ಗುರುವಾರ , ಸೆಪ್ಟೆಂಬರ್ 23, 2021
24 °C
ಪ್ರತಿಭಟನಾ ಸಭೆಯಲ್ಲಿ ಸಂಸದ

ಮೇ 24ರಂದು ಸಮ್ಮಿಶ್ರ ಸರ್ಕಾರ ಪತನ: ನಳಿನ್‌ಕುಮಾರ್‌ ಕಟೀಲ್‌ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಮೇ 23ರಂದು ಮತ ಎಣಿಕೆಯ ಬಳಿಕ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭಾರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ. ಮೇ 24ರಂದೇ ರಾಜ್ಯದ ಜೆಡಿಎಸ್‌– ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂದು ಸಂಸದ ನಳಿನ್‌ಕುಮಾರ್‌ ಕಟೀಲ್‌ ಹೇಳಿದರು.

ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಟೀಕಿಸುವ ಪತ್ರಕರ್ತರು ಮತ್ತು ಸಾರ್ವಜನಿಕರ ಮೇಲೆ ಗೃಹ ಸಚಿವ ಎಂ.ಬಿ.ಪಾಟೀಲ್‌ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ನಡೆಸಿದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಗೃಹ ಸಚಿವರು ಪೊಲೀಸ್‌ ಬಲ ದುರ್ಬಳಕೆ ಮಾಡಿಕೊಂಡು ತಮ್ಮ ವಿರೋಧಿಗಳನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸುವವರು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಪ್ರಾಯ ಹಂಚಿಕೊಳ್ಳುವವರನ್ನು ಬಂಧಿಸಿ, ಜೈಲಿಗೆ ಕಳುಹಿಸಲಾಗುತ್ತಿದೆ. ದೇಶದಲ್ಲಿ ಪ್ರಜಾಪ್ರಭುತ್ವವಿದೆ ಎಂಬುದನ್ನು ಮುಖ್ಯಮಂತ್ರಿ ಮರೆತಿದ್ದಾರೆ. ಸಮ್ಮಿಶ್ರ ಸರ್ಕಾರದ ಪಾಲುದಾರರು ಇದಕ್ಕೆ ತಕ್ಕ ಬೆಲೆ ತೆರಲಿದ್ದಾರೆ ಎಂದರು.

ಗೃಹ ಸಚಿವರು ಬರೆದಿದ್ದಾರೆ ಎನ್ನಲಾದ ಪತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್‌ ಮಾಡಿರುವ ಆರೋಪದ ಮೇಲೆ ಕೆಲವರನ್ನು ಬಂಧಿಸಲಾಗಿದೆ. ಗೃಹ ಸಚಿವರ ಆಣತಿಯಂತೆ ಪೊಲೀಸರು ಈ ಕೆಲಸ ಮಾಡಿದ್ದಾರೆ. ಬಂಧಿತರಾಗಿದ್ದ ಮಹೇಶ್‌ ವಿಕ್ರಂ ಹೆಗ್ಡೆ, ಶೃತಿ ಬೆಳ್ಳಕ್ಕಿ, ಶಾರದಾ ಡೈಮಂಡ್‌, ಹೇಮಂತ್‌ ಕುಮಾರ್‌ ಮತ್ತು ಅಜಿತ್‌ ಶೆಟ್ಟಿ ಹೇರಂಜಿ ಅವರನ್ನು ಪೊಲೀಸರು ಮಾನಸಿಕವಾಗಿ ಹಿಂಸಿಸಿದ್ದಾರೆ ಎಂದು ನಳಿನ್‌ ದೂರಿದರು.

‘ಮೇ 24ರ ನಂತರ ಪರಿಸ್ಥಿತಿ ಅದಲು ಬದಲಾಗಲಿದೆ. ಜೈಲಿನಲ್ಲಿರುವ ಪತ್ರಕರ್ತರು ಹೊರ ಬರುತ್ತಾರೆ. ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಎಂ.ಬಿ.ಪಾಟೀಲ್‌ ಜೈಲು ಸೇರುತ್ತಾರೆ’ ಎಂದರು.

ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್‌, ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವರು ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಸರ್ಕಾರ ಪತನವಾಗುವುದು ಕುಮಾರಸ್ವಾಮಿ ಅವರಿಗೆ ಗೊತ್ತಾಗಿದೆ. ಇದೇ ಕಾರಣದಿಂದ ಅವರು ‘ಆರಾಮಸ್ವಾಮಿ’ಯಾಗಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್‌ ಮಾತನಾಡಿ, ‘ಪ್ರಧಾನಿಯನ್ನು ಕೊಲೆ ಮಾಡಲು ಕರೆ ನೀಡಿದ್ದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ. ಆದರೆ, ಸಮ್ಮಿಶ್ರ ಸರ್ಕಾರದ ವಿರುದ್ಧ ಮಾತನಾಡಿದವರ ಧ್ವನಿ ಅಡಗಿಸುವ ಕೆಲಸ ಮಾಡಲಾಗುತ್ತಿದೆ. ಸಮ್ಮಿಶ್ರ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಏನನ್ನೂ ಮಾಡುತ್ತಿಲ್ಲ’ ಎಂದು ದೂರಿದರು.

ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ರವಿಶಂಕರ ಮಿಜಾರು, ವಿಧಾನ ಪರಿಷತ್‌ನ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಮಾತನಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.