ಕಬ್ಬಿನ ಬಾಕಿ ಬಿಲ್‌ ಪಾವತಿ: ವಿಧಾನಸೌಧದ ಮುಂದೆ ಪ್ರತಿಭಟನೆ ಜೂನ್ 4ಕ್ಕೆ

ಬುಧವಾರ, ಜೂನ್ 19, 2019
28 °C
ಬಿಲ್‌ ಪಾವತಿಗೆ ಕುರಬೂರ ಶಾಂತಕುಮಾರ ಒತ್ತಾಯ

ಕಬ್ಬಿನ ಬಾಕಿ ಬಿಲ್‌ ಪಾವತಿ: ವಿಧಾನಸೌಧದ ಮುಂದೆ ಪ್ರತಿಭಟನೆ ಜೂನ್ 4ಕ್ಕೆ

Published:
Updated:

ಬಾಗಲಕೋಟೆ: ‘ಕಾರ್ಖಾನೆ ಮಾಲೀಕರಿಂದ ರೈತರಿಗೆ ಕಬ್ಬಿನ ಬಾಕಿ ಹಣ ಕೊಡಿಸಬೇಕು ಎಂದು ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಜೂನ್‌ 4 ರಂದು ಬೆಂಗಳೂರಿನ ವಿಧಾನಸೌಧ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಕುರಬೂರು ಶಾಂತಕುಮಾರ್ ಹೇಳಿದರು.

‘ಕಳೆದ ಹಂಗಾಮಿನಲ್ಲಿ ರಾಜ್ಯದ 67 ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರೈತರಿಗೆ ಆರು ತಿಂಗಳಾದರು ಬಿಲ್ ಪಾವತಿಯಾಗಿಲ್ಲ. ವಾಸ್ತವವಾಗಿ ಸಕ್ಕರೆ ನಿಯಂತ್ರಣ ಕಾಯ್ದೆ 1966ರ ಪ್ರಕಾರ ಕಾರ್ಖಾನೆಗೆ ಕಬ್ಬು ಪೂರೈಕೆ ಮಾಡಿದ 14 ದಿನಗಳ ಒಳಗಾಗಿ ಹಣ ಪಾವತಿಸಬೇಕು ಎಂಬ ನಿಯಮವಿದ್ದರೂ ಕಾರ್ಖಾನೆ ಮಾಲೀಕರು ಅದನ್ನು ನಿರ್ಲಕ್ಷಿಸುತ್ತಿದ್ದಾರೆ’ ಎಂದು ಇಲ್ಲಿ ಮಂಗಳವಾರ  ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

‘ರಾಜ್ಯದ ಸಕ್ಕರೆ ಕಾರ್ಖಾನೆಗಳು ₹ 3 ಸಾವಿರ ಕೋಟಿಗೂ ಹೆಚ್ಚಿನ ಹಣವನ್ನು ಬಾಕಿ ಉಳಿಸಿಕೊಂಡಿವೆ. ಇದರಿಂದ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಆದಷ್ಟು ಬೇಗ ಕಬ್ಬಿನ ಬಾಕಿ ಹಣವನ್ನು ಕಾರ್ಖಾನೆ ಮಾಲೀಕರಿಂದ ಕೊಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಸಕ್ಕರೆ ಕಾರ್ಖಾನೆಗಳು ಕಬ್ಬಿನ ಎಫ್‌ಆರ್‌ಪಿಯ ಅಂದಾಜು ₹ 900 ಕೋಟಿಯನ್ನು ಬಾಕಿ ಉಳಿಸಿಕೊಂಡಿವೆ. ಸರ್ಕಾರ ಈಗಲಾದರೂ ಕಠಿಣ ಕ್ರಮಕ್ಕೆ ಮುಂದಾಗಬೇಕು. ಕಾಯ್ದೆ ಪ್ರಕಾರ ಜೈಲು ಹಾಗೂ ದಂಡ ವಿಧಿಸುವ ಮೂಲಕ ಕಾರ್ಖಾನೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ತೀವ್ರ ಬರಗಾಲದ ಛಾಯೆ ಇದೆ. ಗ್ರಾಮೀಣ ಭಾಗದಲ್ಲಿ ಜನ ಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ಹಾಗಾಗಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಕ್ಷೇತ್ರಗಳಲ್ಲಿ ಸಂಚರಿಸಿ ನೀರು ಹಾಗೂ ಮೇವಿನ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ತುರ್ತಾಗಿ ಕ್ರಮ ಕೈಗೊಳ್ಳಬೇಕಿದೆ’ ಎಂದರು. 

‘ಎಸ್‌ಎಪಿ ಪ್ರಕಾರ ಕಬ್ಬಿನ ಉಪ ಉತ್ಪನ್ನಗಳಿಂದ ಬಂದ ಲಾಭದಲ್ಲಿ ರೈತರಿಗೂ ಹಂಚಿಕೆ ಮಾಡಬೇಕು. ಈ ನಿಟ್ಟಿನಲ್ಲಿ ಸಕ್ಕರೆ ಆಯುಕ್ತರು ಹಾಗೂ ಆಯಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದರು.

ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಸುರೇಶ ಪಾಟೀಲ, ಸಂಘಟನಾ ಕಾರ್ಯದರ್ಶಿ ಅತ್ತಿಹಳ್ಳಿ ದೇವರಾಜ್, ಶ್ರೀಧರ ಮಹೇಶವಾಡಗಿ ಇದ್ದರು.  

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !