜೆಪಿ ದೂರು ನೀಡಿದೆ. ಆದರೆ ಈವರೆಗೆ ರಾಜ್ಯ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇಂತಹ ಹೇಳಿಕೆಗಳಿಂದ ಜನರ ನಡುವೆ ದ್ವೇಷದ ವಾತಾವರಣ ಮೂಡಿಸಿ, ಸಾಮಾಜಿಕ ಸಾಮರಸ್ಯ ಕೆಡಿಸುವಂತಹ ಗಂಭೀರ ಅಪಾಯವಿದ್ದರೂ ರಾಜ್ಯ ಸರ್ಕಾರ ಕ್ರಮಕೈಗೊಳ್ಳದೆ ಪಕ್ಷಪಾತಿ ಧೋರಣೆ ತೋರುತ್ತಿದೆ’ ಎಂದು ಹೇಳಿದರು.

‘ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾಧ್ಯಮ ಪ್ರತಿನಿಧಿನಿಧಿಗಳನ್ನು ದೂಷಿಸುವುದು, ಬಹಿಷ್ಕರಿಸುವುದು ಮಾಡುತ್ತಿದ್ದಾರೆ. ಇದರಿಂದ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮಗಳನ್ನು ನಿಯಂತ್ರಿಸಲು ಹೊರಟಿದ್ದಾರೆ. ಸಮ್ಮಿಶ್ರ ಸರ್ಕಾರವನ್ನು ವಿರೋಧಿಸುವವರ ಧ್ವನಿ ಅಡಗಿಸಲು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ನಡೆಯುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಲಕ್ಷ್ಮೀ ನಾರಾಯಣ ಗುಪ್ತಾ, ಮಂಡಲ ಅಧ್ಯಕ್ಷ ಅಗಲಗುರ್ಕಿ ಚಂದ್ರಶೇಖರ್‌, ಎಸ್ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತಪ್ಪ, ನಗರ ಘಟಕದ ಅಧ್ಯಕ್ಷ ಮಂಜುನಾಥ್, ಯುವ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಾಲು, ನಗರ ಯುವ ಮೋರ್ಚಾ ಘಟಕದ ಅಧ್ಯಕ್ಷ ಮಧುಚಂದ್ರ, ಜಿಲ್ಲಾ ವಕ್ತಾರ ಲಕ್ಷ್ಮಿಪತಿ ಭಾಗವಹಿಸಿದ್ದರು.

Post Comments (+)