ಶನಿವಾರ, ಸೆಪ್ಟೆಂಬರ್ 18, 2021
27 °C
ಮೇ 23ರ ನಂತರ ವಾಣಿಜ್ಯ ಬ್ಯಾಂಕ್‌ಗಳಿಗೆ ಹಣ ಬಿಡುಗಡೆ

ರೈತರ ಸಾಲ ಮನ್ನಾ: ಚುರುಕು ಮುಟ್ಟಿಸಿದ ಮುಖ್ಯಮಂತ್ರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರೈತರ ಸಾಲ ಮನ್ನಾ ಯೋಜನೆಯನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಾರಕ್ಕೊಮ್ಮೆ ಪ್ರಗತಿ ಪರಿಶೀಲನೆ ನಡೆಸಲು ಸೂಚಿಸಿದ್ದಾರೆ. 

ಸಹಕಾರ ಸಚಿವರು ಹಾಗೂ ಸಹಕಾರ, ಆರ್ಥಿಕ ಇಲಾಖೆ ಅಧಿಕಾರಿಗಳ ಜತೆ ಬುಧವಾರ ನಡೆಸಿದ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ.

ಕಳೆದ ಡಿಸೆಂಬರ್ ತಿಂಗಳಿನಿಂದ ಈವರೆಗೆ ಸಹಕಾರ ಸಂಘಗಳ 8.3 ಲಕ್ಷ ರೈತರಿಗೆ ₹3,500 ಕೋಟಿ, ವಾಣಿಜ್ಯ ಬ್ಯಾಂಕುಗಳ 7.5 ಲಕ್ಷ ರೈತರಿಗೆ ₹3,930 ಕೋಟಿ ಬಿಡುಗಡೆ ಮಾಡಲಾಗಿದೆ. ಇನ್ನೂ ವಾಣಿಜ್ಯ ಬ್ಯಾಂಕ್‌ಗಳ 1.5 ಲಕ್ಷ ರೈತರಿಗೆ ಸುಮಾರು ₹900 ಕೋಟಿ ಹಣ ಬಿಡುಗಡೆಗೆ ಮಾಡಬೇಕಿದ್ದು, ಮೇ 23ರ ನಂತರ ಬಿಡುಗಡೆ ಮಾಡಲಾಗುವುದು. ಒಟ್ಟಾರೆಯಾಗಿ ಸಹಕಾರ ಹಾಗೂ ವಾಣಿಜ್ಯ ಬ್ಯಾಂಕ್‌ಗಳ 15.5 ಲಕ್ಷ ರೈತರ ₹7,417 ಕೋಟಿ ಮನ್ನಾ ಮಾಡಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ರೈತರ ಸಾಲ ಮನ್ನಾ ಯೋಜನೆಯನ್ನು ವೈಜ್ಞಾನಿಕವಾಗಿ ಅನುಷ್ಠಾನಗೊಳಿಸುತ್ತಿದ್ದು, ನಿಯಮಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ರೈತರ ಸಾಲ ಮನ್ನಾ ಪ್ರಕ್ರಿಯೆ ಆರ್ಥಿಕ ವರ್ಷದಲ್ಲೇ ಪೂರ್ಣಗೊಳ್ಳಲಿದೆ. ಸಾಲ ಮನ್ನಾ ಯೋಜನೆಗೆ ಹಣಕಾಸು ಕೊರತೆ ಇರುವುದಿಲ್ಲ. ಈಗಾಗಲೇ ಪ್ರಕಟಿಸಿರುವ ಯೋಜನೆಗಳಿಗೆ ಸಾಲ ಮನ್ನಾದಿಂದ ಯಾವುದೇ ಅಡ್ಡಿಯೂ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಪಶುಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ಸಭೆಯಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು