ಲೋಕಸಭೆ ಚುನಾವಣೆ ಮತ ಎಣಿಕೆ: ಮೇ 23 ರಂದು ನಿಷೇಧಾಜ್ಞೆ ಜಾರಿ

ಗುರುವಾರ , ಜೂನ್ 20, 2019
31 °C
ದೇವನಹಳ್ಳಿ ತಾಲ್ಲೂಕಿನ ನಾಗಾರ್ಜುನ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಣಿಕೆ ಕಾರ್ಯ

ಲೋಕಸಭೆ ಚುನಾವಣೆ ಮತ ಎಣಿಕೆ: ಮೇ 23 ರಂದು ನಿಷೇಧಾಜ್ಞೆ ಜಾರಿ

Published:
Updated:
Prajavani

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುವ ಮೇ 23 ರಂದು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಅವರು ಮೇ 23 ರಂದು ಬೆಳಿಗ್ಗೆ 6 ರಿಂದ ಮೇ 24 ರ ಮಧ್ಯರಾತ್ರಿ 12-ರ ವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ –7ಕ್ಕೆ ಹೊಂದಿಕೊಂಡಿರುವ ನಾಗಾರ್ಜುನ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೇ 23 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಶಾಂತಿಯುತವಾಗಿ ಮತ ಎಣಿಕೆಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅವರು ಇತ್ತೀಚೆಗೆ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.

ನಿಷೇಧಾಜ್ಞೆ ಅವಧಿಯಲ್ಲಿ ಸಾರ್ವಜನಿಕರು ಸಕಾರಣವಿಲ್ಲದೇ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮುಂತಾದವುಗಳಲ್ಲಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಚಿ, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿರ್ಬಂಧಿಸಲಾಗಿದೆ.

ಸಾರ್ವಜನಿಕವಾಗಿ ಕೂಗುವುದಾಗಲಿ ಅಥವಾ ಪದ ಹಾಡುವುದು, ಚೇಷ್ಟೆ, ಸಂಜ್ಞೆಗಳನ್ನು ಮಾಡುವುದು, ಪ್ರಕಟಣಾ ಪತ್ರಿಕೆಗಳ ಅಥವಾ ಇತರ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿ ಪತ್ರಗಳನ್ನು ಅಂಟಿಸುವುದರಿಂದ, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥೀಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವಂತೆ ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿದೆ.

ಯಾವುದೇ ರೀತಿಯ ಬಂದ್, ಪ್ರತಿಭಟನೆ, ಮುಷ್ಕರ, ಪ್ರತಿಕೃತಿ ದಹನ, ಪ್ರದರ್ಶನ, ಪೂರಕ ಚಟುವಟಿಕೆಗಳು, ಯಾವುದೇ ಖಾಸಗಿ, ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ಹಾನಿಗೊಳಿಸುವ ಹಾಗೂ ವಿರೂಪಗೊಳಿಸುವ ಎಲ್ಲಾ ರೀತಿಯ ಚಟುವಟಿಕೆಗಳನ್ನು ಮತ್ತು ಯಾವುದೇ ವ್ಯಕ್ತಿಯ ಜಾತಿ- ಧರ್ಮ, ಕೋಮು, ಪಂಥಗಳಿಗೆ ಅಥವಾ ಸಾರ್ವಜನಿಕ ನೈತಿಕತೆಗೆ ಬಾಧಕ ಉಂಟುಮಾಡಬಹುದಾಂತಹ ಚಟುವಟಿಕೆಗಳನ್ನು ನಿಷೇಧಿಸಿದೆ.

ಮೇ 23 ರಂದು ನಡೆಯುವ ಸಂತೆ, ಜಾತ್ರೆಗಳನ್ನು ನಿಷೇಧಿಸಿದೆ. ಸರ್ಕಾರಿ ಸಂಸ್ಥೆಗಳು, ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ, ಸಿಬ್ಬಂದಿ ನಿಂದಿಸುವಂತಹ, ಅವಹೇಳನಕಾರಿ ಘೋಷಣೆಗಳು, ಭಾಷಣದ ಪ್ರಕಟಣೆಗಳು, ಅವಾಚ್ಯ ಶಬ್ಧಗಳ ಬಳಕೆ, ಆವೇಶಕಾರಿ, ಪ್ರಚೋದನಾಕಾರಿ ಭಾಷಣದಂತಹ ಚಟುವಟಿಗಳನ್ನು ನಿಷೇಧಿಸಲಾಗಿದೆ.

ಚುನಾವಣಾ ಆಯೋಗದ ನಿರ್ದೇಶನದಂತೆ ಎಣಿಕೆ ಕೇಂದ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿದೆ. ಈ ನಿಷೇಧಾಜ್ಞೆಯು ಸರ್ಕಾರಿ ಕಾರ್ಯಕ್ರಮಗಳು, ಅಧಿಕಾರಿ, ಸಿಬ್ಬಂದಿ, ಮದುವೆ, ಶುಭ ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಶವ ಸಂಸ್ಕಾರಕ್ಕೆ ಹಾಗೂ ಚುನಾವಣಾ ಸಂಬಂಧ ಏರ್ಪಡಿಸಲಾಗಿರುವ ಮತ ಕೇಂದ್ರಕ್ಕೆ ಅನ್ವಯಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !