ಸೋಮವಾರ, ಏಪ್ರಿಲ್ 12, 2021
23 °C
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ

ಅತ್ಯಾಚಾರ: ಸ್ವಯಂಪ್ರೇರಿತ ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಪುತ್ತೂರು ತಾಲ್ಲೂಕಿನಲ್ಲಿ ನಡೆದಿರುವ ಎರಡು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದ್ದು, ವಿಚಾರಣೆ ನಡೆಸಲಿದೆ ಎಂದು ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ತಿಳಿಸಿದರು.

ಶುಕ್ರವಾರ ನಡೆದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿನೀಡಿ, ಬಾಲಕಿಗೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಸಾಮೂಹಿಕ ಅತ್ಯಾಚಾರ ಪ್ರಕರಣದ ವರದಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆ ಆ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿದ್ದೆವು. ಈಗ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೇಲಿನ ಅತ್ಯಾಚಾರ ಪ್ರಕರಣವನ್ನೂ ವಿಚಾರಣೆಗೆ ಕೈಗೆತ್ತಿಕೊಂಡಿದ್ದೇವೆ’ ಎಂದರು.

ಎರಡೂ ಪ್ರಕರಣಗಳಲ್ಲಿ ದಕ್ಷಿಣ ಕನ್ನಡ ಪೊಲೀಸರು ಚುರುಕಾಗಿ ತನಿಖೆ ನಡೆಸುತ್ತಿದ್ದಾರೆ. ಅತ್ಯಾಚಾರದ ವಿಡಿಯೊ ತುಣುಕನ್ನು ವೈರಲ್‌ ಮಾಡಿದ್ದವರನ್ನೂ ಬಂಧಿಸಿರುವುದು ಉತ್ತಮ ಬೆಳವಣಿಗೆ. ಪೊಲೀಸರನ್ನು ಆಯೋಗ ಅಭಿನಂದಿಸುತ್ತದೆ. ತನಿಖೆಯನ್ನು ಬಲಪಡಿಸುವುದಕ್ಕೆ ಪೂರಕವಾಗಿ ಆಯೋಗದ ವಿಚಾರಣೆ ನಡೆಯಲಿದೆ ಎಂದು ಹೇಳಿದರು.

ಪರಿಹಾರಕ್ಕೆ ಸೂಚನೆ: ಎರಡೂ ಪ್ರಕರಣಗಳ ಸಂತ್ರಸ್ತರ ಭೇಟಿ ವೇಳೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳೂ ಹಾಜರಿದ್ದರು. ಇಲಾಖೆಯಿಂದ ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ವಿತರಣೆ ಮಾಡುವಂತೆ ಸೂಚಿಸಲಾಗಿದೆ. ಈ ಹೆಣ್ಣು ಮಕ್ಕಳು ಶಿಕ್ಷಣ ಮುಂದುವರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆಯೂ ನಿರ್ದೇಶನ ನೀಡಲಾಗಿದೆ ಎಂದರು.

‘ಮೊದಲ ಪ್ರಕರಣದಲ್ಲಿ 19 ವರ್ಷದ ಹುಡುಗರು ಆರೋಪಿಗಳಾಗಿದ್ದಾರೆ. ಎರಡನೇ ಪ್ರಕರಣದಲ್ಲಿ 28 ವರ್ಷದ ಯುವಕ ಆರೋಪಿ. ಅತ್ಯಾಚಾರಿಗಳಿಗೆ ಭಯವೇ ಇಲ್ಲದ ವಾತಾವರಣ ಸೃಷ್ಟಿಯಾಗಿದೆ. ಅತ್ಯಾಚಾರಿಗಳಲ್ಲಿ ಭಯ ಹುಟ್ಟಿಸುವಂತೆ ಪೊಲೀಸರು ಬಿಗಿಯಾದ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದರು.

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ. ಈ ದಿಸೆಯಲ್ಲಿ ಕಾರ್ಯಕ್ರಮವೊಂದನ್ನು ರೂಪಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಿಗೆ ಪತ್ರ ಬರೆಯಲಾಗುವುದು ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು