ಕಾಂಗ್ರೆಸ್‌ ಕಚೇರಿ ಎದುರು ವಿಜಯೋತ್ಸವ: ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

ಗುರುವಾರ , ಜೂನ್ 27, 2019
29 °C
ವಿಜಯೋತ್ಸವ ಆಚರಿಸಲು ಯತ್ನ

ಕಾಂಗ್ರೆಸ್‌ ಕಚೇರಿ ಎದುರು ವಿಜಯೋತ್ಸವ: ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

Published:
Updated:

ಮಂಗಳೂರು: ಗುರುವಾರ ಮಧ್ಯಾಹ್ನ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಕದ್ರಿ ಮಲ್ಲಿಕಟ್ಟೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿ ಎದುರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲು ಯತ್ನಿಸಿ, ತಡೆಯಲು ಬಂದ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಮಂಗಳೂರು ಪೂರ್ವ (ಕದ್ರಿ) ಪೊಲೀಸ್‌ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್‌) ದಾಖಲಿಸಲಾಗಿದೆ.

ಮತ ಎಣಿಕೆಯ ದಿನದಂದು ನಗರದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ಬಿಜೆಪಿ ಕಾರ್ಯಕರ್ತರ ಗುಂಪೊಂದು ಕಾಂಗ್ರೆಸ್‌ ಕಚೇರಿ ಎದುರು ರಸ್ತೆಯ ಮಧ್ಯದಲ್ಲೇ ಪಟಾಕಿ ಸಿಡಿಸಿ, ವಿಜಯೋತ್ಸವ ಆಚರಿಸಲು ಬರುತ್ತಿರುವ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಸ್ಥಳಕ್ಕೆ ಬಂದ ಕದ್ರಿ ಠಾಣೆ ಪೊಲೀಸರು, ವಿಜಯೋತ್ಸವ ಆಚರಿಸದಂತೆ ತಡೆದಿದ್ದರು.

ರಸ್ತೆಯ ಮಧ್ಯದಲ್ಲಿ ಪಟಾಕಿ ಸಿಡಿಸದಂತೆ ಮತ್ತು ಕಾಂಗ್ರೆಸ್‌ ಕಚೇರಿ ಎದುರು ವಿಜಯೋತ್ಸವ ಆಚರಿಸದಂತೆ ಪೊಲೀಸರು ಸೂಚನೆ ನೀಡಿದ್ದನ್ನು ಗುಂಪಿನಲ್ಲಿದ್ದ ಕೆಲವರು ವಿರೋಧಿಸಿದ್ದಾರೆ. ಪೊಲೀಸ್‌ ಸಿಬ್ಬಂದಿಯೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ. ಈ ಎಲ್ಲರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

‘ಪೊಲೀಸರು ಸಮಯೋಚಿತವಾಗಿ ಕ್ರಮ ಕೈಗೊಂಡಿದ್ದಾರೆ. ನಿಷೇಧಾಜ್ಞೆ ಉಲ್ಲಂಘಿಸಿರುವುದು ಮತ್ತು ಪೊಲೀಸರೊಂದಿಗೆ ಕೆಟ್ಟದಾಗಿ ವರ್ತಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಮಾಡಲಾಗುವುದು’ ಎಂದು ಪೊಲೀಸ್‌ ಕಮಿಷನರ್‌ ಸಂದೀಪ್‌ ಪಾಟೀಲ್‌ ತಿಳಿಸಿದ್ದಾರೆ.

ಸಿಬ್ಬಂದಿಗೆ ಮೆಚ್ಚುಗೆ ಪತ್ರ:

ಕಾಂಗ್ರೆಸ್‌ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸುವುದನ್ನು ತಡೆಯುವ ಮೂಲಕ ಅಹಿತಕರ ಘಟನೆ ನಡೆಯದಂತೆ ತಪ್ಪಿಸಿರುವ ಕದ್ರಿ ಠಾಣೆ ಕಾನ್‌ಸ್ಟೆಬಲ್‌ಗಳಾದ ಗಿರೀಶ್ ಜೋಗಿ, ಹೇಮಲತಾ ಮತ್ತು ಲತಾ ಅವರನ್ನು ಶುಕ್ರವಾರ ತಮ್ಮ ಕಚೇರಿಗೆ ಕರೆಸಿಕೊಂಡ ಪೊಲೀಸ್‌ ಕಮಿಷನರ್‌, ಸಿಬ್ಬಂದಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲರಿಗೂ ಶ್ಲಾಘನೆ ಪತ್ರ ವಿತರಿಸಿ ಗೌರವಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !